ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಯಥಾಸ್ಥಿತಿಗೆ ಆಗ್ರಹಿಸಿ ಪ್ರತಿಭಟನೆ

ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯ್ದೆ– 2006 ಜಾರಿಗೆ ವಿರೋಧ
Last Updated 20 ಡಿಸೆಂಬರ್ 2013, 6:01 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯ ಸರ್ಕಾರ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯ್ದೆ– 2006ರ ಜಾರಿಗೆ ಕ್ರಮಕೈಗೊಳ್ಳಬಾರದು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಜಿಲ್ಲಾ ಬಹುಜನ ವಿದ್ಯಾರ್ಥಿ ಸಂಘದ ನೇತೃತ್ವದಡಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮೆರವಣಿಗೆ ಆರಂಭಿಸಿದರು. ಬಿ. ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ರಾಜ್ಯ ಸರ್ಕಾರ ಖಾಸಗಿ ವೃತ್ತಿಶಿಕ್ಷಣ ಸಂಸ್ಥೆಗಳ ಪರವಾಗಿದೆ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು.

ಕೂಡಲೇ, ಬಡವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮಾರಕವಾಗಿರುವ ಸಿಇಟಿ ಕಾಯ್ದೆಯನ್ನು ರದ್ದುಪಡಿಸಬೇಕು. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ 2006ರ ಸಿಇಟಿ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಕ್ಷೀರಭಾಗ್ಯ ಯೋಜನೆ ರೂಪಿಸಿದೆ. ಆದರೆ, ಹಳೆಯ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಮೂರು ಪಟ್ಟು ಶುಲ್ಕದ ಭಾಗ್ಯ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬಾರದು ಎಂದು ಆಗ್ರಹಿಸಿದರು.

ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಕಾಯ್ದೆ– 2006ರ ಸಂಬಂಧ 11 ಮಂದಿ ನ್ಯಾಯಾಧೀಶರು ಒಳಗೊಂಡ ಪೀಠದಲ್ಲಿ 6 ನ್ಯಾಯಾಧೀಶರು ಖಾಸಗಿ ಸಂಸ್ಥೆಗಳ ಪರವಾಗಿ ತೀರ್ಪು ನೀಡಿದ್ದಾರೆ. ಇದರಿಂದ ಸರ್ಕಾರಿ ಕೋಟ ಸೀಟುಗಳು ಖಾಸಗಿ ಸಂಸ್ಥೆಗಳಲ್ಲಿ ರದ್ದಾಗಲಿವೆ. ಇದರ ಪರಿಣಾಮ ಗ್ರಾಮೀಣ ಪ್ರದೇಶ, ಎಸ್‌ಸಿ, ಎಸ್‌ಟಿ, ಓಬಿಸಿ, ಮೇಲ್ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಕನಸು ಭಗ್ನವಾಗಲಿದೆ ಎಂದು ಆರೋಪಿಸಿದರು.

ಸರ್ಕಾರ ಬಡವಿದ್ಯಾರ್ಥಿಗಳ ಪರವಾಗಿ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗು­ವುದು ಎಂದು ಎಚ್ಚರಿಸಿದರು.

ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಪರ್ವತ್‌ರಾಜ್, ಅಧ್ಯಕ್ಷ ಶ್ರೀಧರ್, ಸಂಘಟನಾ ಕಾರ್ಯದರ್ಶಿ ಮಹೇಂದ್ರ, ಮಹೇಶ್, ಚೇತನ್, ಭಾವನಾ, ಶಿಲ್ಪಾ, ಶ್ವೇತಾ, ಅಶ್ವಿನಿ ಸೇರಿದಂತೆ ಜೆಎಸ್ಎಸ್ ಮಹಿಳಾ ಕಾಲೇಜು, ಸರ್ಕಾರಿ ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ಕಾಲೇಜು, ಸೇವಾಭಾರತಿ ಕಾಲೇಜು, ಸಂತ ಫ್ರಾಸ್ಸಿಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT