ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಡ್ಡಿ, ಶ್ರೀರಾಮುಲುಗೆ ನೋಟಿಸ್ ಜಾರಿ

Last Updated 16 ಫೆಬ್ರುವರಿ 2011, 16:30 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಸ್ಥಾನವನ್ನು ವೈಯಕ್ತಿಕ ಲಾಭಕ್ಕೆ ಬಳಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ವಿಚಾರಣೆಗೆ ಹಾಜರಾಗುವಂತೆ ಸಚಿವರಾದ ಜಿ.ಜನಾರ್ದನ ರೆಡ್ಡಿ, ಜಿ.ಕರುಣಾಕರ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ಕೆ.ಸಿ.ಕೊಂಡಯ್ಯ ಅವರು ಮೂವರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಯಾಗಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮೂಲಕ ಮೂವರು ಸಚಿವರಿಗೂ ನೋಟಿಸ್ ನೀಡಲಾಗಿದೆ.

‘ಮೂವರು ಸಚಿವರೂ ಶಾಸಕ ಸ್ಥಾನದ ಅಧಿಕಾರವನ್ನು ಬಳಸಿಕೊಂಡು ರಾಜ್ಯ ಮತ್ತು ಆಂಧ್ರಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಅವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಇಲ್ಲಿ ಹಿತಾಸಕ್ತಿಯ ಸಂಘರ್ಷ ಉಂಟಾಗಿರುವ ಹಿನ್ನೆಲೆಯಲ್ಲಿ ಮೂವರನ್ನೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಕೋರಿ ಕೊಂಡಯ್ಯ ಅವರು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯಪಾಲರು ಬಳಿಕ ಅದನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದರು. ಕೊಂಡಯ್ಯ ಅವರ ಅರ್ಜಿಯ ವಿಚಾರಣೆ ಆರಂಭಿಸಿರುವ ಆಯೋಗ ಈ ಹಿಂದೆಯೇ ಎರಡು ಬಾರಿ ಮೂವರು ಸಚಿವರಿಗೂ ನೋಟಿಸ್ ನೀಡಿತ್ತು. ಆಗ ಅವರು ವಕೀಲರ ಮೂಲಕ ಉತ್ತರ ನೀಡಿದ್ದರು. ಇದೀಗ ಮೂರನೇ ಬಾರಿ ಆಯೋಗ ನೋಟಿಸ್ ಜಾರಿ ಮಾಡಿದೆ.

ಸಚಿವರಿಗೆ ನೋಟಿಸ್ ಜಾರಿ ಮಾಡುತ್ತಿರುವ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ, ‘ಪ್ರಕರಣದ ವಿಚಾರಣೆಯ ಸಲುವಾಗಿ ಆಯೋಗ ಸಚಿವರಿಗೆ ನೋಟಿಸ್ ನೀಡಿದೆ. ಇದು ಒಂದು ಸಾಮಾನ್ಯ ಪ್ರಕ್ರಿಯೆ. ಆಯೋಗ ಕಳುಹಿಸುವ ನೋಟಿಸ್ ಅನ್ನು ಸಂಬಂಧಿಸಿದ ವ್ಯಕ್ತಿಗೆ ತಲುಪಿಸುವ ಕೆಲಸವನ್ನು ಮಾತ್ರ ನಮ್ಮ ಕಚೇರಿ ನಿರ್ವಹಿಸುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT