ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಗಳ ಧೋರಣೆಗೆ ಖಂಡನೆ

Last Updated 2 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆಯ ವ್ಯಾಪ್ತಿಗೆ ಹೋಟೆಲ್ ಕಾರ್ಮಿಕರನ್ನು ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದರೆ ಅದನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ~ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕರ್ನಾಟಕ ರಾಜ್ಯ ಹೋಟೆಲ್ ಕಾರ್ಮಿಕರ ಒಕ್ಕೂಟವು ನಗರದ ಪುರಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಮಿಕರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

`ಕಾರ್ಮಿಕ ಇಲಾಖೆಯಲ್ಲಿ 44 ಕಾಯ್ದೆಗಳಿವೆ. ಆದರೆ ಕರ್ನಾಟಕ ಸರ್ಕಾರ ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಈ ಕಾಯ್ದೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ತೋರುವ  ಮೂಲಕ ಕಾಯ್ದೆಗಳನ್ನು ಅನುಷ್ಠಾನಗೊಳಿಸದಿರುವ ರಾಜ್ಯ ಸರ್ಕಾರಗಳ ಧೋರಣೆ ಖಂಡನೀಯ~ ಎಂದು ಕಿಡಿ ಕಾರಿದರು.

`ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ವ್ಯಾಪ್ತಿಗೆ ಹೋಟೆಲ್ ಕಾರ್ಮಿಕರನ್ನು ಒಳಪಡಿಸುವಂತೆ ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದರೆ, ಆ ಕಾರ್ಮಿಕರಿಗೂ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು~ ಎಂದರು.

`ಮನೆಗೆಲಸ ಮಾಡುವ ಕಾರ್ಮಿಕರಿಗೆಂದೇ ವಿಶೇಷ ಕಾನೂನು ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ) ಕೂಡ ಈ ಬಗ್ಗೆ ಗಂಭೀರ ಚರ್ಚೆ ನಡೆಸಿದೆ. ಅದರಂತೆ ಮನೆಗೆಲಸದ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ವಿಶೇಷ ಕಾನೂನು ಸದ್ಯದಲ್ಲೇ ಜಾರಿಗೆ ಬರಲಿದೆ~ ಎಂದು ಹೇಳಿದರು.

`ಕಾಯ್ದೆಯ ಸದುಪಯೋಗ ಪಡೆದುಕೊಳ್ಳದಿದ್ದರೆ ಎಷ್ಟೇ ಪರಿಣಾಮಕಾರಿ ಕಾಯ್ದೆ ರೂಪಿಸಿದರೂ ಅದಕ್ಕೆ ಮಹತ್ವ ಬರುವುದಿಲ್ಲ. ಕೇಂದ್ರ ಸರ್ಕಾರ ರೂಪಿಸಿದ ಕಾಯ್ದೆಗಳನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಜಾರಿಗೊಳಿಸಬೇಕು. ಈ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಬೇಕು~ ಎಂದರು.

ಮಾಜಿ ಸಚಿವ ಆರ್.ವಿ. ದೇಶಪಾಂಡೆ, `ಹೋಟೆಲ್ ಕಾರ್ಮಿಕರ ಜೀವನ ಅತಂತ್ರವಾಗಿದೆ. ಇವರಿಗೆ ಉದ್ಯೋಗ ಭದ್ರತೆ ಇಲ್ಲದ ಕಾರಣ ಸಂಕಷ್ಟದಲ್ಲಿದ್ದಾರೆ. ಹೋಟೆಲ್ ಉದ್ಯಮಿಗಳು ಹೆಚ್ಚಿನ ಪ್ರಗತಿ ಸಾಧಿಸಿದರೂ ಕಾರ್ಮಿಕರ ಸ್ಥಿತಿ ಸುಧಾರಿಸುತ್ತಿಲ್ಲ. ರೈತರು, ಕೃಷಿ ಕಾರ್ಮಿಕರು ಹಾಗೂ ಕೈಗಾರಿಕಾ ಕಾರ್ಮಿಕರು ದೇಶದ ಶಕ್ತಿ ಇದ್ದಂತೆ. ಹಾಗಾಗಿ ಹೋಟೆಲ್ ಕಾರ್ಮಿಕರು ಸಂಘಟಿತರಾಗಿ ತಮಗೆ ಬೇಕಾದ ಸವಲತ್ತು ಪಡೆಯಲು ಹೋರಾಟ ನಡೆಸಬೇಕು~ ಎಂದರು.

ಇದಕ್ಕೂ ಮೊದಲು ಒಕ್ಕೂಟದ ಅಧ್ಯಕ್ಷ ಕೆ.ಪುಟ್ಟಸ್ವಾಮಿ, `ಹೋಟೆಲ್ ಕಾರ್ಮಿಕರಿಗೆ ಪ್ರತ್ಯೇಕ ವೇತನ ಮಂಡಳಿ ರಚಿಸಬೇಕು. ಕಾರ್ಮಿಕರಿಗೆ ರೂ 6,000  ಕನಿಷ್ಠ ವೇತನ ಸಿಗುವಂತಾಗಬೇಕು. ಹೋಟೆಲ್‌ಗಳಲ್ಲಿ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕು~ ಎಂದು ಒತ್ತಾಯಿಸಿದರು. ಅಲ್ಲದೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಒಕ್ಕೂಟದ ಗೌರವಾಧ್ಯಕ್ಷ ಎಸ್.ಎಸ್. ಪ್ರಕಾಶಂ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ ಇತರರು ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT