ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ರಾಜೀನಾಮೆಗೆ ಆಗ್ರಹ

Last Updated 25 ಜನವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭೂ ಹಗರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿವಿಧ ಜನಪರ ಸಂಘಟನೆಗಳ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪುರಭವನದ ಎದುರು ಪ್ರತಿಭಟನೆ ನಡೆಸಿದ ಸಿಪಿಎಂ ಸದಸ್ಯರು ಯಡಿಯೂರಪ್ಪ ಅವರ ವಿರುದ್ಧ ಮೊಕದ್ದಮೆ ಹೂಡಲು ರಾಜ್ಯಪಾಲರು ಅನುಮತಿ ನೀಡಿದ ನಂತರವೂ ಅವರು ರಾಜೀನಾಮೆ ನೀಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಲದೇ ಹಲವು ಸಚಿವರು ಭೂ ಹಗರಣಗಳಲ್ಲಿ ಸಿಲುಕಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ಮೇರೆ ಮೀರಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರಜಾವಿಮೋಚನಾ ಚಳವಳಿಯ ರಾಜ್ಯ ಸಂಚಾಲಕ ಪಟಾಪಟ್ ನಾಗರಾಜ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್, ಕಾರ್ಯದರ್ಶಿ ಮಂಡಳಿಯ ಸದಸ್ಯೆ ಶಶಿಕಲಾ ಬೆಳಗಲಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸಮಿತಿ ಸದಸ್ಯೆ ಕೆ.ಉಮಾ ಮಾತನಾಡಿ, ‘ರೈತರ ಫಲವತ್ತಾದ ಭೂಮಿಯನ್ನು ಕಬಳಿಸಲೆಂದೇ ರಚಿತವಾಗಿರುವ ಕೆಐಎಡಿಬಿಯನ್ನು ವಿಸರ್ಜಿಸಬೇಕು’ ಆಗ್ರಹಿಸಿದರು. ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್.ಪ್ರಕಾಶ್, ಜಿಲ್ಲಾ ಸಮಿತಿ ಸದಸ್ಯೆ ಪ್ರತಿಭಾ ಕುಮಾರಿ, ರಾಜ್ಯ ಸಮಿತಿ ಸದಸ್ಯ ಡಾ. ಮಂಜುನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸರ್ಕಾರದ ಎಲ್ಲ ಕ್ಷೇತ್ರಗಳೂ ಭ್ರಷ್ಟಾಚಾರದಿಂದ ಮುಕ್ತವಾಗಿಲ್ಲ. ಆದರ್ಶ ಹೌಸಿಂಗ್ ಹಗರಣ, 2ಜಿ ಸ್ಪೆಕ್ಟ್ರಂ ಹಗರಣ, ಭೂಕಬಳಿಕೆ ಮುಂತಾದ ಹಗರಣಗಳಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುತ್ತಿದೆ’ ಎಂದು ದೂರಿದರು.

ಜಿಲ್ಲಾ ಸಮಿತಿ ಸದಸ್ಯ ಎಂ.ಎಸ್.ಪ್ರಕಾಶ್ ಮಾತನಾಡಿ, ‘ಕಾಳಸಂತೆಕೋರರು ಮತ್ತು ಅಕ್ರಮ ದಾಸ್ತಾನುದಾರರೊಂದಿಗೆ ಶಾಮೀಲಾಗಿರುವ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ. ಸಿಪಿಐ, ಸಿಪಿಐ(ಎಂ) ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಜನವಿರೋಧಿ ಬಂಡವಾಳಶಾಹಿ ಜಾಗತೀಕರಣವನ್ನು ಬೆಂಬಲಿಸುತ್ತಾ ಜನರಿಗೆ ದ್ರೋಹ ಬಗೆಯುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಿತಿ ಸದಸ್ಯೆ ಪ್ರತಿಭಾ ಕುಮಾರಿ, ರಾಜ್ಯ ಸಮಿತಿ ಸದಸ್ಯ ಡಾ. ಮಂಜುನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT