ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿ ಬದಲಾವಣೆ ಗಾಳಿ ಬೀಸಲಿದೆ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಜಾತಿ, ಹಣದ ಪ್ರಭಾವಕ್ಕೆ ಒಳಗಾಗದೆ ಮತ ಚಲಾಯಿಸಲಿದ್ದಾರೆ ಎಂದು  ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ಮತ್ತು ವರದಿಗಾರರ ಕೂಟ ಜಂಟಿಯಾಗಿ ಗುರುವಾರ ಇಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆಡಿಎಸ್ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ. ಎಲ್ಲ ಕಡೆ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಈ ಬಾರಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.

`ಚುನಾವಣೆಯಲ್ಲಿ ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯನ್ನು ದೂರವಿಟ್ಟು, ಜೆಡಿಎಸ್‌ಗೆ ಅಧಿಕಾರ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯ ಭ್ರಷ್ಟಾಚಾರದಿಂದ ಜನ ರೋಸಿದ್ದಾರೆ. ಈ ಕಾರಣಕ್ಕೇ ಕಾಂಗ್ರೆಸ್ಸಿಗರು ಅಧಿಕಾರದ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ನಿರಾಸೆಯಾಗಲಿದೆ. ಜೆಡಿಎಸ್, ಕಾರ್ಯಕ್ರಮಗಳ ಆಧಾರದ ಮೇಲೆ ಚುನಾವಣೆ ಎದುರಿಸಲಿದೆ~ ಎಂದು ಅವರು ತಿಳಿಸಿದರು.

`ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಪಾತ್ರ ನಿರ್ವಹಿಸಲಿದೆ ಎಂದು ಕೆಲವರು ಭಾವಿಸಿದ್ದಾರೆ. ಆದರೆ, ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯ ಬೇಕು ಎಂಬುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಕ್ರಮಗಳನ್ನು ರೂಪಿಸಲಾಗುತ್ತಿದೆ~ ಎಂದರು.

`ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾಪಿಸಲು ಉದ್ದೇಶಿಸಿರುವ ಹೊಸ ಪಕ್ಷವಾಗಲೀ ಅಥವಾ ಮಾಜಿ ಸಚಿವ ಬಿ. ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಪಕ್ಷವಾಗಲೀ, ಜೆಡಿಎಸ್ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರದು. ನಮಗೆ ಯಾರ ಭಯವೂ ಇಲ್ಲ. ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಜೆಡಿಎಸ್ ಸ್ವಂತ ಬಲದಿಂದ ಅಧಿಕಾರ ಹಿಡಿಯಲಿದೆ~ ಎಂದು ಅವರು ಹೇಳಿದರು.

ವಿಧಾನಸಭಾ ಚುನಾವಣೆಗೆ ಜೋರು ಪ್ರಚಾರ ಮಾಡುವುದಿಲ್ಲ. 20 ತಿಂಗಳ ಆಡಳಿತ ಅವಧಿಯಲ್ಲಿ ಜೆಡಿಎಸ್ ಮಾಡಿದ ಕೆಲಸ ಕಾರ್ಯಗಳನ್ನು ನೋಡಿ ಜನರು ಮತ ನೀಡಲಿದ್ದಾರೆ. ರಾಷ್ಟ್ರೀಯ ಪಕ್ಷ ಎನ್ನುವ ಹಣೆಪಟ್ಟಿ ಇರುವ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಏನು ಮಾಡಿವೆ, ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಏನು ಮಾಡಿದೆ ಎನ್ನುವುದು ಜನರ ಮುಂದಿದೆ. ಈ ವಿಷಯದಲ್ಲಿ ಜೆಡಿಎಸ್‌ಗೆ ಹೆಮ್ಮೆ ಇದೆ ಎಂದರು.

ನಾಟಕವಲ್ಲ: `ಕಾವೇರಿ ನದಿ ನೀರಿನ ವಿವಾದದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ನನಗೆ ನೀಡಿರುವುದು ನಿಜ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ, ಇದು ನಾಟಕೀಯ ಬೆಳವಣಿಗೆಯೂ ಅಲ್ಲ. ಆದರೆ, ದೇವೇಗೌಡರು ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ ನಂತರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು~ ಎಂದು ಕುಮಾರಸ್ವಾಮಿ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT