ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ವಿರುದ್ಧ ಟೀಕೆಗೆ ತೀವ್ರ ಖಂಡನೆ:ಕಾಂಗ್ರೆಸ್ ಮುಖಂಡರಿಂದ ಅಸಮಾಧಾನ

Last Updated 19 ಅಕ್ಟೋಬರ್ 2012, 8:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಶಾಸಕರಾದ ಡಾ.ಎಂ.ಸಿ.ಸುಧಾಕರ್ ಮತ್ತು ಎನ್.ಎಚ್.ಶಿವಶಂಕರ್‌ರೆಡ್ಡಿ ವಿರುದ್ಧ ಮಾತನಾಡುವ ನೈತಿಕ ಹಕ್ಕು ಪೆರೇಸಂದ್ರದ ಡಾ.ಕೆ.ಸುಧಾಕರ್‌ಗೆ ಇಲ್ಲ. ಪಕ್ಷದೊಂದಿಗೆ ಪೂರ್ಣಪ್ರಮಾಣದಲ್ಲಿ ಗುರುತಿಸಿಕೊಳ್ಳದ ಅವರಿಗೆ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ಲಾಯರ್ ನಾರಾಯಣಸ್ವಾಮಿ ಹೇಳಿದರು.

ನಗರದ ಕೆಇಬಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಮ್ಮೆಯೂ ಜನಪ್ರತಿನಿಧಿಯಾಗಿ ಆಯ್ಕೆಯಾಗದ ಮತ್ತು ಕಾಂಗ್ರೆಸ್‌ನ ತತ್ವ-ಸಿದ್ಧಾಂತದ ಅರಿವಿಲ್ಲದ ಡಾ.ಕೆ.ಸುಧಾಕರ್ ಅವರು ವಿನಾಕಾರಣ ಕಾಂಗ್ರೆಸ್ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಡಲೇ ಅವರು ಶಾಸಕರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆ ಅಥವಾ ರಾಜ್ಯದಲ್ಲಿ ನಡೆದ ಯಾವುದೇ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸದ ಡಾ. ಕೆ.ಸುಧಾಕರ್, ಈಗ ಕಾಂಗ್ರೆಸ್‌ನಲ್ಲಿ ಭಾರಿ ಸಮಸ್ಯೆ ಸೃಷ್ಟಿಯಾಗಿದೆ ಎಂಬಂತೆ ವರ್ತಿಸುತ್ತಿದ್ದಾರೆ. ಪಕ್ಷದ ಶಿಸ್ತು, ತತ್ವ, ಸಿದ್ಧಾಂತದ ಅರಿವಿಲ್ಲದ ಅವರು ಮನಬಂದಂತೆ ಶಾಸಕರನ್ನು ಟೀಕಿಸುವುದೇ ರಾಜಕಾರಣವೆಂದು ಭಾವಿಸಿದ್ದಾರೆ ಎಂದರು.

2008ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಡಾ.ಕೆ.ಸುಧಾಕರ್ ಮತ್ತು ಅವರ ತಂದೆ ಕೇಶವರೆಡ್ಡಿಯವರು ಜೆಡಿಎಸ್‌ನಿಂದ ಟಿಕೆಟ್‌ಗೆ ಪ್ರಯತ್ನಿಸುತ್ತಿದ್ದರು. ಟಿಕೆಟ್ ಸಿಗದ ಕಾರಣಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಕೆಪಿಸಿಸಿ ಸದಸ್ಯರಾಗಿ ಇದ್ದದ್ದನ್ನೇ ನೆಪವಾಗಿಸಿಕೊಂಡು ಅವರು ಮನಬಂದಂತೆ ಟೀಕಿಸುತ್ತಿದ್ದಾರೆ. ಹೀಯಾಳಿಸುವ ಸಂಸ್ಕೃತಿ ಕಾಂಗ್ರೆಸ್‌ನಲ್ಲಿ ಇಲ್ಲ. ಈ ಸಂಗತಿಯನ್ನು ಡಾ.ಕೆ.ಸುಧಾಕರ್ ಅರಿಯಬೇಕು ಎಂದರು.

ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕಡೆ ಡಾ.ಕೆ.ಸುಧಾಕರ್ ಮತ್ತು ಅವರ ತಂದೆ ಕೇಶವರೆಡ್ಡಿ ಪಕ್ಷೇತರರಾಗಿ ಇತರ ಸದಸ್ಯರನ್ನು ಕಣಕ್ಕೆ ಇಳಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಪಣತೊಟ್ಟರು. ಜೆಡಿಎಸ್ ಮುಖಂಡರೊಂದಿಗೆ ಆಪ್ತ ಸಂಬಂಧ ಹೊಂದಿರುವ ಅವರಿಬ್ಬರು ತೋರಿಕೆಗೆ ಮಾತ್ರ ಕಾಂಗ್ರೆಸ್‌ನಲ್ಲಿ ಇದ್ದಾರೆ. ಅಂಥವರಿಂದ ಕಾಂಗ್ರೆಸ್‌ಗೆ ಇನ್ನಷ್ಟು ಹಿನ್ನಡೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಯಲುವಹಳ್ಳಿ ರಮೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಶಾಸಕರಾದ ಡಾ.ಎಂ.ಸಿ.ಸುಧಾಕರ್ ಮತ್ತು ಎನ್.ಎಚ್.ಶಿವಶಂಕರ್ ರೆಡ್ಡಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಚಿನ್ನಪ್ಪ ಅವರನ್ನು ಆಯ್ಕೆ ಮಾಡಲು ಆದ್ಯತೆ ನೀಡಿದ ಶಾಸಕರ ಅಭಿಪ್ರಾಯದಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಕಾಂಗ್ರೆಸ್ ಮುಖಂಡರಾದ ಅಡ್ಡಗಲ್ ಶ್ರೀಧರ್ ಮತ್ತು ಎಂ.ಪ್ರಕಾಶ್ ಮಾತನಾಡಿ, ಡಾ. ಕೆ.ಸುಧಾಕರ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಬೇಕು. ಶಿಸ್ತು ಕ್ರಮ ಕೈಗೊಳ್ಳದಿದ್ದಲ್ಲಿ ನಾವು ಪಕ್ಷದಲ್ಲಿ ಉಳಿಯುವುದು ಕಷ್ಟವಾಗುತ್ತದೆ ಎಂದರು. ಪಕ್ಷದ ಮುಖಂಡರಾದ ಎ.ಡಿ.ಆವುಲಪ್ಪ, ಚದುಲಪುರ ನಾರಾಯಣಸ್ವಾಮಿ, ಗೋವಿಂದಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಬಹಿರಂಗ ಸಭೆಯಾದ ಪತ್ರಿಕಾಗೋಷ್ಠಿ
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಂತರದಲ್ಲಿ ನಡೆದ ಪ್ರಮುಖ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿರುವುದು ಸ್ಪಷ್ಟವಾಗಿದ್ದು, ಒಂದೊಂದು ಬಣಕ್ಕೆ ಸೇರಿದವರು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಬಹಿರಂಗ ಸಭೆ ಮಾದರಿಯಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರಲ್ಲಿ ಕೆಲವರು ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಪರ, ಇನ್ನೂ ಕೆಲವರು ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಪರ ವಾದ ಮಂಡಿಸುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದು ಕೆಲವೇ ದಿನಗಳಲ್ಲಿ ಶಾಸಕರಾದ ಡಾ.ಎಂ.ಸಿ.ಸುಧಾಕರ್, ಎನ್.ಎಚ್.ಶಿವಶಂಕರ್ ರೆಡ್ಡಿಯವರು ತಮ್ಮ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳನ್ನು ನಡೆಸಿ, ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದರಿಂದ ಸಿಟ್ಟಿಗೆದ್ದ ಕೆ.ಎಚ್.ಮುನಿಯಪ್ಪ ಬೆಂಬಲಿಗರು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಡಾ. ಕೆ.ಸುಧಾಕರ್ ನೇತೃತ್ವದಲ್ಲಿ ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ನಡೆಸಿ, ಇಬ್ಬರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಭವನ, ಕೆಇಬಿ ಸಭಾಂಗಣ  ಮುಂತಾದೆಡೆ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು ತಮ್ಮಂದಿಗೆ ನೂರಾರು ಕಾರ್ಯಕರ್ತರನ್ನು ಕರೆತರುತ್ತಿದ್ದಾರೆ.

ಕಾರ್ಯಕರ್ತರಲ್ಲಿ ಗೊಂದಲ

ಚಿಕ್ಕಬಳ್ಳಾಪುರ: ನಗರದ ಕೆಇಬಿ ಸಭಾಂಗಣದಲ್ಲಿ ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಪಕ್ಷದ ಕಾರ್ಯಕರ್ತರೊಬ್ಬರು ಅಡ್ಡಿಪಡಿಸಿ, ಕೇಂದ್ರ ಸಚಿವರಾದ ವೀರಪ್ಪ ಮೊಯಿಲಿ ವಿರುದ್ಧ ಮತ್ತು ಕೆ.ಎಚ್.ಮುನಿಯಪ್ಪ ಪರ ಮಾತನಾಡಿದ ಹಿನ್ನೆಲೆಯಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾದ ಘಟನೆ ಗುರುವಾರ ನಡೆಯಿತು.

ಕಾಂಗ್ರೆಸ್‌ನಲ್ಲಾದ ಇತ್ತೀಚಿನ ಬೆಳವಣಿಗೆ ಸಂಬಂಧಿಸಿದಂತೆ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಎದ್ದು ನಿಂತು, `ಇದಕ್ಕೆಲ್ಲ ವೀರಪ್ಪ ಮೊಯಿಲಿ ಮತ್ತು ಕೆ.ಎಚ್.ಮುನಿಯಪ್ಪ ಅವರೇ ಕಾರಣ. ವೀರಪ್ಪ ಮೊಯಿಲಿ ನಿದ್ದೆ ಮಾಡುತ್ತಿದ್ದರೆ, ಕೆ.ಎಚ್.ಮುನಿಯಪ್ಪ ಕೆಲಸ ಮಾಡುತ್ತಿದ್ದಾರೆ~ ಎಂದರು. ಇದರಿಂದ ಕಾಂಗ್ರೆಸ್‌ನ ಕಾರ್ಯಕರ್ತರಲ್ಲಿ ಗೊಂದಲ ಮೂಡಿತು. ಅವರನ್ನು ಸಮಾಧಾನಪಡಿಸಲು ಮುಖಂಡರು ಹರಸಾಹಸ ಪಡಬೇಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT