ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹದಗೆಟ್ಟ ಹೆದ್ದಾರಿ: ದುರಸ್ತಿಗೆ ಸೂಚನೆ

Last Updated 13 ಸೆಪ್ಟೆಂಬರ್ 2011, 6:45 IST
ಅಕ್ಷರ ಗಾತ್ರ

ಕಾರವಾರ: ಗ್ರಾಮೀಣ ಪ್ರದೇಶದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ  ಪ್ರಭಾರ  ಕಾರ್ಯನಿರ್ವಹಣಾಧಿಕಾರಿ ಬಿ.ಎನ್.ಕೃಷ್ಣಯ್ಯ ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಬೇಜವಾಬ್ದಾರಿ ವಹಿಸದೆ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.

ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಹಾಳಾಗಿ ವಾಹನ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತುಕೊಳ್ಳದೆ ಜಿಲ್ಲೆಯಲ್ಲಿ ಪ್ರವಾಸಮಾಡಿ ರಸ್ತೆಗಳ ಸ್ಥಿತಿಗತಿ ತಿಳಿದು ದುರಸ್ತಿ ಆರಂಭಿಸಬೇಕು ಎಂದರು.

ಕುಮಟಾ, ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತುಂಬಾ ಹೊಂಡಗಳು ಬಿದ್ದಿವೆ. ಗಂಗಾವಳಿ, ಅಘನಾಶಿನಿ ಸೇತುವೆಗಳಲ್ಲಿ ಡಾಂಬರು ಕಿತ್ತುಹೋಗಿ ಸೇತುವೆಗೆ ಧಕ್ಕೆಯಾಗುವ ಸಂಭವವಿದ್ದು ತಕ್ಷಣವೇ ದುರಸ್ತಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಹಾಳಾಗಿದ್ದು ಮಳೆ ಕಡಿಮೆಯಾಗಿರುವುದರಿಂದ ತಕ್ಷಣವೇ ರಸ್ತೆ ರಿಪೇರಿ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಲಾಯಿತು. ಜಿಲ್ಲೆಯಾದ್ಯಂತ ಇರುವ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಸ್ಥಿತಿಗತಿ ಹದಗೆಟ್ಟಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಉದಯ ನಾಯ್ಕ ಕಳವಳ ವ್ಯಕ್ತಪಡಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮ, ಅಂಬೇಡ್ಕರ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಉಳಿದಿದರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ನೀಡಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿ ಗಂಡು ಹಾಗೂ ಹೆಣ್ಣುಮಕ್ಕಳ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆಯೆಂದು ಡಿಡಿಪಿಐ ಜಯಕುಮಾರ ಸಭೆಗೆ ತಿಳಿಸಿದರು.

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಯ ಕಟ್ಟಡಗಳ ರಿಪೇರಿ ಹಾಗೂ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಕರ್ನಾಟಕ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಯೋಜನೆ ಹಾಗೂ ಸುಧಾರಣೆ ವಿಭಾಗದ ಎಂಜಿನಿಯರ್ ಕೆ.ಡಿ.ಪಿ ಸಭೆಗೆ ತಪ್ಪದೇ ಆಹ್ವಾನಿಸುವಂತೆ ಸೂಚಿಸಲಾಯಿತು.

ಜಿಲ್ಲಾ ಆಸ್ಪತ್ರೆ ಕಟ್ಟಡ ದುರಸ್ತಿಗೆ  ರೂ. 50 ಲಕ್ಷ ಬಿಡುಗಡೆಯಾಗಿದ್ದು ಕಾಮಗಾರಿ ಕೈಕೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಾ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಜಯಶ್ರೀ ಮೊಗೇರ, ಕೃಷ್ಣ ಗೌಡ,  ಉಪಕಾರ್ಯದರ್ಶಿ ರಾಯ್ಕರ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT