ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗೆ ಆನ್‌ಲೈನ್ ಸ್ಪರ್ಶ

Last Updated 2 ಜುಲೈ 2012, 8:20 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗಿದೆ.

ರೈತಾಪಿ ಜನರನ್ನು ಗುರುತಿಸಿ ಸಂಘಟಿಸಿ ಬಿತ್ತನೆಯಿಂದ ಕಟಾವು ಸೇರಿದಂತೆ ಮಾರುಕಟ್ಟೆವರೆಗೆ ಉತ್ಪನ್ನಗಳನ್ನು ಸಾಗಿಸುವವರೆಗೂ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಸಮಗ್ರ ತೋಟಗಾರಿಕೆ ಯೋಜನೆ ಜಾರಿಗೊಳಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ವಿವರಿಸಿದರು.

ನಗರದ ವಾರ್ತಾ ಇಲಾಖೆ ಸಭಾಂಗಣದಲ್ಲಿ ವಾರ್ತಾ ಇಲಾಖೆ ಹಾಗೂ ಮಾಧ್ಯಮ ಬಳಗ ಶನಿವಾರ ಆಯೋಜಿಸಿದ್ದ ತೋಟಗಾರಿಕೆ ಯೋಜನೆಗಳ ಕುರಿತು ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಯೋಜನೆ ಅಡಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಎರಡು ಕ್ಲಟ್ಟರ್‌ಗಳನ್ನು ರಚಿಸಿ ಪಪ್ಪಾಯಿ, ಗುಲಾಬಿ, ಮಾವು, ಸಪೋಟಾ, ಹಲಸು, ಬಾಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುವುದು. ಇದಕ್ಕಾಗಿ 2012-13ನೇ ಸಾಲಿಗೆ ರೂ. 368.67 ಲಕ್ಷ ರೈತರಿಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ 1,11,157 ಹೆಕ್ಟೇರ್  ಪ್ರದೇಶದಲ್ಲಿ ವಿವಿಧ ಹಣ್ಣು, ತರಕಾರಿ, ಸಾಂಬಾರು, ಹೂ, ಔಷಧಿ ಮತ್ತು ಸುಗಂಧಿತ ಬೆಳೆಗಳ ಬೆಳೆಯಲಾಗುತ್ತಿದ್ದು, ಒಟ್ಟಾರೆ ಉತ್ಪಾದನೆ 72,9603 ಟನ್‌ಗಳಿದ್ದು ಮುಂದಿನ ದಿನಗಳಲ್ಲಿ ತೋಟಗಾರಿಕೆ ಬೆಳೆಗಳಿಗೆ ಆದ್ಯತೆ ನೀಡಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಹೆಚ್ಚಳ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಆನ್‌ಲೈನ್ ವ್ಯವಸ್ಥೆ: ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ದೇವರಾಜ್ ಮಾತನಾಡಿ ಪ್ರಸಕ್ತ ಸಾಲಿನಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕಾದರೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ನೋಂದಾವಣಿ ನಂತರ ರೈತರ ಜತೆ ಸಮಾಲೋಚನೆ ಮಾಡಲಾಗುವುದು ಎಂದು ತಿಳಿಸಿದರು.

ರಾಷ್ಟ್ರಾದ್ಯಂತ ಈ ಯೋಜನೆಯನ್ನು ಆನ್‌ಲೈನ್ ಮಾಡಲಾಗಿದೆ. ಯೋಜನೆಯ ಪ್ರಗತಿ ಮತ್ತು ನಿಗಾವಹಿಸಲು ಇದರಿಂದ ಅನುಕೂಲವಾಗುತ್ತದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಲಾಖೆಯಲ್ಲೂ ನೋಂದಣಿ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ತಮ್ಮ ತೋಟದಲ್ಲಿ ಪ್ಯಾಕ್‌ಹೌಸ್ ನಿರ್ಮಾಣ ಮಾಡಿಕೊಳ್ಳಲು ರೂ. 1.50 ಲಕ್ಷ ಸಹಾಯಧನ ದೊರೆಯಲಿದ್ದ, ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಗೆ 80 ಪ್ಯಾಕ್‌ಹೌಸ್ ಘಟಕಗಳಿಗೆ ಬೇಡಿಕೆ ಇಡಲಾಗಿದೆ ಎಂದು ಹೇಳಿದರು.

ನಿವೃತ್ತ ಕೃಷಿ ಅಧಿಕಾರಿ ಶಾಂತವೀರಯ್ಯ, ವಾರ್ತಾಧಿಕಾರಿ ಎಸ್.ಮಹೇಶ್ವರಯ್ಯ, ಸಹಾಯಕ ವಾರ್ತಾಧಿಕಾರಿ ಧನಯಂಜಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT