ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ಆರೋಪ: ಮುಖ್ಯ ಶಿಕ್ಷಕನ ವಿರುದ್ಧ ಪ್ರತಿಭಟನೆ

Last Updated 21 ಡಿಸೆಂಬರ್ 2012, 20:11 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಕೆಂಬೋಡಿ ಗ್ರಾಮದ ಅನುದಾನಿತ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ರೆಡ್ಡಿ ಅವರು ಹಲವು ತಿಂಗಳುಗಳಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಮತ್ತು ಗ್ರಾಮಸ್ಥರು ಶುಕ್ರವಾರ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಘಟನೆಯಿಂದ ಕುಪಿತರಾಗಿದ್ದ ಗ್ರಾಮಸ್ಥರು ಹಲ್ಲೆ ನಡೆಸಲು ಮುಂದಾದಾಗ ಗೋಪಾಲ ರೆಡ್ಡಿ  ಕೊಠಡಿಯಲ್ಲಿ ಅವಿತುಕೊಂಡರು. ಕ್ರಮ ಕೈಗೊಳ್ಳುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಇದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
`10ನೇ ತರಗತಿ ವಿದ್ಯಾರ್ಥಿಗಳಿಗೆ ಸಂಜೆ ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಇವರನ್ನು ಇಲ್ಲಿಂದ ವರ್ಗಾಯಿಸಬೇಕು. ಕಠಿಣ ಕ್ರಮ ಜರುಗಿಸಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

`ಕಳೆದ ವರ್ಷ ಸಹ ಗೋಪಾಲ ರೆಡ್ಡಿ ವಿರುದ್ಧ ಇದೇ ರೀತಿ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಆಗ ಹಣ ಕೊಟ್ಟು ಪೋಷಕರನ್ನು ಸಮಾಧಾನಗೊಳಿಸಿ, ಪ್ರಕರಣ ಮುಚ್ಚಿ ಹಾಕಿದ್ದರು' ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು.

ಸ್ಥಳಕ್ಕೆ ಆಗಮಿಸಿದ ಶಾಲೆ ಆಡಳಿತ ಮಂಡಳಿ ಸದಸ್ಯ ಬಿಸಪ್ಪಗೌಡ ಜನರನ್ನು ಸಮಾಧಾನಗೊಳಿಸಲು ಯತ್ನಿಸಿದರು. ಈ ಸಮಯದಲ್ಲಿ ಮಾತಿನ ಚಕಮಕಿ ನಡೆಯಿತು. ಪೊಲೀಸರ ಸಮ್ಮುಖದಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ಶಾಲೆ ಆಡಳಿತ ಮಂಡಳಿ ಸದಸ್ಯರು ತೀರ್ಮಾನಿಸಿದರು. `ಘಟನೆ ಕುರಿತು ಪೋಷಕರು, ವಿದ್ಯಾರ್ಥಿಗಳು ಲಿಖಿತ ದೂರು ನೀಡಿಲ್ಲ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT