ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಭದಿನ: 1326 ನಾಮಪತ್ರ ಸಲ್ಲಿಕೆ

Last Updated 15 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಹುತೇಕ ಪೂರ್ಣಗೊಳ್ಳುತ್ತಿದ್ದಂತೆಯೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸೋಮವಾರ ಒಂದೇ ದಿನ ಒಟ್ಟು 1,326 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದ್ದಾರೆ.

ಜೋತಿಷ್ಯ, ಸಂಖ್ಯಾಶಾಸ್ತ್ರದಲ್ಲಿ ನಂಬಿಕೆಯುಳ್ಳ ರಾಜಕಾರಣಿಗಳು ಸೋಮವಾರ ಒಳ್ಳೆಯ ದಿನ ಎಂದು ಭಾವಿಸಿ ನಾಮಪತ್ರ ಸಲ್ಲಿಸಲು ಮುಗಿಬಿದ್ದರು. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕೆಜೆಪಿ, ಬಿಎಸ್‌ಆರ್ ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಬಹುತೇಕ ಅಭ್ಯರ್ಥಿಗಳು ತಮಗೆ ಇಷ್ಟವಾದ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಶನಿವಾರದವರೆಗೂ ಸಲ್ಲಿಕೆಯಾಗಿದ್ದ 256 ನಾಮಪತ್ರಗಳು ಸೇರಿ, ಇದುವರೆಗೆ ಒಟ್ಟು 1,582 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್‌ನ ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿಜೆಪಿಯ ಕೆ.ಜಿ.ಬೋಪಯ್ಯ, ಆರ್. ಅಶೋಕ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ವಿ.ಸೋಮಣ್ಣ, ಸುರೇಶ್‌ಕುಮಾರ್, ಮುರುಗೇಶ ನಿರಾಣಿ, ಸಿ.ಟಿ.ರವಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಬಸವರಾಜ ಬೊಮ್ಮಾಯಿ, ಪಿ.ಸಿ.ಮೋಹನ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಪಿ.ಜಿ.ಆರ್.ಸಿಂಧ್ಯ, ಎಚ್.ಡಿ. ರೇವಣ್ಣ, ಕೆಜೆಪಿಯ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಬಿಎಸ್‌ಆರ್ ಕಾಂಗ್ರೆಸ್‌ನ ಶ್ರೀರಾಮುಲು, ಪೂಜಾ ಗಾಂಧಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದ ಪ್ರಮುಖರು.

ಬುಧವಾರ ಶೆಟ್ಟರ್: ಬಿಜೆಪಿ ಟಿಕೆಟ್ ದೊರೆಯದ ಕಾರಣ ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯಶೆಟ್ಟಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಾಲೂರು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸಂಪುಟದ ಬಹುತೇಕ ಸಚಿವರು ಸೋಮವಾರ ನಾಮಪತ್ರ ಸಲ್ಲಿಸಿದರು. ಆದರೆ, ಶೆಟ್ಟರ್ ಅವರು ಇನ್ನೂ ನಾಮಪತ್ರ ಸಲ್ಲಿಸಿಲ್ಲ. ಅವರು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇದೇ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಹೀಗಾಗಿ ಇನ್ನು ಎರಡು ದಿನ ಮಾತ್ರ ಕಾಲಾವಕಾಶ ಇದೆ. ಹಳೆ ಮೈಸೂರು ಭಾಗದಲ್ಲಿ ಕೆಲವರು ಮಂಗಳವಾರ ನಾಮಪತ್ರ ಸಲ್ಲಿಸುವುದಿಲ್ಲ. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮಂಗಳವಾರವೂ ಮದುವೆ, ನಾಮಕರಣ ಇತ್ಯಾದಿ ಶುಭ ಕಾರ್ಯಗಳನ್ನು ಮಾಡುತ್ತಾರೆ. ಹೀಗಾಗಿ ಆ ಭಾಗದಲ್ಲಿ ಮಂಗಳವಾರವೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ಬಿ ಫಾರಂ ಇಲ್ಲದೆಯೂ ನಾಮಪತ್ರ ಸಲ್ಲಿಸಬಹುದು. ಆದರೆ, ಬುಧವಾರ ಮಧ್ಯಾಹ್ನ ಮೂರು ಗಂಟೆ ಒಳಗೆ ಬಿ ಫಾರಂ ಸಲ್ಲಿಸಬೇಕು. ಇಲ್ಲದಿದ್ದರೆ ರಾಜಕೀಯ ಪಕ್ಷಗಳ ಅಧಿಕೃತ ಅಭ್ಯರ್ಥಿ ಎಂದು ಪರಿಗಣಿಸಲು ಆಗುವುದಿಲ್ಲ. ಅಭ್ಯರ್ಥಿಗಳು ನೀಡಿರುವ ಮಾಹಿತಿ ಆಧರಿಸಿ ಚುನಾವಣಾಧಿಕಾರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ತಿಳಿಸಿದರು.

ಪ್ರಜಾವಾಣಿ ವಾರ್ತೆ: ಬೆಂಗಳೂರು ನಗರದ 6.16 ಲಕ್ಷ  ಸೇರಿದಂತೆ ಒಟ್ಟು 19.96 ಲಕ್ಷ  ಜನರ ಹೆಸರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗದಿಂದ ಸೂಚನೆ ಬಂದಿದೆ.
ಆದರೆ, ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಗೆ ಮತ್ತಷ್ಟು ಕಾಲಾವಕಾಶ ನೀಡುವಂತೆ ಚುನಾವಣಾ ಸಿಬ್ಬಂದಿ ಕೋರಿದ್ದಾರೆ. ಹೀಗಾಗಿ ಇದೇ 17ರ ನಂತರವೂ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂದು ಝಾ ಹೇಳಿದರು.

ಆಮಿಷಗಳು:  ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಒಟ್ಟು ್ಙ5.20 ಕೋಟಿ ಮೌಲ್ಯದ ವಿವಿಧ ವಸ್ತುಗಳು, ಮದ್ಯ, ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT