ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆ ತಡೆ ಕೋರಿ ಹೈಕೋರ್ಟ್‌ಗೆ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ದಾಖಲೆಗಳನ್ನು ತಿರುಚಿ ಭೂಮಿ ಕಬಳಿಸಿರುವ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ, ಜೆಡಿಎಸ್‌ನ ಇ. ಕೃಷ್ಣಪ್ಪ ಲೋಕಾ ಯುಕ್ತ ವಿಚಾರಣೆಗೆ ತಡೆ ನೀಡುವಂತೆ ಕೋರಿ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು ಉತ್ತರ ತಾಲ್ಲೂಕಿನ ಗೌಡ್ರಹಳ್ಳಿಯಲ್ಲಿ ವಸತಿ ನಿವೇಶನ ನಿರ್ಮಾಣ ಸಂಬಂಧ ಆರ್. ರಘು ಎಂಬುವವರು ಕೃಷ್ಣಪ್ಪ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಕುರಿತು ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿ ಪಿ. ನರಸಿಂಹಮೂರ್ತಿ ಅವರು, `ಕೃಷ್ಣಪ್ಪ ಮತ್ತು ಇತರ ಐವರು ದಾಖಲೆಗಳನ್ನು ತಿರುಚಿ, ಭೂಮಿ ಕಬಳಿಸಿದ್ದಾರೆ~ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಈ ವರದಿ ಆಧರಿಸಿ, ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ನವೆಂಬರ್ 5ರಂದು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೃಷ್ಣಪ್ಪ ಅವರಿಗೆ ಸಮನ್ಸ್ ಜಾರಿಗೆ ಆದೇಶಿಸಿದ್ದರು. ಈ ಪ್ರಕರಣದ ವಿಚಾರಣೆ ರದ್ದು ಮಾಡಬೇಕು ಎಂದು ಕೋರಿ ಕೃಷ್ಣಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೃಷ್ಣಪ್ಪ ಅವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು, ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೆ ಬುಧವಾರ ಆದೇಶಿಸಿದರು.ಜಾಮೀನು ಇಲ್ಲ: ಅಸೋಸಿಯೇಟೆಡ್ ಮೈನಿಂಗ್ ಕಂಪೆನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಎಸ್.ಪಿ. ರಾಜು ಮತ್ತು ಬಳ್ಳಾರಿ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿದ್ದ ಎಸ್. ಮುತ್ತಯ್ಯ ಅವರ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು ತಿರಸ್ಕರಿಸಿದ್ದಾರೆ.

`ನಮ್ಮ ವಿರುದ್ಧದ ಆರೋಪಗಳ ಕುರಿತು ವಿಚಾರಣೆ ಮುಗಿದಿದೆ. ಆರೋಪ ಪಟ್ಟಿಯನ್ನೂ ಸಲ್ಲಿಸಿ ಆಗಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು~ ಎಂದು ಮುತ್ತಯ್ಯ ಹಾಗೂ ರಾಜು ಅವರು ಅರ್ಜಿಯಲ್ಲಿ ಕೋರಿದ್ದರು.
ಜಾಮೀನು ವಿಚಾರಣೆ ಮುಂದಕ್ಕೆ: ಪಿಡಿಪಿ ಮುಖ್ಯಸ್ಥ, ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸಿರ್ ಮದನಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರು ಮುಂದೂಡಿದರು.

ವಿಚಾರಣೆ ಮುಂದಕ್ಕೆ: ಲೋಕಾಯುಕ್ತರನ್ನು ಶೀಘ್ರ ನೇಮಕ ಮಾಡಬೇಕು ಎಂದು ಕೋರಿ ನೀಲಕಂಠಪ್ಪ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಮುಂದೂಡಿದೆ.

ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ವಿಚಾರಣೆಯ ಹಂತದಲ್ಲಿದೆ ಎಂದು ನ್ಯಾಯಪೀಠ ಅರ್ಜಿಯ ವಿಚಾರಣೆ ಮುಂದೂಡಿತು.

ಅಯ್ಯಪ್ಪ- ವಿಶ್ವನಾಥ್ ವಿರುದ್ಧ ದೂರು:
ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ಪರಭಾರೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ. ಅಯ್ಯಪ್ಪ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಮಾದಪ್ಪನಹಳ್ಳಿಯ ಸರ್ವೆ ಸಂಖ್ಯೆ 62ರಲ್ಲಿರುವ 32 ಎಕರೆ ಬಂಜರು ಭೂಮಿಯನ್ನು ನರಸಿಂಹಯ್ಯ ಎಂಬುವವರಿಗೆ ಅಯ್ಯಪ್ಪ ಅವರು ಕಾನೂನು ಬಾಹಿರವಾಗಿ ಪರಭಾರೆ ಮಾಡಿದ್ದಾರೆ ಎಂದು ಪಿ. ಅನಿಲ್ ಕುಮಾರ್ ಮತ್ತು ಇತರರು ದೂರಿದ್ದಾರೆ. ನರಸಿಂಹಯ್ಯ ಅವರು ಯಾವ ಕಾಲಘಟ್ಟದಲ್ಲೂ ಮಾದಪ್ಪನಹಳ್ಳಿಯ ನಿವಾಸಿ ಆಗಿರಲಿಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

32 ಕೋಟಿ ರೂಪಾಯಿ ಬೆಲೆ ಬಾಳುವ ಈ ಭೂಮಿಯನ್ನು ಶಾಸಕ ವಿಶ್ವನಾಥ್ ಅವರ ಬೆಂಬಲಿಗರು ಅಥವಾ ಸಂಬಂಧಿಕರಾದ ಒಂಬತ್ತು ಮಂದಿಗೆ ನರಸಿಂಹಯ್ಯ ಅವರು ಮಾರಾಟ ಮಾಡಿದ್ದಾರೆ ಎಂದು ದೂರಲಾಗಿದೆ. ಇದರ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು ಇದೇ 20ಕ್ಕೆ ಮುಂದೂಡಿದ್ದಾರೆ.

ವರದಕ್ಷಿಣೆ ಕಿರುಕುಳ: ಐದು ವರ್ಷ ಕಠಿಣ ಶಿಕ್ಷೆ
ಬೆಂಗಳೂರು:ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಕೆ.ಎನ್. ನರಸಿಂಹ ಎಂಬುವವರಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ಮತ್ತು ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶಿಸಿದೆ.

ಬೆಂಗಳೂರಿನ ಆರ್.ಟಿ. ನಗರದ ನಿವಾಸಿ ನರಸಿಂಹ ಅವರು ನಾಗಮಣಿ ಎಂಬುವವರನ್ನು ಮದುವೆಯಾಗಿದ್ದರು. ಆ ಸಂದರ್ಭದಲ್ಲಿ ಐದು ಲಕ್ಷ ರೂಪಾಯಿ ನಗದು, 50 ಸಾವಿರ ರೂಪಾಯಿ ಮೌಲ್ಯದ ವಸ್ತ್ರ ಮತ್ತು ಚಿನ್ನಾಭರಣವನ್ನು ವರದಕ್ಷಿಣೆಯಾಗಿ ನೀಡಬೇಕು ಎಂದು ವಧುವಿನ ಮನೆಯವರ ಮುಂದೆ ಬೇಡಿಕೆ ಇಟ್ಟಿದ್ದರು.

 ನಂತರ ಸಂಧಾನ ನಡೆದು 4.1 ಲಕ್ಷ ರೂಪಾಯಿ ವರದಕ್ಷಿಣೆ ಪಡೆದು ತಾಳಿ ಕಟ್ಟಿದ್ದರು.
ಆದರೆ ಮದುವೆ ಆದ ನಂತರ, ಇನ್ನುಳಿದ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಲಾರಂಭಿಸಿದರು. ಇದನ್ನು ಸಹಿಸಲಾರದೆ ಪತ್ನಿ ನ್ಯಾಯಾಲಯದ ಮೊರೆ ಹೋದರು.

ಕೆಳಹಂತದ ವಿಚಾರಣಾ ನ್ಯಾಯಾಲಯ ಸಾಕ್ಷ್ಯಗಳ ಕೊರತೆಯ ಕಾರಣ ನರಸಿಂಹ ಅವರನ್ನು ದೋಷಮುಕ್ತಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ನಡೆಸಿ ಜೈಲು ಶಿಕ್ಷೆ, ದಂಡ ವಿಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT