ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ವಿರುದ್ಧ ಶಾಮನೂರು ಕಿಡಿ

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಗುಣಮಟ್ಟದ ಕೊರತೆ
Last Updated 14 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರಾಧ್ಯಾಪಕರ ಹಾಗೂ ಮೂಲಸೌಲಭ್ಯಗಳ ಕೊರತೆಯಿಂದಾಗಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ವಿಫಲವಾಗುತ್ತಿವೆ. ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿರುವ ಸರ್ಕಾರವು, ಖಾಸಗಿ ಕಾಲೇಜುಗಳಿಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಯೋಚಿಸಬೇಕು’ ಎಂದು ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಸರ್ಕಾರದ ವಿರುದ್ಧ ಹರಿಹಾಯ್ದರು.

ಕೆಎಲ್‌ಇ ಸಂಸ್ಥೆಯ ಜವಾಹರಲಾಲ್‌ ನೆಹರೂ ವೈದ್ಯಕೀಯ ಕಾಲೇಜಿನ ಸುವರ್ಣ ಮಹೋತ್ಸವದ ಅಂಗವಾಗಿ ಶನಿವಾರ ಏರ್ಪಡಿಸಿದ್ದ ‘ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆ ಸುಧಾರಣೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಪಾತ್ರ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ಖಾಸಗಿ ವೈದ್ಯಕೀಯ ಕಾಲೇಜುಗಳು ಹಣ ಮಾಡುತ್ತಿವೆ ಎಂದು ಆರೋಪಿಸುತ್ತಿರುವುದು ಸರಿಯಲ್ಲ. ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆ– 2006 ಜಾರಿಗೊಳಿಸಲು ಸರ್ಕಾರ ತುದಿಗಾಲ ಮೇಲೆ ನಿಂತಿದೆ. ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿ ಕುರಿತು ಕಾಮೆಡ್‌–ಕೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ಅದು ನೀಡುವ ಆದೇಶದಂತೆ ನಡೆದುಕೊಳ್ಳಲಿದೆ’ ಎಂದರು.

‘ಖಾಸಗಿ ಕಾಲೇಜುಗಳಲ್ಲೂ ಪರಿಶಿಷ್ಟ  ಜಾತಿ ಹಾಗೂ ಪಂಗಡ, ಅಲ್ಪಸಂಖ್ಯಾತ ಮೀಸಲಾತಿ ಸೀಟುಗಳನ್ನು ಹಂಚಬೇಕು ಎಂದು ಒತ್ತಡ ಹೇರಲಾಗುತ್ತಿದೆ’ ಎಂದು ವಿಷಾದಿಸಿದರು.
‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿ ಕೊರತೆ ಇದೆ. ಮಾಸಿಕ ₨ 1.50 ಲಕ್ಷ ವೇತನ ನೀಡಿದರೂ ಒಳ್ಳೆಯ ಶಿಕ್ಷಕರು ಬರುತ್ತಿಲ್ಲ. ಒಂದು ಉಪಕರಣ ಖರೀದಿಸಬೇಕಾದರೆ ತಿಂಗಳುಗಟ್ಟಲೆ ಟೆಂಡರ್‌ ಪ್ರಕ್ರಿಯೆ ನಡೆಯುತ್ತದೆ.

ಆದರೆ, ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ತಕ್ಷಣವೇ ನಿರ್ಧಾರ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಅಗತ್ಯ ಉಪಕರಣಗಳ ಸೌಲಭ್ಯವನ್ನು ಕಲ್ಪಿಸಿಕೊಡುತ್ತಿವೆ. ಹೀಗಿದ್ದಾಗಲೂ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುತ್ತೇವೆ ಎಂದು ಸರ್ಕಾರ ಹೇಳುತ್ತಿರುವುದು ವಿಪರ್ಯಾಸವಾಗಿದೆ’ ಎಂದು ದಾವಣಗೆರೆಯ ಬಾಪೂಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶಿವಶಂಕರಪ್ಪ ಪ್ರತಿಪಾದಿಸಿದರು.

ಕೆಎಲ್‌ಇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT