ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪರ್ಕ ರಸ್ತೆಗಳ ಅಭಿವೃದ್ಧಿ ಶೀಘ್ರ

Last Updated 19 ಜನವರಿ 2011, 9:05 IST
ಅಕ್ಷರ ಗಾತ್ರ

ಶಿವಮೊಗ್ಗ:  ನಗರದ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರೂ 88 ಕೋಟಿ ಪ್ರಸ್ತಾವ ಸಲ್ಲಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ನಗರದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ನಗರದ ವಿವಿಧ ಬಡಾವಣೆಗಳಲ್ಲಿನ 32 ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಚಾಲನೆಯಲ್ಲಿದ್ದು, ಈ ಪೈಕಿ 28 ರಸ್ತೆಗಳ ಅಭಿವೃದ್ಧಿ ಪೂರ್ಣಗೊಂಡಿದೆ. ಅದರಂತೆ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದೆ ಎಂದರು.

ಪ್ರಮುಖ ರಸ್ತೆಗಳ ಕಾಂಕ್ರಿಟಿಕರಣದ ಜತೆಗೆ ಕನ್ಸರ್‌ವೆನ್ಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಿ ತಿಂಡಿಗಾಡಿ ಮತ್ತು ವಾಹನಗಳ ನಿಲುಗಡೆಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಗ ಜಿಲ್ಲಾಧಿಕಾರಿ ಪೊನ್ನುರಾಜ್, ನಗರದಲ್ಲಿ ಒಟ್ಟು 840 ತಿಂಡಿ ಅಂಗಡಿಗಳಿದ್ದು, ಅವುಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಈಗಾಗಲೇ ಕಸ್ತೂರಬಾ ರಸ್ತೆಯಲ್ಲಿನ ತಿಂಡಿಗಾಡಿಗಳ ಸಮಸ್ಯೆ ಮತ್ತು ವಾಹನ ನಿಲುಗಡೆಗೆಯೋಜನೆ ಸಿದ್ಧಪಡಿಸಲಾಗಿದೆ. ಪ್ರಾಯೋಗಿಕವಾಗಿ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕ ಕನ್ಸರ್‌ವೆನ್ಸಿಯನ್ನು ಅಭಿವೃದ್ಧಿಪಡಿಸಲಾಗುವುದು. ನಂತರ, ಖಾಸಗಿ ಸಹಭಾಗಿತ್ವದಲ್ಲಿ ಬಿಒಟಿ ಆಧಾರದ ಮೇಲೆ ಅಭಿವೃದ್ಧಿಪಡಿಸಿ ಬಳಕೆದಾರರಿಂದ ಶುಲ್ಕ ವಸೂಲು ಮಾಡಲು ಉದ್ದೇಶಿಸಿದೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡ ಈಶ್ವರಪ್ಪ, ಯುಜಿಡಿ ಕಾಮಗಾರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಳೇ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ, ಕಪ್ಪುಪಟ್ಟಿಗೆ ಸೇರಿಸುವಂತೆ ಸೂಚಿಸಿದರು. ಕ್ಷಿಪ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಜನರಿಗೆ ಆಗುತ್ತಿರುವ ಅನಾನುಕೂಲವನ್ನು ಪರಿಹರಿಸಬೇಕೆಂದು ಆದೇಶಿಸಿದರು.

ಎನ್.ಟಿ. ರಸ್ತೆಯ ಒಂದು ಬದಿ 40ಅಡಿ ವಿಸ್ತರಣೆ ಮಾಡುವ ಚಿಂತನೆಯಿದೆ. ಈ ರಸ್ತೆಯ ಒಂದುಭಾಗದಲ್ಲಿ ಸರ್ಕಾರಿ ಜಾಗ ಹೆಚ್ಚಿದೆ. ಇದರಿಂದ ತೆರವಾಗುವ ಕಟ್ಟಡಗಳ ಸಂಖ್ಯೆ ಕಡಿಮೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ರಸ್ತೆಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸುವುದಾಗಿ ಹೇಳಿದ ಈಶ್ವರಪ್ಪ, ಅಲ್ಲಿನ ಕಟ್ಟಡ ಮಾಲೀಕರು, ನಿವಾಸಿಗಳು ಹಾಗೂ ವರ್ತಕರ ಅಭಿಪ್ರಾಯ ಪಡೆದು ರಸ್ತೆ ವಿಸ್ತರಣೆಗೆ ಮುಂದಾಗಬೇಕು ಎಂದು ಸೂಚಿಸಿದರು.

ನೆಹರು ರಸ್ತೆ, ಶಂಕರಮಠ ರಸ್ತೆ ಹಾಗೂ ರೈಲ್ವೆ ನಿಲ್ದಾಣ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿ, ಹಣ ಬಿಡುಗಡೆ ಮಾಡಿದೆ. ಇಷ್ಟರಲ್ಲಿಯೇ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಶರಾವತಿ ನಗರ ರಸ್ತೆ ವಿಸ್ತರಣೆಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದರೆ, ಈ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾದುಹೋದ ಹಿನ್ನೆಲೆಯಲ್ಲಿ ಕಾಂಕ್ರಿಟ್ ರಸ್ತೆ ಮಾಡುವ ನಿರ್ಧಾರ ಬೇಡ ಎಂದು ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ, ನಗರಸಭೆ ಅಧ್ಯಕ್ಷ ಕೆ.ಎಸ್. ಗಂಗಾಧರಪ್ಪ, ಉಪಾಧ್ಯಕ್ಷ ಬಿ. ಸತ್ಯನಾರಾಯಣ, ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, ನಗರಸಭೆ ಸದಸ್ಯರುಉಪಸ್ಥಿತರಿದ್ದರು.

ಅಣ್ಣನ ಮಾತಿಗೆ ಅಸಮ್ಮತಿ:  ಸಭೆಯಲ್ಲಿ ನಗರಸಭೆ ಅಧ್ಯಕ್ಷ ಕೆ.ಎಸ್. ಗಂಗಾಧರಪ್ಪ, ಬಿ.ಎಚ್. ರಸ್ತೆಯ ಕಾನ್ವೆಂಟ್ ವೃತ್ತದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಆದರೆ, ಇದಕ್ಕೆ ಈಶ್ವರಪ್ಪ, ಕಾನ್ವೆಂಟ್ ವೃತ್ತದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದರೆ ಅಪಘಾತಗಳಾಗುವ ಸಾಧ್ಯತೆ ಹೆಚ್ಚಿದೆ ಎಂದು ಅಸಮ್ಮತಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT