ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಠಿ ಪ್ರಹಾರ: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಒತ್ತಾಯ

Last Updated 12 ಡಿಸೆಂಬರ್ 2012, 19:50 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾ. ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಲಾಠಿಪ್ರಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ವಕ್ತಾರ ಡಾ. ಎಲ್.ಹನುಮಂತಯ್ಯ ಆಗ್ರಹಿಸಿದರು.

ಪೊಲೀಸರು ನಿಯಮಗಳನ್ನು ಗಾಳಿಗೆ ತೂರಿ ಪ್ರತಿಭಟನಾಕಾರರ ಮೇಲೆ ಏಕಾಏಕಿ ಅಶ್ರುವಾಯು ಷೆಲ್ ಸಿಡಿಸಿ, ಲಾಠಿಪ್ರಹಾರ ನಡೆಸಿರುವುದು ಖಂಡನೀಯ. ಈ ಘಟನೆ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಅವರು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಸದಾಶಿವ ಆಯೋಗ ನೀಡಿರುವ ವರದಿಯನ್ನು ಒಪ್ಪಿಕೊಂಡು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ನಡೆಸಿದ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ ಎಂದು ಟೀಕಿಸಿದರು.

ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ ಸಂದರ್ಭದಲ್ಲಿ ಗೃಹ ಸಚಿವ ಆರ್.ಅಶೋಕ ಅವರು ಸುವರ್ಣಸೌಧದಲ್ಲಿಯೇ ಇದ್ದರೂ, ತಡೆಯುವ ಪ್ರಯತ್ನ ಮಾಡಿಲ್ಲ. ದಲಿತ ವಿರೋಧಿ ಧೋರಣೆ ಅನುಸರಿಸಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದಲಿತ ಸಂಘಟನೆಗಳ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಘೋಷಿಸಿದ ಅವರು, ರಾಜ್ಯ ಸರ್ಕಾರ ಕೂಡಲೇ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT