ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಣೂರಿಗೆ ನೂತನ ಕಾಲೇಜು

Last Updated 5 ಅಕ್ಟೋಬರ್ 2012, 3:30 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ರೋಣೂರಿನಲ್ಲಿ ಡಿ.ಎಡ್ ಮತ್ತು ಐಟಿಐ ಕಾಲೇಜು ಪ್ರಾರಂಭಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭರವಸೆ ನೀಡಿದರು.

ತಾಲ್ಲೂಕಿನ ರೋಣೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸಿ ಮಾತನಾಡಿದ ಅವರು, ಪೋಷಕರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವುದನ್ನು ಬಿಟ್ಟು, ಸರ್ಕಾರಿ ಸಂಸ್ಥೆಗಳಿಗೆ ಸೇರಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಾರಿಗೆ ತಂದ ಈ ಕಾರ್ಯಕ್ರಮದಿಂದ ಗ್ರಾಮಾಂತರ ಪ್ರದೇಶಗಳ ವಿದ್ಯಾರ್ಥಿಗಳು ಶಾಲೆಗೆ ಸಕಾಲಕ್ಕೆ ಬಂದು ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

ಕಳೆದ ಬಾರಿಯ ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಪಡೆದ ತಾಲ್ಲೂಕು, ಮುಂದಿನ ಬಾರಿ ಮೊದಲನೆ ಸ್ಥಾನ ಪಡೆಯಲು ಶ್ರಮಿಸಬೇಕು. ಇಲ್ಲಿನ ಪ್ರೌಢಶಾಲೆ ಆವರಣದಲ್ಲಿ ಹೆಚ್ಚುವರಿಯಾಗಿ 4 ಕೊಠಡಿ, ಕುಡಿಯಲು ನೀರು, ಗ್ರಾಮದ ದೇವಾಲಯದ ಸುತ್ತ ಕಾಂಕ್ರೀಟ್ ಹಾಕಲಾಗುವುದು. ರೈತ ಸಂಪರ್ಕ ಕೇಂದ್ರ ಸ್ಥಾಪಿಸಲಾಗುವುದು. ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಮಹ್ಮದ್ ಖಲೀಲ್, ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ವಿಶೇಷ ತರಗತಿಗಳಿಗೆ ಮಕ್ಕಳನ್ನು ಕಡ್ಡಾಯವಾಗಿ ಕಳುಹಿಸಲು ಪೋಷಕರು ಮನಸ್ಸು ಮಾಡಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಲೋಚರವಪಲ್ಲಿ ಬಾಬು, ನಾಗರಾಜ್, ಚಂದ್ರಶೇಖರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಗಣಪತಿ, ಸದಸ್ಯರಾದ ಸಮೀವುಲ್ಲಾ, ಕೃಷ್ಣಪ್ಪ, ವೇಣುಗೋಪಾಲ್, ಸಹಾಯಕ ಕಾರ್ಯಪಾಲ ಎಂಜಿನಿಯರ್ ವೆಂಕಟರಾಯಪ್ಪ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ರಾಧಾಮಣಿ ಸ್ವಾಗತಿಸಿದರು. ಶಿಕ್ಷಕಿ ಶಶಿಕಳಾ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT