ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಸಮಸ್ಯೆ ಖಂಡಿಸಿ ರಸ್ತೆ ತಡೆ

Last Updated 14 ಜೂನ್ 2011, 6:50 IST
ಅಕ್ಷರ ಗಾತ್ರ

ಯಲ್ಲಾಪುರ: ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ತಾಲ್ಲೂಕಿನ ಗುಳ್ಳಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ವಿವಿಧ ಸಂಘ-ಸಂಸ್ಥೆಗಳೊಂದಿಗೆ ರಸ್ತೆ ತಡೆ ನಡೆಸಿತು.

ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ  ವಿಧಾನ ಪರಿಷತ್ ಸದಸ್ಯ ಶ್ರೀಕಾಂತ ಘೋಟ್ನೇಕರ್ ~ಉತ್ತರ ಕನ್ನಡ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಹರಿಸದ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕೇಂದ್ರ ಸರ್ಕಾರದ ಸರ್ವ ಶಿಕ್ಷಾ ಅಭಿಯಾನದ ಯೊಜನೆಯನ್ನು ತಮ್ಮ ಸರ್ಕಾರದ ಕೊಡುಗೆ ಎಂದು ಪ್ರಚಾರ ಮಾಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ.  ಅಧಿಕಾರಿಗಳ ಮೇಲೆ ಹಿಡಿತ ಕಳೆದುಕೊಂಡಿದ್ದು, ಅಧಿಕಾರಿಗಳು  ಜನಪ್ರತಿನಿಧಿಗಳ ಮಾತು ಕೇಳದಂತಾಗಿದ್ದಾರೆ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ತಿಂಗಳಿಂದ ಯ್ಲ್ಲಲಾಪುರ ಪಟ್ಟಣವೂ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಯಲ್ಲಾಪುರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಮುಖಂಡ ಶಿವರಾಮ ಹೆಬ್ಬಾರ್ ಮಾತನಾಡಿ, ತಾಲ್ಲೂಕಿನ ಜನತೆ ವಿದ್ಯುತ್ ಸಮಸ್ಯೆಯಿಂದ ಬಳಲುತ್ತಿರುವುದನ್ನು ವಿವರಿಸಿ, ಘಟ್ಟದ ಕೆಳಗಿನ ಗ್ರಾಮಗಳಾದ ಗುಳ್ಳಾಪುರ, ಅರಬೈಲ್, ಕೆಳಾಸೆ, ಅತ್ತಿಸವಲು, ಕೊಡ್ಲಗದ್ದೆ, ಡಬ್ಗುಳಿ, ಮೂಲೆಪಾಲ್ ಮುಂತಾದ ಗ್ರಾಮಗಳಿಗೆ ಅನುಕೂಲ ವಾಗುವಂತೆ ಹೆಸ್ಕಾಂ ಉಪಕೇಂದ್ರವನ್ನು ಈ ಭಾಗದಲ್ಲಿ ಸ್ಥಾಪಿಸಬೇಕಾದ ಅಗತ್ಯ ಇದೆ ಎಂದರಲ್ಲದೇ ವಿದ್ಯುತ್ ಸಮಸ್ಯೆಗಳ ಕುರಿತು ದೂರು ನೀಡಿದರೆ ಹೆಸ್ಕಾಂ ಸಿಬ್ಬಂದಿ ಗ್ರಾಹಕರೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆಪಾದಿಸಿದರು.

ಶಿರಸಿ ಹೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪಿ. ಶೆಟ್ಟಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಎಂಟು ದಿನಗಳೊಳಗಾಗಿ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವುದಾಗಿ ಲಿಖಿತ ಭರವಸೆ ನೀಡಿದ ನಂತರದಲ್ಲಿ ಪ್ರತಿಭಟನೆ ಹಿಂದಕ್ಕೆ ತೆಗೆದುಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಸಮಸ್ಯೆಗಳ ಕುರಿತು ರಾಜ್ಯಪಾಲರಿಗೆ ಮನವಿ ರವಾನಿಸಲಾಯಿತು.
ಇಡಗುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್. ಗಾಂವ್ಕರ್, ಕೆ.ಪಿ.ಸಿ.ಸಿ ಸದಸ್ಯ ವಿಜಯ್ ಮಿರಾಶಿ, ಕಿಸಾನ್ ಸೆಲ್‌ನ ಅಧ್ಯಕ್ಷ ಪ್ರೇಮಾನಂದ ನಾಯ್ಕ, ಮುರಳಿ ಹೆಗಡೆ, ಶ್ರೀಧರ ನಾಯ್ಕ ಅರಬೈಲ್, ಮಹಾಲಕ್ಷ್ಮೀ ಅಕ್ಕಸಾಲಿ, ಆನಂದರಾಯ ಗೊಳಸಂಗಿ, ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT