ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಶ್ವತ ನೀರಾವರಿ ಹೋರಾಟ ನಿಲ್ಲದು

Last Updated 28 ಜನವರಿ 2012, 5:35 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ದೊರಕುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಈಚೆಗೆ ಸುದ್ದಿಗಾರರೊಡನೆ ಮಾತನಾಡಿದ ಅವರು, ಪರಮಶಿವಯ್ಯ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟಗಳಿಗೆ ತಮ್ಮ ಪೂರ್ಣ ಬೆಂಬಲವಿದೆ ಎಂದು ನುಡಿದರು.

ಬರಪೀಡಿತ ಜಿಲ್ಲೆಗಳಿಗೆ ನೀರು ಪೂರೈಸುವ ಸಲುವಾಗಿ ಪರಮಶಿವಯ್ಯನವರು ರೂಪಿಸಿರುವ ಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಕೆಲವೇ ದಿನದಲ್ಲಿ ಜನಪ್ರತಿನಿಧಿಗಳ ಸಭೆಯನ್ನು ನಡೆಸಲಿದ್ದಾರೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ರಾಜಕಾರಣವನ್ನು ಬದಿಗೊತ್ತಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು. ಇಲ್ಲವಾದರೆ ಸನ್ನಿವೇಶ ಇನ್ನಷ್ಟು ಬಿಗಡಾಯಿಸುತ್ತದೆ ಎಂದರು.

ಈಗಾಗಲೇ ಮುಖ್ಯಮಂತ್ರಿಗಳನ್ನು ಒಮ್ಮೆ ಭೇಟಿ ಮಾಡಿರುವೆ. ಪರಮಶಿವಯ್ಯ ವರದಿಯನ್ನು ಜಾರಿಗೊಳಿಸಬೇಕು ಎಂದು ಮನವಿಯನ್ನೂ ಮಾಡಿರುವೆ. ಅವರೂ ನೀರಿನ ಸಮಸ್ಯೆ ಬಗೆಹರಿಸುವ ವಿಷಯದಲ್ಲಿ ಯಾವ ಗೊಂದಲವೂ ಇಲ್ಲ ಎಂದು ತಿಳಿಸಿದ್ದಾರೆ. ಸಹಮತವನ್ನೂ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸುವುದು ಸರಿಯಲ್ಲ. ಆ ಯೋಜನೆ ಜಾರಿಯಾದ ಬಳಿಕ ಪರಮಶಿವಯ್ಯ ವರದಿ ಜಾರಿಗೂ ಬಲವಾದ ಪ್ರತಿಪಾದನೆ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿಯವರೊಡನೆಯೂ ಚರ್ಚಿಸಿರುವೆ ಎಂದರು.

ರಾಜ್ಯ ಸರ್ಕಾರ ಕುಡಿಯುವ ನೀರಿಗಾಗಿ ಸಾಕಷ್ಟು ಹಣವನ್ನು ಜಿಲ್ಲೆಗೆ ಬಿಡುಗಡೆಯಾಗಿದ್ದರೂ ಅದು ಸಮರ್ಪಕವಾಗಿ ಬಳಕೆಯಾಗಿಲ್ಲ ಎಂದು ಇದೇ ಸಂದರ್ಭದಲ್ಲಿ ಅಸಮಾಧಾಣ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಲ್. ಅನಿಲಕುಮಾರ್, ಜಿಪಂ ಉಪಾಧ್ಯಕ್ಷ ಡಿ.ವಿ.ಹರೀಶ್, ಬಿಸ್ಸೇಗೌಡ, ವೆಂಕಟಮುನಿಯಪ್ಪ, ನಗರಸಭೆ ಅಧ್ಯಕ್ಷೆ ನಾಜಿಯಾ ಉಪಸ್ಥಿತರಿದ್ದರು.

ಹೂಳೆತ್ತುವ ಯೋಜನೆಗೆ ಮನವಿ
ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಫೀಡರ್ ಚಾನಲ್ ಹಾಗೂ ಚೆಕ್‌ಡ್ಯಾಂ ನಿರ್ಮಾಣ, ಎಲ್ಲ ಕೆರೆಗಳಲ್ಲಿ ಹೂಳೆತ್ತುವ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರನ್ನು ಬುಧವಾರ ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸಂದರ್ಭದಲ್ಲಿ ಈ ಮನವಿ ಮಾಡಿದ ಅವರು, ನೀರಿನ ಅಭಾವ ಎದುರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕನಿಷ್ಠ ಪಕ್ಷ ಮಳೆಯಿಂದ ಬರುವ ನೀರನ್ನು ತಡೆದು ಇಂಗಿಸುವ ವ್ಯವಸ್ಥೆ ಮಾಡಬೇಕು ಎಂದರು.

ಸಣ್ಣ ನೀರಾವರಿಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಜಿಲ್ಲೆಗೆ ಕಳುಹಿಸಿ ನೀರು ಇಂಗಿಸುವ ಯೋಜನೆಯ ಅಂದಾಜು ಪಟ್ಟಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟರೆ, ಕೇಂದ್ರದಿಂದ ಅಗತ್ಯ ನೆರವು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಶಾಸಕ ವಿ.ಮುನಿಯಪ್ಪ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT