ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ: ರಾಜಕೀಯ ಒತ್ತಡ ಸಲ್ಲ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ವರ್ಗಾವಣೆಗಾಗಿ ರಾಜಕೀಯ ಒತ್ತಡ ತರುವ ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ಸಹಿಸುವುದಿಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಎಚ್ಚರಿಕೆ ನೀಡಿದರು.

ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸೋಮವಾರ ಆರಂಭವಾದ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಎರಡು ದಿನಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಬಹುತೇಕ ಅಧಿಕಾರಿಗಳು ವರ್ಗಾವಣೆಗಾಗಿ ರಾಜಕಾರಣಿಗಳನ್ನು ಹಿಂಬಾಲಿಸಿ ಹೋಗುತ್ತಿದ್ದಾರೆ. ಅಂತಹ ಅಧಿಕಾರಿಗಳ ದೊಡ್ಡ ಪಟ್ಟಿಯೇ ನನ್ನ ಬಳಿ ಇದೆ. ವರ್ಗಾವಣೆಗಾಗಿ ರಾಜಕೀಯ ಲಾಬಿ ಮಾಡುವ ಅಧಿಕಾರಿಗಳಿಗೆ ಸೂಕ್ತ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ. ವರ್ಗಾವಣೆಯ ಉದ್ದೇಶಕ್ಕಾಗಿ ರಾಜಕಾರಣಿಗಳ ಹಿಂಬಾಲಕರಾಗಬೇಡಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಅಧಿಕಾರಿಗಳು ರಾಜಕೀಯ ಒತ್ತಡವನ್ನು ಸವಾಲಾಗಿ ಸ್ವೀಕರಿಸಿ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ಕರ್ತವ್ಯ ನಿರ್ವಹಣೆ ವೇಳೆ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು. ಇದರಿಂದ ಅಧಿಕಾರಿಗಳಿಗೆ ಯಾವುದೇ ತೊಂದರೆ ಎದುರಾದರೆ ಅವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ವಿಚಲಿತರಾದ ಡಿವಿಎಸ್
ಸಚಿವ ಆರ್.ಅಶೋಕ ಅವರ ಡಿ ನೋಟಿಫಿಕೇಷನ್ ಪ್ರಕರಣದ ಸಂಬಂಧ ಬಿ-ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರ ಕ್ರಮದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ವಿಚಲಿತರಾದ ಮುಖ್ಯಮಂತ್ರಿ ಸದಾನಂದಗೌಡ ಅವರು, `ಆ ಬಗ್ಗೆ ಪ್ರತಿಕ್ರಿಯಿಸಲಾರೆ. ಅಧಿಕಾರಿಗಳ ಕ್ರಮದ ಬಗ್ಗೆ ಆಕ್ಷೇಪವಿದ್ದರೆ ದೂರುದಾರರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿ. ಈ ಸಂಬಂಧ ಹೆಚ್ಚು ಚರ್ಚೆ ಬೇಡ~ ಎಂದರು.



ಅಪರಾಧಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದರೆ ಪ್ರಕರಣಗಳ ಪತ್ತೆ ಪ್ರಮಾಣ ಕಡಿಮೆಯಾಗುತ್ತಿದೆ. 2011ರಲ್ಲಿ ಸುಮಾರು 60 ಸಾವಿರ ಪ್ರಕರಣಗಳು ಪತ್ತೆಯಾಗಿಲ್ಲ. ಪ್ರಕರಣಗಳ ಸಂಬಂಧ `ಬಿ-ವರದಿ~ ಸಲ್ಲಿಕೆ (ಪ್ರಕರಣಗಳನ್ನು ಮುಕ್ತಾಯಗೊಳಿಸುವುದು) ಪ್ರಮಾಣವೂ ಹೆಚ್ಚಾಗುತ್ತಿದೆ.

2011ರಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಪ್ರಕರಣಗಳಿಗೆ ಸಿಬ್ಬಂದಿ ಬಿ-ವರದಿ ಸಲ್ಲಿಸಿದ್ದಾರೆ. ಇದರಿಂದ ಪೊಲೀಸರ ಕಾರ್ಯ ವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಎಚ್ಚರ ವಹಿಸಬೇಕು. ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಹೆಚ್ಚು ಕಾಳಜಿ ತೋರಬೇಕು ಎಂದು ಸಲಹೆ ನೀಡಿದರು.

ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾಗುವ ಪ್ರಮಾಣ ಕುಸಿಯುತ್ತಿದೆ. ಇದು ಪರೋಕ್ಷವಾಗಿ ಅಪರಾಧಗಳ ಪ್ರಮಾಣ ಹೆಚ್ಚಾಗಲು ಕಾರಣವಾಗುತ್ತಿದೆ. ಆದ್ದರಿಂದ ಪೊಲೀಸರು, ಅಭಿಯೋಜನಾ ಸಿಬ್ಬಂದಿ ಜತೆ ಸಮನ್ವಯತೆ ಸಾಧಿಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕಾರ್ಯ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಹೊಸದಾಗಿ 150 ಮಂದಿ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು (ಎಪಿಪಿ) ಸದ್ಯದಲ್ಲೇ ನೇಮಕ ಮಾಡಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಪಿಪಿ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ (ಪಿಪಿ) ಜತೆ ಆಗಾಗ್ಗೆ ಸಭೆ ನಡೆಸಬೇಕು. ಸಮನ್ಸ್ ಅಥವಾ ವಾರೆಂಟ್‌ಗಳ ಜಾರಿ ಮತ್ತು ಸಾಕ್ಷಿಗಳನ್ನು ಸಕಾಲದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು.

ಇಲಾಖೆಯ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಆದರೆ, ಕಳೆದ ಹಣಕಾಸು ವರ್ಷದಲ್ಲಿ ನೀಡಿದ ಅನುದಾನದಲ್ಲಿ ಶೇ 40ರಷ್ಟನ್ನು ಮಾತ್ರ ಬಳಸಿಕೊಳ್ಳಲಾಗಿದೆ. ರಾಜ್ಯದಲ್ಲಿ ನಕ್ಸಲ್ ಸಮಸ್ಯೆ ಗಂಭೀರವಾಗಿದೆ. ನಕ್ಸಲ್‌ಪೀಡಿತ ಪ್ರದೇಶಗಳಲ್ಲಿನ ಸ್ಥಳೀಯ ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸಿಬ್ಬಂದಿ ನಡುವೆ ಸಮನ್ವಯತೆ ಕೊರತೆ ಇದೆ. ನಕ್ಸಲರು ಇದರ ಲಾಭ ಪಡೆಯುತ್ತಿದ್ದಾರೆ.

ಆದ್ದರಿಂದ ನಕ್ಸಲ್‌ಪೀಡಿತ ಪ್ರದೇಶಗಳಲ್ಲಿನ ಸ್ಥಳೀಯ ಪೊಲೀಸರು ಮತ್ತು ಎಎನ್‌ಎಫ್ ಸಿಬ್ಬಂದಿ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ದಕ್ಷ ಹಾಗೂ ಯುವ ಅಧಿಕಾರಿಗಳನ್ನು ಎಎನ್‌ಎಫ್‌ಗೆ ನೇಮಿಸಲು ನಿರ್ಧರಿಸಲಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.

ನಕ್ಸಲ್ ನಿಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ: ಸಮಾವೇಶದಲ್ಲಿ ಮಾತನಾಡಿದ ಗೃಹ ಸಚಿವ ಆರ್.ಅಶೋಕ, `ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಕ್ಸಲ್ ಕಾರ್ಯಚಟುವಟಿಕೆಗಳು ಕಡಿಮೆ ಇವೆ. ಇತ್ತೀಚಿನ ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳ ಬಾಡಿಗೆ ಹಂತಕರು ಕರ್ನಾಟಕದಲ್ಲಿ ನಡೆಯುತ್ತಿರುವ ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಕ್ಸಲ್ ಚಟುವಟಿಕೆಗಳ ನಿಗ್ರಹಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ~ ಎಂದರು.
ಕಾಲಕಾಲಕ್ಕೆ ನೇಮಕಾತಿ ಪ್ರಕ್ರಿಯೆ ನಡೆದರೂ ಇಲಾಖೆಯಲ್ಲಿ ಸದಾ 10 ಸಾವಿರ ಸಿಬ್ಬಂದಿ ಹುದ್ದೆಗಳು ಖಾಲಿ ಇರುತ್ತವೆ. ರಾಜ್ಯದ ಪ್ರತಿ ಠಾಣೆಯಲ್ಲೂ ಸಿಬ್ಬಂದಿ ಕೊರತೆ ಇದೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ತರುವ ಅಗತ್ಯವಿದೆ. ಸಕಾಲಕ್ಕೆ ಮತ್ತು ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲು ಹೆಚ್ಚು ಒತ್ತು ನೀಡಬೇಕು ಎಂದು ಅವರು ಹೇಳಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್. ವಿ.ರಂಗನಾಥ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ, ಡಿಜಿಪಿಗಳಾದ ರೂಪಕ್‌ಕುಮಾರ್ ದತ್ತ, ಸುಶಾಂತ್ ಮಹಾಪಾತ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT