ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ, ರೇವಣ್ಣ ಹಟ

Last Updated 5 ಡಿಸೆಂಬರ್ 2012, 19:46 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ (ಬೆಳಗಾವಿ): ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯುವುದು ಸಾಮಾನ್ಯ. ಆದರೆ, ಬುಧವಾರ ವಿಧಾನಸಭೆ ವ್ಯತಿರಿಕ್ತ ಬೆಳವಣಿಗೆಗೆ ಸಾಕ್ಷಿಯಾಯಿತು. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ಹಲವು ಬಾರಿ ವಾಕ್ಸಮರ ನಡೆಯಿತು.

ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಬಳಿಕ ಮತ್ತೆ ಕಲಾಪ ಆರಂಭವಾದಾಗ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ನಿಲುವಳಿ ಸೂಚನೆ ಮಂಡಿಸಲು ಮುಂದಾದರು. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಿಲುವಳಿ ಸೂಚನೆ ಮಂಡಿಸಲು ತಮಗೆ ಅವಕಾಶ ನೀಡುವಂತೆ ಕೋರಿದರು.

ವಿರೋಧ ಪಕ್ಷದ ನಾಯಕರಿಗೆ ಆದ್ಯತೆ ನೀಡುವ ಸಂಪ್ರದಾಯವನ್ನು ಪಾಲಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದರು. ತಾವೇ ಮೊದಲು ನೋಟಿಸ್ ನೀಡಿದ್ದು, ತಮಗೇ ಅವಕಾಶ ನೀಡುವಂತೆ ರೇವಣ್ಣ ಹಟ ಹಿಡಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆಗ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಪರಸ್ಪರ ಮಾತಿನ ಚಕಮಕಿ ನಡೆಸಿದರು. ಕೊನೆಗೂ ಸಿದ್ದರಾಮಯ್ಯ ಅವರಿಗೆ ನಿಲುವಳಿ ಸೂಚನೆ ಮಂಡಿಸುವ ವಿಷಯ ಪ್ರಸ್ತಾಪಕ್ಕೆ ಅವಕಾಶ ದೊರೆಯಿತು.

ಕಾವೇರಿ ನದಿಯಿಂದ ನೀರು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಕುರಿತು ವಿಷಯ ಪ್ರಸ್ತಾಪಿಸುವಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಯಿತು. ರೇವಣ್ಣ ಅವರು ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರಿಗೆ ಲಿಖಿತ ಮನವಿಯೊಂದನ್ನು ನೀಡಿ, ವಿಷಯ ಪ್ರಸ್ತಾಪಕ್ಕೆ ಅವಕಾಶ ಕೋರಿದರು. ಆದರೆ, ಸಿದ್ದರಾಮಯ್ಯ ಅವರು ತಮಗೇ ಅವಕಾಶ ನೀಡುವಂತೆ ಒತ್ತಾಯಿಸತೊಡಗಿದರು. ಆಗಲೂ ಮತ್ತೆ ಉಭಯ ಪಕ್ಷಗಳ ಶಾಸಕರ ನಡುವೆ ವಾಕ್ಸಮರ ನಡೆಯಿತು. ಕೊನೆಗೂ ಸಿದ್ದರಾಮಯ್ಯ ಅವರಿಗೇ ಮೊದಲಿಗೆ ವಿಷಯ ಪ್ರಸ್ತಾಪಿಸಲು ಅವಕಾಶ ದೊರೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT