ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ

Last Updated 1 ಜೂನ್ 2011, 10:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಗೊಂದರಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಿದಲ್ಲಿ ಮಾತ್ರ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬಹುದು ಎಂದುಶಾಸಕ ಎಸ್.ಕೆ. ಬಸವರಾಜನ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೆಎಚ್‌ಎಸ್‌ಡಿಪಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮತ್ತು ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು, ಭೀಮಸಮುದ್ರ, ಗೊಡಬನಾಳ್ ಹಾಗೂ ಗುಡ್ಡದ ರಂಗವ್ವನಹಳ್ಳಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ  ಸಮಾರಂಭದಲ್ಲಿ ಮಾತನಾಡಿದರು.

ಕೆಲವೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಸಜ್ಜಿತ ಕಟ್ಟಡವಿದ್ದರೂ ವೈದ್ಯರ ಕೊರತೆ ಇದೆ. ವೈದ್ಯರಿಗೆ ಉತ್ತಮ ವೇತನ, ಸೌಲಭ್ಯಗಳನ್ನು ನೀಡಿ ನೇಮಕಾತಿ ಮಾಡಿಕೊಂಡು ಜನರಿಗೆ ಸೇವೆ ಒದಗಿಸಬೇಕಾಗಿದೆ. ಜಿಲ್ಲಾ ಆಸ್ಪತ್ರೆ 600 ಹಾಸಿಗೆಯ ಸಾಮರ್ಥ್ಯವನ್ನು ಹೊಂದಿದ್ದು, ಇದನ್ನು ಮೇಲ್ದರ್ಜೆಗೇರಿಸಬೇಕು ಎಂದು ನುಡಿದರು.

ಇತ್ತೀಚಿನ ದಿನಗಳಲ್ಲಿ ಜಮೀನಿನ ಕೊರತೆ ಹಾಗೂ ಮಾರುಕಟ್ಟೆ ಮೌಲ್ಯ ಹೆಚ್ಚಿರುವುದರಿಂದ ಸಾರ್ವಜನಿಕ ಉದ್ದೇಶಕ್ಕೆ ಜಮೀನು ನೀಡಲು ನಾಗರಿಕರು ಮುಂದೆ ಬರುತ್ತಿಲ್ಲ. ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ನಿರ್ಮಾಣಕ್ಕೆ ಜಮೀನಿನ ಕೊರತೆಯಿಂದ ಇಲ್ಲಿಯವರೆಗೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ತರಳಬಾಳು ಶ್ರೀಗಳು ಜಮೀನು ನೀಡಿರುವುದು ಸಂತಸದ ವಿಷಯವಾಗಿದೆ ಎಂದರು.

ಪ್ರಸ್ತುತ ಆರೋಗ್ಯ ಕೇಂದ್ರದ ಕಟ್ಟಡವನ್ನು ಮಾತ್ರ ನಿರ್ಮಾಣ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಇಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತದೆ. ವಸತಿ ಗೃಹಗಳಿದ್ದಲ್ಲಿ ಸಿಬ್ಬಂದಿಗಳು ವಾಸ ಮಾಡುವುದರಿಂದ ತುರ್ತು ಸಂದರ್ಭದಲ್ಲಿ ಜನರಿಗೆ ಸೇವೆ ಸಿಗಲಿದೆ ಎಂದ ಅವರು ಜನರು ಆರೋಗ್ಯ ಕೇಂದ್ರದ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ವಿದೇಶಗಳಲ್ಲಿ ಆರೋಗ್ಯ ರಕ್ಷಣೆಗಾಗಿ ವಿಮೆ ಮಾಡಿಸುತ್ತಾರೆ. ಅಂತಹ ಪದ್ಧತಿ ಇಲ್ಲಿಯೂ ಜಾರಿಯಾದಲ್ಲಿ ಜನರಿಗೆ ಅನುಕೂಲವಾಗಲಿದೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹಾಗೂ ಮೂಲಸೌಲಭ್ಯಕ್ಕೆ ಒತ್ತು ನೀಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವುದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ ಎಂದರು.

ಕರ್ನಾಟಕ ಆರೋಗ್ಯ ಪದ್ಧತಿಗಳ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಾಸ್ತಾವಿಕ ಮಾತನಾಡಿ, ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ ್ಙ 80 ಲಕ್ಷ ಮಂಜೂರಾಗಿದ್ದು, ಒಟ್ಟು ನಾಲ್ಕು ಕೇಂದ್ರಗಳನ್ನು ್ಙ 3.20 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗುತ್ತದೆ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾದಡಿ. ರಮೇಶ್, ಗಿರಿ ಎಂ. ಜಾನಕಲ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕ ಟಶಿವಾರೆಡ್ಡಿ, ಆರೋಗ್ಯಾಧಿಕಾರಿಡಾ.ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT