ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಅಭಿವೃದ್ಧಿ ಚಿತ್ರಣವೇ ಬದಲು

ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಭರವಸೆ
Last Updated 25 ಏಪ್ರಿಲ್ 2013, 20:01 IST
ಅಕ್ಷರ ಗಾತ್ರ

ಬೆಂಗಳೂರು: `ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಎನ್‌ಡಿಎ ಮೈತ್ರಿಕೂಟಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಕರ್ನಾಟಕದಲ್ಲೂ  ಮತದಾರರು ಬಿಜೆಪಿಯನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯದ ಚಿತ್ರಣವನ್ನೇ ಬದಲಾಯಿಸುತ್ತೇವೆ' ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ಎಂ.ವೆಂಕಯ್ಯ ನಾಯ್ಡು ಭರವಸೆ ನೀಡಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಪರ ಗುರುವಾರ ನಗರದ ಓಕಳಿಪುರದಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

`ರಾಜ್ಯದಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕೆಲಸವಾಗಿದೆ. ಆದರೆ, ಕಾಂಗ್ರೆಸ್ ಶಾಸಕರ  ಕ್ಷೇತ್ರಗಳಲ್ಲಿ ಕನಿಷ್ಠ ಮೂಲಸೌಕರ್ಯ ಒದಗಿಸಿಲ್ಲ. ಕಾಂಗ್ರೆಸ್ ಪಕ್ಷ 60 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಸರ್ಕಾರ ಕೇವಲ ಐದು ವರ್ಷಗಳಲ್ಲಿ ಮಾಡಿದೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

`ಎನ್‌ಡಿಎ ಅಧಿಕಾರಾವಧಿಯಲ್ಲಿ ಮೆಟ್ರೊ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಚತುಷ್ಪಥ ರಸ್ತೆ ಸೇರಿದಂತೆ  ಕರ್ನಾಟಕಕ್ಕೆ ಪ್ರಮುಖ ಯೋಜನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ಕಳೆದ ಒಂಬತ್ತು ವರ್ಷಗಳಲ್ಲಿ ಯುಪಿಎ ಸರ್ಕಾರ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಪ್ರಧಾನಿ ಅವರು ಸೋನಿಯಾ ಗಾಂಧಿಯವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಜನರಿಂದ ತೆರಿಗೆಯ ಮೂಲಕ ಸಂಗ್ರಹವಾದ ಕೋಟ್ಯಂತರ ರೂಪಾಯಿಹಣವನ್ನು ವಿವಿಧ ಹಗರಣಗಳ ಮೂಲಕ ಯುಪಿಎ ಸರ್ಕಾರದ ಸಚಿವರು ಲೂಟಿ ಮಾಡಿದ್ದಾರೆ' ಎಂದು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಮಾತನಾಡಿ, `ಗಾಂಧಿನಗರ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಸಾವಿರ ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ. ಆದರೆ, ಇದರಲ್ಲಿ ರೂ. 750 ಕೋಟಿಗೂ ಅಧಿಕ ಹಣವನ್ನು ಸ್ಥಳೀಯ ಶಾಸಕರು  ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ 15 ವರ್ಷಗಳಲ್ಲಿ ಗಾಂಧಿನಗರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಬಡ ಜನರಿಗೆ ಕನಿಷ್ಠ ಹಕ್ಕುಪತ್ರಗಳನ್ನು  ವಿತರಿಸುವಲ್ಲಿಯೂ ಶಾಸಕರು ವಿಫಲರಾಗಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೂ ತಾನು ಸಿದ್ಧ' ಎಂದು ಸವಾಲು ಹಾಕಿದರು.

ತೆಲುಗು ತಾರೆಗಳಿಗೆ ಪಕ್ಷಗಳ ದುಂಬಾಲು

ಬೆಂಗಳೂರು: ತೆಲುಗು ಭಾಷಿಕ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ತೆಲುಗು ಸಿನಿಮಾ ತಾರೆಯರ ಮೊರೆ ಹೋಗಿವೆ. ಚಿರಂಜೀವಿ, ಶರತ್ ಬಾಬು ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬರಲಿದ್ದಾರೆ.

ಚಿರಂಜೀವಿ ಅವರು ಯಲಹಂಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಎನ್. ಗೋಪಾಲಕೃಷ್ಣ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಆರ್. ವಿಶ್ವನಾಥ್ ಪರ ಪ್ರಚಾರಕ್ಕೆ ಶರತ್ ಬಾಬು ಮತ್ತು ಕೋಟ ಶ್ರೀನಿವಾಸ ರಾವ್ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT