ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಿಕರ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 11 ಜನವರಿ 2013, 6:51 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ದೇಶದ ಗಡಿಯಲ್ಲಿ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿ ಇಬ್ಬರು ಭಾರತೀಯ ಸೈನಿಕರನ್ನು ಹತ್ಯೆ ಮಾಡಿರುವುದು ಹಾಗೂ ಆಂಧ್ರಪ್ರದೇಶ ಶಾಸಕ ಅಕ್ಬರುದ್ದೀನ್ ಒವೈಸಿ ಅವರ ಪ್ರಚೋದನಕಾರಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಸುಮಾರು ಅರ್ಧತಾಸು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು. ಎಂಐಎಂ ಶಾಸಕ ಅಕ್ಬರುದ್ದೀನ್ ಒವೈಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುವೆಂಪು ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪಾಕಿಸ್ತಾನ ಹಾಗೂ ಶಾಸಕ ಅಕ್ಬರುದ್ದೀನ್ ಒವೈಸಿ ವಿರುದ್ಧ ಘೋಷಣೆ ಕೂಗಿದರು.

ಪಾಕಿಸ್ತಾನ ಸೇನೆ ಭಾರತೀಯ ಸೈನಿಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರೂ ಕೇಂದ್ರದ ಯುಪಿಎ ಸರ್ಕಾರ ಪಾಕಿಸ್ತಾನಕ್ಕೆ ಸೂಕ್ತ ಎಚ್ಚರಿಕೆ ನೀಡಿಲ್ಲ. ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನದ ಧೋರಣೆಯನ್ನು ಪರಿಣಾಮಕಾರಿಯಾಗಿ ಜಗತ್ತಿನ ಮುಂದೆ ಇಟ್ಟಿಲ್ಲ.

ಆ ದೇಶದ ರಕ್ತ ಪಿಪಾಸುತನವನ್ನು ಇತರ ದೇಶಗಳಿಗೆ ತಿಳಿಸಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕೆ.ಬಲರಾಂ ಹೇಳಿದರು.  ಆಂಧ್ರಪ್ರದೇಶ ಶಾಸಕ ಅಕ್ಬರುದ್ದೀನ್ ಒವೈಸಿ ಅವರ ಪ್ರಚೋದನಕಾರಿ ಹೇಳಿಕೆಯ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆ ಹಚ್ಚಬೇಕು.

ಕಾಂಗ್ರೆಸ್ ಪಕ್ಷ ತುಷ್ಠೀಕರಣ ನೀತಿ ನಿಲ್ಲಿಸಿ ಕೋಮು ಸಾಮರಸ್ಯಕ್ಕೆ ಭಂಗ ತರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಶ್ರೀಧರ್ ಒತ್ತಾಯಿಸಿದರು.
ಜಿ.ಉಮಾಶಂಕರ್, ಪುರಸಭೆ ಸದಸ್ಯರಾದ ವಿದ್ಯಾ ಉಮೇಶ್, ಎಸ್.ಪ್ರಕಾಶ್, ಚಂದಗಾಲು ಶಂಕರ್, ಕೆ.ಆರ್.ಸೊಸೈಟಿ ನಿರ್ದೇಶಕ ಉಮೇಶ್‌ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT