ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ಬೃಹತ್ ಪ್ರತಿಭಟನಾ ರ್ಯಾಲಿ

Last Updated 8 ಜನವರಿ 2011, 8:20 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನಲ್ಲಿ ಸರ್ಕಾರಿ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೃಹತ್ ರ್ಯಾಲಿ ಮತ್ತು ಪ್ರತಿಭಟನಾ ಸಭೆ ಶುಕ್ರವಾರ ನಡೆಯಿತು. ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಿಂದ ಹೊರಟ ರ್ಯಾಲಿಯು ಬಸ್ ನಿಲ್ದಾಣ, ಬಸವೇಶ್ವರ ದೇವಸ್ಥಾನದ ಮಾರ್ಗವಾಗಿ ಜೇಸಿ ವೇದಿಕೆಯನ್ನು ತಲುಪಿತು. ಬಳಿಕ ಪ್ರತಿಭಟನಾ ಸಭೆಯನ್ನು ಏರ್ಪಡಿಸಲಾಗಿತ್ತು. ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳು ಸಾಮೂಹಿಕ ಸಾಂದರ್ಭಿಕ ರಜೆ ಹಾಕಿ ಬಹುಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ ‘ಇಲ್ಲಿನ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದವರನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದರು. ತಾಲ್ಲೂಕಿನಲ್ಲಿ ಸರ್ಕಾರಿ ನೌಕರರ ಮೇಲಿನ ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿದ್ದು ಅವರು ನೆಮ್ಮದಿಯಿಂದ ಕಾರ್ಯನಿರ್ವಹಿಸುವ ವಾತಾವರಣ ಕಲ್ಪಿಸಬೇಕು’ ಎಂದರು.

ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ನಿಸಾರ್ ಮಾತನಾಡಿ ‘ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸದಿದ್ದರೆ ಜ.14ರಂದು ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರಿ ನೌಕರರ ತಾಲ್ಲೂಕು ಸಂಘದ ಗೌರವಾಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್, ಜಿಲ್ಲಾ ನೌಕರರ ಸಂಘದ ಮಾಜಿ ಅಧ್ಯಕ್ಷೆ ಮೇರಿ ಮ್ಯಾಗ್ಡಲೀನ ಮತ್ತು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ್ ಮೊದಲಾದವರು ಮಾತನಾಡಿದರು.

ರ್ಯಾಲಿಯಲ್ಲಿ ಹೆಚ್ಚಿನ ಮಂದಿ ಸರ್ಕಾರಿ ನೌಕರರು ಪಾಲ್ಗೊಂಡಿದ್ದರಿಂದ ಬಹುಪಾಲು ಸರ್ಕಾರಿ ಕಚೇರಿಗಳು ಸಿಬ್ಬಂದಿಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಸರ್ಕಾರಿ ಶಾಲೆಯ ಶಿಕ್ಷಕರೂ ರ್ಯಾಲಿಯಲ್ಲಿ ಭಾಗವಹಿಸಿದ್ದರಿಂದ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯದೆ ವಿದ್ಯಾರ್ಥಿಗಳಿಗೆ ಪುಕ್ಕಟೆ ರಜೆ ಸಿಕ್ಕಿತು. ದೌರ್ಜನ್ಯ ಕಾಯಿದೆಯಡಿ ಕ್ರಮ ಜರುಗಿಸಲು ಆಗ್ರಹ: ಇಲ್ಲಿನ ಮೀನು ಮಾಂಸ ಮಳಿಗೆಗೆ ಬೀಗ ಜಡಿದ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಮೇಲೆ ಹಲ್ಲೆ, ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾತ ಜನಾಂಗದ ಮೇಲಿನ ದ್ವೇಷದ ನಿಲುವಿನಿಂದ ಬಲಾತ್ಕಾರವಾಗಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಮಳಿಗೆಗೆ ಬೀಗ ಹಾಕಿ ಲಕ್ಷಾಂತರ ರೂಪಾಯಿಗಳ ನಷ್ಟ ಮಾಡಿರುವುದನ್ನು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟದ ಪದಾಧಿಕಾರಿಗಳು ಖಂಡಿಸಿದ್ದಾರೆ.

ಒಕ್ಕೂಟದ ಜಿಲ್ಲಾಧ್ಯಕ್ಷ ಡಿ.ಎಸ್.ನಿರ್ವಾಣಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಇ.ಜಯೇಂದ್ರ, ಖಜಾಂಚಿ ಎಚ್.ಎ.ನಾಗರಾಜ್ ಹಾಗೂ ಸದಸ್ಯ ಎಚ್.ಡಿ.ಗುರುಲಿಂಗಪ್ಪ ನೀಡಿದ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಈ ಪ್ರಕರಣದಲ್ಲಿ ಭಾಗಿಯಾದ ಎರಡೂ ಪಕ್ಷದವರ ವಿರುದ್ಧ ದೌರ್ಜನ್ಯ ಕಾಯಿದೆಯಡಿ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT