ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣಕ್ಕೆ ಹೆಚ್ಚು ಒತ್ತು: ಲಾಭ ಪಡೆಯಲು ಸಲಹೆ

Last Updated 23 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಹೊಸಕೋಟೆ:  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಕರೆ ನೀಡಿದರು.

ಕಾರ್ಕಳದ ಕಿಸಾನ್ ಸಭಾ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ದಸರಾ ರಜೆ ವಿಶೇಷ ಬೋಧನಾ ಶಿಬಿರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಭವಿಷ್ಯದ ದೃಷ್ಟಿಯಿಂದ ಮಕ್ಕಳ ಜ್ಞಾನಮಟ್ಟ ಹೆಚ್ಚಿಸಿ ಆ ಮೂಲಕ ಶಕ್ತಿಯುತ ರಾಷ್ಟ್ರ ನಿರ್ಮಾಣ ಮಾಡುವ ಉದ್ದೇಶದಿಂದ ತಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಾಲ್ಲೂಕುಗಳಲ್ಲಿನ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಈ ಬೋಧನಾ ಕಾರ್ಯಕ್ರಮವನ್ನು ಕಳೆದ ವರ್ಷದಿಂದ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಿಂತ ಕಡಿಮೆ ಇಲ್ಲ ಎಂದ ಅವರು, ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಆಕರ್ಷಣೀಯವಾಗಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೇಳಿದರು.

ಮಕ್ಕಳು ಕಲಿಯುವ ಹವ್ಯಾಸ ಬೆಳೆಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರೂ ಅವರಲ್ಲಿ ಆಸಕ್ತಿ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದ ಅವರು, 7ನೇ ತರಗತಿ ಬಿಟ್ಟ ಮಕ್ಕಳನ್ನು ಹುಡುಕಿ ಅವರಿಗೆ ಮತ್ತೆ ಶಿಕ್ಷಣ ನೀಡುವ ಸಂಬಂಧ ಚಿಕ್ಕಬಳ್ಳಾಪುರದಲ್ಲಿ ಶಾಲೆಯೊಂದನ್ನು ತೆರೆಯಲಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶಪ್ಪ, ಇಂತಹ ಬೋಧನಾ ಶಿಬಿರಗಳ ಸಹಕಾರದಿಂದ ಕಳೆದ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಲು ನೆರವಾಯಿತು ಎಂದರು.
ದೇವನಹಳ್ಳಿ ಶಾಸಕ ವೆಂಕಟಸ್ವಾಮಿ, ಮಾಜಿ ಶಾಸಕ ಎನ್.ನಾಗರಾಜು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎಂ.ವಾಸುದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ, ಮುಖ್ಯ ಶಿಕ್ಷಕಿಯರಾದ ಸಾವಿತ್ರಿದೇವಿ, ಶಾಂತ   ಕುಮಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT