ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿ ಸೇರಿದಂತೆ ಇಬ್ಬರ ಆತ್ಮಹತ್ಯೆ

Last Updated 3 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಮತ್ತು ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯಾರ್ಥಿನಿ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಯ ಬಡಾವಣೆಯಲ್ಲಿ ಮಂಗಳವಾರ ನಸುಕಿನಲ್ಲಿ ನಡೆದಿದೆ.

 ಕಾಮಾಕ್ಯ ಬಡಾವಣೆ 5ನೇ ಅಡ್ಡರಸ್ತೆ ನಿವಾಸಿ ಮುರುಗ ಎಂಬುವರ ಪತ್ನಿ ಸಾವಿತ್ರಮ್ಮ (35) ಆತ್ಮಹತ್ಯೆ ಮಾಡಿಕೊಂಡವರು. ಅವರ ಮದುವೆಯಾಗಿ 18 ವರ್ಷವಾಗಿತ್ತು. ಮುರುಗ ಕೂಲಿ ಕಾರ್ಮಿಕ ಮತ್ತು ಸಾವಿತ್ರಮ್ಮ ಮನೆಗೆಲಸ ಮಾಡುತ್ತಿದ್ದರು. ದಂಪತಿಗೆ ಮೂರು ಮಕ್ಕಳಿದ್ದು, ಅವರು ತಮಿಳುನಾಡಿನ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿ ಮಲಗಿದ್ದ ಸಂದರ್ಭದಲ್ಲಿ ಸಾವಿತ್ರಮ್ಮ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಎಚ್ಚರಗೊಂಡ ಮುರುಗ ಅವರು ಪತ್ನಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ತೀವ್ರ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ಹೇಳಿದ್ದಾರೆ.

  ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಘಟನೆಯಲ್ಲಿ ಮುರುಗ ಅವರಿಗೂ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣ: ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಸಮೀಪದ ಕಾಳಪ್ಪ ಬ್ಲಾಕ್‌ನಲ್ಲಿ ಸೋಮವಾರ ನಡೆದಿದೆ.

ನಂಜುಂಡಯ್ಯ ಎಂಬುವರ ಪುತ್ರಿ ಪೂರ್ಣಿಮಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆಕೆ ಕಸ್ತೂರಬಾ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ನಂಜುಂಡಯ್ಯ ಈರುಳ್ಳಿ ವ್ಯಾಪಾರಿ ಮತ್ತು ಅವರ ಪತ್ನಿ ಸಿದ್ಧ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಾರೆ.

ದಂಪತಿ ಬೆಳಿಗ್ಗೆ ಹೊರಗೆ ಹೋಗಿದ್ದಾಗ ಪೂರ್ಣಿಮಾ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹನುಮಂತನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT