ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ:ಅಂಧರಿಗೂ ಅವಕಾಶ ನೀಡಲು ಒಪ್ಪಿಗೆ

Last Updated 21 ಜುಲೈ 2012, 19:30 IST
ಅಕ್ಷರ ಗಾತ್ರ

ಮೈಸೂರು:  ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಅಂಧರಿಗೂ ಆದ್ಯತೆ ನೀಡಬೇಕು ಎಂಬ ಏಳು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ದೊರೆತಿದೆ.ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅಂಧರಿಗೂ ಕಡ್ಡಾಯವಾಗಿ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು ಎಂಬ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಶಿಕ್ಷಕರ ನೇಮಕಾತಿಯಲ್ಲಿ ಅಂಧರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು 2005ರಲ್ಲಿ ಶಿಕ್ಷಣ ಇಲಾಖೆ ಹೇಳಿತ್ತು. ಇದನ್ನು ಪ್ರಶ್ನಿಸಿ ರಾಷ್ಟ್ರೀಯ ಅಂಧರ ಒಕ್ಕೂಟವು 2006 ರಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅಂಧರಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಇದಕ್ಕೆ ಒಪ್ಪದ ಇಲಾಖೆ ಸುಪ್ರೀಂಕೋರ್ಟ್‌ಗೆ ಮೇಲ್ವನವಿ ಸಲ್ಲಿಸಿತ್ತು.

ಹೈಕೋರ್ಟ್ ಸೂಚನೆ ನೀಡಿದರೂ ಮೀಸಲಾತಿ ಕೊಡದಿರುವುದು ನ್ಯಾಯಾಂಗ ನಿಂದನೆ ಮಾಡಿದಂತಾಗುತ್ತದೆ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಛಾಟಿ ಬೀಸಿತ್ತು.ಇದರಿಂದ ಸುಪ್ರೀಂಕೋರ್ಟ್ ಮುಖಭಂಗದಿಂದ ತಪ್ಪಿಸಿಕೊಳ್ಳಲು ಮುಂದಾದ ಶಿಕ್ಷಣ ಇಲಾಖೆ ಮೀಸಲಾತಿ ನೀಡಲು ಒಪ್ಪಿಗೆ ಸೂಚಿಸಿದೆ.

2011 ರಲ್ಲಿ ಪ್ರೌಢಶಾಲೆಗಳಲ್ಲಿ ಅಂಧರಿಗೆ ಮೀಸಲಾತಿ ಕಲ್ಪಿಸಲಾಗಿತ್ತು. ಇದೀಗ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಲಾಗುತ್ತಿದ್ದು, 8-10 ದಿನಗಳಲ್ಲಿ ಈ ಬಗ್ಗೆ ಅಧಿಕೃತ ಗೆಜೆಟ್ ನೋಟಿಫಿಕೇಶನ್ ಹೊರಬೀಳಲಿದೆ.

ಮಹಿಳೆಯರ, ಮಕ್ಕಳ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹಾಗೂ ಹುದ್ದೆ ಗುರುತಿಸುವ ಸಮಿತಿ ಅಧ್ಯಕ್ಷರೂ ಆದ ರಮೇಶ್ ಝಳಕಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗವಿಕಲರ ಅಧಿನಿಯಮದ ಆಯುಕ್ತ ಕೆ.ವಿ.ರಾಜಣ್ಣ, ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು, ವಿವಿಧ ಸ್ವಯಂ ಸಂಸ್ಥೆಗಳು ಹಾಗೂ ವೈದ್ಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT