ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾರ್ಥಕ್ಕಾಗಿ ಜಾತಿ ರಾಜಕಾರಣ: ಆರೋಪ

Last Updated 5 ಏಪ್ರಿಲ್ 2013, 5:56 IST
ಅಕ್ಷರ ಗಾತ್ರ

ಬೆಳಗಾವಿ: `ಡಾ. ಬಿ.ಆರ್.ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರರು, ಶಂಕರಾಚಾರ್ಯ ಸೇರಿದಂತೆ ಮಹಾನ್ ವ್ಯಕ್ತಿಗಳನ್ನು ಇತರೆ ಪಕ್ಷಗಳು ಆಯಾ ಸಮುದಾಯಕ್ಕೆ ಸೀಮಿತಗೊಳಿಸಿವೆ. ಆದರೆ, ಬಿಜೆಪಿ ಇಡೀ ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ. ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಲು ಬರುವವರಿಗೆ ಚುನಾವಣೆಯಲ್ಲಿ ಸರಿಯಾಗಿ ಬುದ್ಧಿ ಕಲಿಸಬೇಕು' ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಲ್ಲಿನ ಶ್ರೀನಗರದ ಮೈದಾನದಲ್ಲಿ ಗುರುವಾರ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವು ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಜಾತಿ ಬಳಸಿಕೊಳ್ಳುತ್ತಿದ್ದಾರೆ. ಜಾತಿ ರಾಜಕಾರಣ ಮಾಡಲು ಮುಂದಾದವರನ್ನು ಬಿಜೆಪಿಯಿಂದ ಹೊರಗೆ ಕಳುಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ಟೀಕಿಸಿದರು.

`ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಒಳ್ಳೆಯದು ಹಾಗೂ ಕೆಟ್ಟದ್ದು ಎರಡೂ ಆಗಿದೆ. ಸಚಿವರಾದ ಬಸವರಾಜ ಬೊಮ್ಮಾಯಿ, ಉಮೇಶ ಕತ್ತಿ, ಮುರುಗೇಶ ನಿರಾಣಿ ಮತ್ತಿತರರು ಪಕ್ಷ ಬಿಡುತ್ತಾರೆ ಎಂದು ಕೆಲವರು ಬಹಿರಂಗವಾಗಿಯೇ ಹೇಳಿದ್ದರು. ಆದರೆ ಇವರ‌್ಯಾರೂ ಬಿಜೆಪಿ ತೊರೆದಿಲ್ಲ ಮತ್ತು ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಂಕಣಬದ್ಧರಾಗಿದ್ದಾರೆ. ಜಗದೀಶ ಶೆಟ್ಟರ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಭಾಗದ ಜನರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದೆ ಎಂದ ಅವರು, ಬಿಜೆಪಿ ಮನೆ ಮನೆಗೆ ತೆರಳಿ ಮನಸ್ಸುಗಳನ್ನು ಗೆಲ್ಲಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT