ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ ಖಂಡಿಸಿ ಜೆಸ್ಕಾಂ ನೌಕರರ ಪ್ರತಿಭಟನೆ

Last Updated 2 ಅಕ್ಟೋಬರ್ 2012, 5:10 IST
ಅಕ್ಷರ ಗಾತ್ರ

ಯಾದಗಿರಿ: ಕರ್ತವ್ಯದಿಂದ ಹಿಂದಿರುಗುವ ಸಂದರ್ಭದಲ್ಲಿ ಲೈನ್‌ಮೆನ್ ಮರಿಲಿಂಗಪ್ಪ ಎಂಬುವವರ ಮೇಲೆ ಮಲ್ಹಾರ ಗ್ರಾಮದ ವೆಂಕಣ್ಣಗೌಡ ಹಲ್ಲೆ ನಡೆಸಿದ್ದನ್ನು ಖಂಡಿಸಿ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಕಾರ್ಯಕರ್ತರು ಸೋಮವಾರ ಇಲ್ಲಿಯ ಜೆಸ್ಕಾಂ ಕಚೇರಿ ಎದುರು  ಪ್ರತಿಭಟನೆ ನಡೆಸಿದರು.

ಭಾನುವಾರ ಕರ್ತವ್ಯ ನಿರ್ವಹಿಸಿ ಮನೆಗೆ ಮರಳುವ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೇ, ನಿಗಮದ ನೌಕರ ಮರಿಲಿಂಗಪ್ಪ ಅವರನ್ನು ಎಳೆದಾಡಿ ಹಲ್ಲೆ ನಡೆಸಲಾಗಿದೆ. ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಕೂಡಿ ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೌಕರನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಜೆಸ್ಕಾಂ ಹಿರಿಯ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಜಿಲ್ಲೆಯಾದ್ಯಂತ ತೀವ್ರವಾಗಲಿದ್ದು, ಈ ಹಿನ್ನೆಲೆಯಲ್ಲಿ ನೌಕರರಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಮನವಿ ಮಾಡಿದರು.

ಪ್ರಾಮಾಣಿಕವಾಗಿ ನಿತ್ಯ ಕೆಲಸ ನಿರ್ವಹಿಸುತ್ತಿದ್ದು, ನೌಕರರ ಮೇಲೆ ಹಲ್ಲೆ ನಡೆಸಿರುವುದು ಸರಿಯಾದ ಕ್ರಮವಲ್ಲ. ಇಂತಹ ಘಟನೆ ಮರಕಳಿಸದಂತೆ ಅಧಿಕಾರಿಗಳು ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ನೌಕರರಿಗೆ ಬೆಲೆ ಇಲ್ಲದಂತಾಗಿದೆ. ವಿದ್ಯುತ್ ಸಮಸ್ಯೆ ರಾಜ್ಯದಲ್ಲಿಯೇ ತಲೆದೋರಿದ್ದು, ಜಿಲ್ಲೆಯ ಜನತೆ ಕೂಡ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಲೈನ್‌ಮೆನ್‌ಗಳು ಹೊಣೆ ಆಗುವುದಿಲ್ಲ ಎಂದು ಹೇಳಿದರು.

ಇಂತಹ ಘಟನೆಗಳು ಮಾರಕವಾಗಿದ್ದು, ನೌಕರರ ಸುರಕ್ಷತೆಗೆ ಆದ್ಯತೆ ನೀಡಲು ಹಿರಿಯ ಅಧಿಕಾರಿಗಳು ಮುಂದಾಗಬೇಕಿದೆ. ಯಾವುದೇ ಆತಂಕವಿಲ್ಲದೇ ಕೆಲಸ ಮಾಡಲು ನೌಕರರಿಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಹೊನ್ನಪ್ಪ, ಮೋಹನ, ಹಣಮಂತ, ಭಾಗಪ್ಪ, ರಾಘವೇಂದ್ರ, ಟಿ. ಶ್ರೀನಿವಾಸ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT