ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಪರಿಹರಿಸಲು ಜಂಟಿ ಸಮೀಕ್ಷೆ

ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮ ಮತ್ತು ಸರ್ವಿಸ್‌ ರಸ್ತೆಗಳ ನಿರ್ಮಾಣ ವಿಚಾರ
Last Updated 4 ಡಿಸೆಂಬರ್ 2013, 6:41 IST
ಅಕ್ಷರ ಗಾತ್ರ

ಹಾಸನ: ಹಾಸನ– ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಮತ್ತು ಸರ್ವಿಸ್‌ ರಸ್ತೆಗಳ ನಿರ್ಮಾಣದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಶೀಘ್ರವೇ ಲೋಪಗಳನ್ನು ಸರಿಪಡಿಸಬೇಕು’ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಿಯಾದ ಸೌಲಭ್ಯಗಳಿಲ್ಲದಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ಗುತ್ತಿಗೆದಾರರು ಟೋಲ್ ಸಂಗ್ರಹಕ್ಕೆ ಮುನ್ನ ಸಾರ್ವಜನಿಕ ಬದ್ಧತೆ ಪ್ರದರ್ಶಿಸಬೇಕು. ಸ್ಥಳೀಯ ಜನರ ಸಮಸ್ಯೆ ಆಲಿಸಿ ಸರಿಪಡಿಸಬೇಕು. ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆಗಳ ಕೊರತೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ಅದರ ಹೊಣೆಯನ್ನು ಪ್ರಾಧಿಕಾರ ಮತ್ತು ಗುತ್ತಿಗೆ ಪಡೆದಿರುವ ಸಂಸ್ಥೆಗಳೇ ಹೊರಬೇಕು. ಆಗಿರುವ ತಪ್ಪನ್ನು ಶೀಘ್ರದಲ್ಲೇ ಸರಿಪಡಿಸಿ ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ರಸ್ತೆಗಳು ಮಾತ್ರ ಗುಣಮಟ್ಟದಿಂದ ಕೂಡಿದ್ದರೆ ಸಾಲದು, ಇತರ ಸಣ್ಣಪುಟ್ಟ ವಿಚಾರಗಳ ಬಗ್ಗೆಯೂ ಗಮನ ಹರಿಸಬೇಕು. ವಿಸ್ತೃತ ಯೋಜನಾ ವರದಿ, ಕರಾರು ಪತ್ರ, ಟೆಂಡರ್ ಸೂಚನೆಗಳಲ್ಲಿ ಇರುವಂತೆಯೇ ಯೋಜನೆ ಅನುಷ್ಠಾನವಾಗಬೇಕು. ರಸ್ತೆಯ ಶೇ. 77 ರಷ್ಟು ಕೆಲಸ ಮುಕ್ತಾಯ ಗೊಂಡಿದ್ದರೂ ಸೌಲಭ್ಯಗಳ ಬಗ್ಗೆ ಯಾಕೆ ಗಮನ ಹರಿಸಿಲ್ಲ? ಎಂದು  ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ, ‘ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯೋಜಿಸಿರುವ ಆಂಬುಲೆನ್ಸ್ ಸಮರ್ಪಕವಾಗಿ ಸೇವೆಗೆ ಲಭ್ಯವಾಗಬೇಕು. ಭದ್ರತಾ ಸಿಬ್ಬಂದಿ ಜನರಲ್ಲಿ ಭೀತಿ ಹುಟ್ಟಿಸುವಂತೆ ವರ್ತಿಸಬಾರದು. ಅಗತ್ಯವಿರುವೆಡೆ  ಸೂಚನಾ ಫಲಕ ಅಳವಡಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಎಲ್.ಅಂಡ್.ಟಿ. ಸಂಸ್ಥೆಯ ಪ್ರತಿನಿಧಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸುರೇಂದ್ರ ಕುಮಾರ್ ಮಾತನಾಡಿ, ‘ಜಿಲ್ಲೆಯ ನುಗ್ಗೇಹಳ್ಳಿ ಕ್ರಾಸ್ ಮತ್ತು ಬಾಗೂರು ಹ್ಯಾಂಡ್ ಪೋಸ್ಟ್ ಬಳಿ ಅಂಡರ್ ಪಾಸ್ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾದ ತಕ್ಷಣ ಕಾಮಗಾರಿ ಪ್ರಾರಂಭಿಸಿ ಆರು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಜಿಲ್ಲಾಧಿಕಾರಿ ಯವರು ನೇಮಿಸುವ ಪರಿಶೀಲನಾ ತಂಡದೊಂದಿಗೆ ಸಮೀಕ್ಷೆ ನಡೆಸಿ ಅಗತ್ಯ ಮಾರ್ಪಾಡುಗಳನ್ನು ಮಾಡುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗುವುದು’ ಎಂದರು.

ಎಲ್. ಅಂಡ್ ಟಿ. ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಶೀತಲ್ ಶಾನುಭಾಗ್‌, ‘ಒಟ್ಟು 72 ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಯೋಜಿಸಲಾಗಿದ್ದು ಅದರಲ್ಲಿ 42 ರಸ್ತೆಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದವುಗಳನ್ನು ಎರಡು ತಿಂಗಳಲ್ಲಿ ಮುಕ್ತಾಯಗೊಳಿಸಲಾಗುವುದು’ ಎಂದರು.
ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ರಾಮಚಂದ್ರ, ತಹಸೀಲ್ದಾರ್ ಮಂಜುನಾಥ್, ವಿಶೇಷ ಭೂ ಸ್ವಾಧೀನಾಧಿಕಾರಿ ಮಲ್ಲೇಶಯ್ಯ ಶಿರಿಶ್ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT