ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾ ಪರೀಕ್ಷೆಗೆ ತರಬೇತಿ ಕೊರತೆ

Last Updated 28 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಮನಗರ: ಸ್ಪರ್ಧಾ ಜಗತ್ತಿನಲ್ಲಿ ನಡೆಯುತ್ತಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯತೆ ಇದೆ ಎಂದು ಬೆಂಗಳೂರಿನ `ಸ್ಪರ್ಧಾ ವಿಜೇತ~ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಡಾ. ಕೆ.ಎಂ.ಸುರೇಶ್ ತಿಳಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ಉಚಿತ ತರಬೇತಿ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭೆ ಮತ್ತು ಸಾಮರ್ಥ್ಯ ಹೊಂದಿರುವ ಸಾವಿರಾರು ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತರು ಅವಕಾಶ ಮತ್ತು ಸೂಕ್ತ ಮಾರ್ಗದರ್ಶನದ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ದೂರು ಉಳಿಯುತ್ತಿದ್ದಾರೆ. ಅವರಿಗೆ ಅಗತ್ಯ ಸಲಹೆ, ಸಹಕಾರ, ಮಾರ್ಗದರ್ಶನ ಒದಗಿಸಿದರೆ ಅಸಾಧ್ಯವಾದುದನ್ನು ಸಾಧಿಸುತ್ತಾರೆ. ಆ ಕಾರ್ಯ ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಬೇಕಿದೆ ಎಂದು ಅವರು ವಿವರಿಸಿದರು.

ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡದಂತಹ ಪ್ರಮುಖ ನಗರಗಳಲ್ಲಿ ಇರುವ ಯುವ ಜನತೆಗೆ ಸುಲಭವಾಗಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು ಲಭ್ಯವಾಗುತ್ತವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇರುವ ಗ್ರಾಮೀಣ ಪ್ರದೇಶದ ಪ್ರತಿಭಾವಂತರು, ಸಹಸ್ರಾರು ರೂಪಾಯಿ ಖರ್ಚು ಮಾಡಿ ತರಬೇತಿ ಪಡೆಯಲು ಆಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಚಿತವಾಗಿ ಮಾರ್ಗದರ್ಶನ ನೀಡುವ ಸಲುವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಪರ್ಧಾ ವಿಜೇತ ಕೇಂದ್ರದ ವತಿಯಿಂದ ಉಚಿತ ತರಬೇತಿಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಅದೇ ರೀತಿ ರಾಮನಗರದಲ್ಲಿಯೂ ತರಬೇತಿ ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿ ರಾಮನಗರದಲ್ಲಿ ಹಮ್ಮಿಕೊಂಡ ತರಬೇತಿ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ವಿವಿಧ ಸ್ಪರ್ಧಾ ಪರೀಕ್ಷೆಗಳ ಅಭ್ಯರ್ಥಿಗಳು ತೋರಿದ ಆಸಕ್ತಿಯಿಂದ ಇಲ್ಲಿ ಪುನಃ ತರಬೇತಿ ಹಮ್ಮಿಕೊಳ್ಳಲು ಮುಂದಾಗಿರುವುದಾಗಿ ಅವರು ವಿವರಿಸಿದರು.

ಸದ್ಯದಲ್ಲಿಯೇ ಕರ್ನಾಟಕ ಲೋಕಸೇವಾ ಅಯೋಗ ಕೆ.ಎ.ಎಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದ್ದು, ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಈ ವರ್ಷದಿಂದ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯ ಪಠ್ಯಕ್ರಮವನ್ನು ಸರ್ಕಾರ ಬದಲಾಯಿಸಿದೆ. ಐ.ಎ.ಎಸ್ ಪರೀಕ್ಷೆಯ ಮಾದರಿಯಲ್ಲಿ ಕೆ.ಎ.ಎಸ್ ಪರೀಕ್ಷೆ ನಡೆಸಲು ಈಗಾಗಲೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಹಾಗಾಗಿ ಕೆ.ಎ.ಎಸ್ ಆಕಾಂಕ್ಷಿ ಅಭ್ಯರ್ಥಿಗಳು ಮೊದಲು ಪಠ್ಯಕ್ರಮವನ್ನು ಸರಿಯಾಗಿ ಅರ್ಥಮಾಡಿಕೊಂಡು ಯೋಜಿತ ರೀತಿಯಲ್ಲಿ ಅಧ್ಯಯನ ನಡೆಸಿದರೆ ಯಶಸ್ಸು ಸಾಧ್ಯವಾಗುತ್ತದೆ ಎಂದು ಅವರು ಸಲಹೆ ನೀಡಿದರು.

ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಹುದ್ದೆಗಳ ಆಕಾಂಕ್ಷಿಗಳು ಪ್ರಮುಖವಾಗಿ ದೇಶದ ಸಂವಿಧಾನ, ಪಂಚಾಯಿತಿ ವ್ಯವಸ್ಥೆ, ಪಂಚಾಯತ್ ರಾಜ್ ನಿಯಮಗಳು, ಮೂರು ಹಂತದ ವ್ಯವಸ್ಥೆ, ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಸಂಬಂಧ ಇವೇ ಮೊದಲಾದವುಗಳ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಅವರು ಕಿವಿಮಾತು ಹೇಳಿದರು.

ನಗರದಲ್ಲಿ ನಡೆಯುವ ಎರಡು ದಿನಗಳ ತರಬೇತಿಯಲ್ಲಿ ಕೆ.ಎ.ಎಸ್, ಪಿ.ಡಿ.ಒ, ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ತರಬೇತಿಯನ್ನು ನೀಡಲಾಗುವುದು. ಈ ತರಬೇತಿಯಲ್ಲಿ ವಿಜ್ಞಾನ, ಭೂಗೋಳಶಾಸ್ತ್ರ, ಭಾರತದ ಸಂವಿಧಾನ, ಇತಿಹಾಸ, ಮಾನಸಿಕ ಸಾಮರ್ಥ್ಯ ಹಾಗೂ ಪಿಡಿಒ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಮಾಹಿತಿಗಳನ್ನು ಮತ್ತು ಪ್ರಚಲಿತ ಘಟನೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಅವಶ್ಯಕವಾದ ಮಾಹಿತಿಗಳನ್ನು ಒದಗಿಸಲಾಗುವುದು. ಈ ಅವಕಾಶವನ್ನು ಗ್ರಾಮೀಣ ಪ್ರದೇಶದ ಯುವ ಜನತೆ ಸಮರ್ಪಕವಾಗಿ ಬಳಸಿಕೊಂಡು, ಪರೀಕ್ಷೆಗಳಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸುವಂತೆ ಅವರು ತಿಳಿಸಿದರು.

ರಾಮನಗರ, ಕನಕಪುರ, ಮಾಗಡಿ, ಚನ್ನಪಟ್ಟಣ, ಬಿಡದಿ, ಮದ್ದೂರು, ಮಂಡ್ಯ ಭಾಗದಿಂದ ನಾಲ್ಕು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT