ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ವರದಿ ಸಲ್ಲಿಸಲು ಸೂಚನೆ

Last Updated 19 ಅಕ್ಟೋಬರ್ 2011, 11:10 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನಲ್ಲಿ ಕಳ್ಳಬಟ್ಟಿ ತಯಾರಿಕೆಯಲ್ಲಿ ತೊಡಗಿ ಕೊಂಡಿರುವ ಜನರಿಗೆ ಪರ್ಯಾಯ ಉದ್ಯೋಗಾವಕಾಶ ನೀಡುವ ನಿಟ್ಟಿನಲ್ಲಿ ಸಮಗ್ರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಡಾ. ಏಕ್‌ರೂಪ್ ಕೌರ್ ಅವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಅಬಕಾರಿ ಇಲಾಖೆಯ ಕಳ್ಳಬಟ್ಟಿ ನಿರ್ಮೂಲನೆ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, “ಕಳ್ಳಬಟ್ಟಿ ಸಿದ್ಧಪಡಿಸುವವರನ್ನು ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳನ್ನಾಗಿ ಆಯ್ಕೆ ಮಾಡುವ ಮೂಲಕ ಅವರನ್ನು ಈ ವೃತ್ತಿಯಿಂದ ಮುಕ್ತಗೊಳಿಸಬೇಕಾಗಿದೆ. ಇವರಿಗೆ ಪುನರ್ವಸತಿ ಕಲ್ಪಿಸಲು ಪ್ರಾಥಮಿಕ ಹಂತದಲ್ಲಿ ಬೆಳಗಾವಿ ತಾಲ್ಲೂಕಿನ ಮೂರು ಗ್ರಾಮಗಳ ಸಮೀಕ್ಷೆ ನಡೆಸಿ ಶೀಘ್ರದಲ್ಲೇ ವರದಿ ಒಪ್ಪಿಸಿ” ಎಂದು ಆದೇಶಿಸಿದರು.

ಕಳ್ಳಬಟ್ಟಿ ತಯಾರಿಸುವ ಗ್ರಾಮಗಳ ಮನೆ-ಮನೆಗೆ ಭೇಟಿ ನೀಡಿ ಆ ಕುಂಟುಬದಲ್ಲಿ ಎಷ್ಟು ಜನ ಉದ್ಯೋಗದಲ್ಲಿದ್ದಾರೆ, ಇನ್ನೆಷ್ಟು ಜನ ನಿರುದ್ಯೋಗಿಗಳಾಗಿದ್ದಾರೆ. ಅವರ ಶಿಕ್ಷಣ ಎಷ್ಟಾಗಿದೆ ಎಂಬಿತ್ಯಾದಿ ಸಮಗ್ರ ಮಾಹಿತಿ ಒಳಗೊಂಡ ವರದಿಯನ್ನು ಸಿದ್ಧಪಡಿಸಬೇಕು. ಇದಕ್ಕೆ ಸ್ಥಳೀಯ ಅಧಿಕಾರಿಗಳ ಸಹಾಯವನ್ನೂ ಪಡೆದುಕೊಳ್ಳಿ ಎಂದರು.

ಹೆಚ್ಚಾಗಿ ಅರಣ್ಯ ಪ್ರದೇಶಗಳಲ್ಲೇ ಕಳ್ಳಬಟ್ಟಿ ದಂಧೆ ನಡೆಯುತ್ತಿದ್ದು, ಅರಣ್ಯ ಸಂರಕ್ಷಿಸಬೇಕಾದ ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಇನ್ನು ಮುಂದೆ ಕಳ್ಳಬಟ್ಟಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಆದೇಶಿಸಿದರು.

ಅಬಕಾರಿ ಇಲಾಖೆ ಪ್ರಭಾರಿ ಉಪ ಆಯುಕ್ತ ಶಿವನಗೌಡ, “ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ ನಡೆಸುವಾಗ ಅರಣ್ಯದೊಳಗೆ ಎದುರಾಗುವ ಸಮಸ್ಯೆಗಳ ಬಗ್ಗೆ ನಮ್ಮ ಸಿಬ್ಬಂದಿಗೆ ಅರಿವು ಇರುವುದಿಲ್ಲ. ಹೀಗಾಗಿ ನಮಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹಾಯ ಅಗತ್ಯವಿದೆ. ಕಳ್ಳಬಟ್ಟಿ ನಿರ್ಮೂಲನೆಗೆ ಗ್ರಾಮ ಅರಣ್ಯ ಸಮಿತಿಯವರೂ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಅಬಕಾರಿ ಜಾರಿ ಹಾಗೂ ಲಾಟರಿ ನಿಷೇಧ ದಳದ ಡಿಎಸ್ಪಿ ಕೋರವಾರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮಾ ಸಾಲಿಗೌಡರ, ಡಿವೈಎಸ್ಪಿ ಅಶ್ವಿನಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT