ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಸಿಎಲ್‌ನಿಂದ ಕೃಷಿಗೆ ಹಾನಿ: ಆಸ್ಕರ್

Last Updated 12 ಫೆಬ್ರುವರಿ 2011, 9:00 IST
ಅಕ್ಷರ ಗಾತ್ರ

ಪಡುಬಿದ್ರಿ: ಎಲ್ಲೂರು ಗ್ರಾ.ಪಂ ವ್ಯಾಪ್ತಿಯ ಯುಪಿಸಿಎಲ್ ಯೋಜನೆಯ ಹಾರುಬೂದಿಯಿಂದ ಸ್ಥಳೀಯ ನಿವಾಸಿಗಳಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಅರಿತುಕೊಳ್ಳಲು ಸಾಂತೂರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಭರವಸೆ ನೀಡಿದರು.

ಪಡುಬಿದ್ರಿ ಪಿಂಗಾರ ಸಭಾಭವನದಲ್ಲಿ ಶುಕ್ರವಾರ ನಡೆದ ಕಾಪು ಬ್ಲಾಕ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದರು.ಯುಪಿಸಿಎಲ್ ಯೋಜನೆಯಿಂದ ಸ್ಥಳೀಯ ಕೃಷಿ ಭೂಮಿಗೂ ಹಾನಿಯಾಗಿದ್ದು, ಹಾರುಬೂದಿಯಿಂದ ಸ್ಥಳೀಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಸ್ಥಳೀಯರೊಂದಿಗೆ ಚರ್ಚಿಸುತ್ತೇನೆ. ಇದಕ್ಕೆ ದಿನ ನಿಗದಿಪಡಿಸುವಂತೆ ಅವರು ಸೂಚಿಸಿದರು.

ಸುಮಾರು ಏಳು ವರ್ಷಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದಿದ್ದ ಹೆಜಮಾಡಿ ಮೀನುಗಾರಿಕಾ ಬಂದರಿಗೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇನೆ. ಇದಕ್ಕಾಗಿ ಕೇಂದ್ರದ ವಿಶೇಷ ಅನುದಾನ ದೊರಕಿಸುತ್ತೇನೆ. ಅಲ್ಲದೆ ಬೆಂಗಳೂರು-ಮಂಗಳೂರು ರೈಲು ಕಾರವಾರಕ್ಕೆ ವಿಸ್ತರಣೆಗೆ, ಗ್ರಾ.ಪಂ ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಹಾಗೂ ಕಾಪು ಕ್ಷೇತ್ರದಲ್ಲಿ ಕಂಡುಬರುವ ತ್ಯಾಜ್ಯ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಸರ್ವರಿಗೂ ಕಡ್ಡಾಯ ಶಿಕ್ಷಣ, ಬಡವರಿಗೆ ರೂ. 3  ಅಕ್ಕಿ ನೀಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ಅಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ದೇಶಾದ್ಯಂತ ವೃತ್ತಿಪರ ಶಿಕ್ಷಣಕ್ಕಾಗಿ ಐದು ಸಾವಿರ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು ಈ ಎಲ್ಲಾ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಜನರಿಗೆ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಆಸ್ಕರ್ ಅಭಿನಂದಿಸಿದರು.ಮಾಜಿ ಸಚಿವ ವಸಂತ ವಿ.ಸಾಲ್ಯಾನ್, ಜಿಲ್ಲಾ ಘಟಕ ಮಾಜಿ ಅಧ್ಯಕ್ಷ ಎಂ.ಎ.ಗಫೂರ್,  ಬ್ಲೋಸಂ ಫರ್ನಾಂಡಿಸ್, ಜಯರಾಮ್ ಬಲ್ಲಾಳ್, ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸುವರ್ಣ, ಉಪಾಧ್ಯಕ್ಷ ನವೀನ್‌ಚಂದ್ರ ಜೆ.ಶೆಟ್ಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಎನ್.ಶೆಟ್ಟಿ, ಎನ್‌ಎಸ್‌ಯುಐ ಅಧ್ಯಕ್ಷ ಅಝೀಜ್ ಹೆಜ್ಮಾಡಿ, ತಾಪಂ ಸದಸ್ಯ ಭಾಸ್ಕರ ಪಡುಬಿದ್ರಿ, ವೈ.ಸುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT