ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಟೆಲ್‌ನಲ್ಲಿ ಕಂಪ್ಯೂಟರ್‌ ಸೌಲಭ್ಯ

ಸಚಿವ ಎಚ್‌.ಆಂಜನೇಯ ಅಭಿಪ್ರಾಯ
Last Updated 2 ಜನವರಿ 2014, 7:13 IST
ಅಕ್ಷರ ಗಾತ್ರ

ಬೆಳಗಾವಿ: ‘ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಉತ್ತಮ ಅಧ್ಯಯನಶೀಲ ವಾತಾ­ವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ ಗ್ರಂಥಾಲಯ, ಕಂಪ್ಯೂಟರ್‌ ತರಬೇತಿ ಕೇಂದ್ರ ಆರಂಭಿಸುವ ಉದ್ದೇಶವಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹಾಸ್ಟೆಲ್‌ ವಿದ್ಯಾರ್ಥಿ ವಿದ್ಯಾ­ರ್ಥಿನಿಯರಿಗೆ ಯಾವುದೇ ಕೊರತೆ ಉಂಟಾಗದಂತೆ ಎಲ್ಲ ಸೌಲಭ್ಯ ಒದಗಿಸಲಾಗುವುದು. ಹಾಸ್ಟೆಲ್‌­ಗಳಲ್ಲಿ ಇಂಟರ್‌ನೆಟ್‌ ಸೌಲಭ್ಯ ಸಹ ಒದಗಿಸಲಾಗುವುದು ಎಂದರು. 

ಹಾಸ್ಟೆಲ್‌ಗಳಿಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಯಾವುದೇ ಅವ್ಯವಹಾರಕ್ಕೂ ಆಸ್ಪದ ನೀಡುವುದಿಲ್ಲ. ಪಾರದರ್ಶಕತೆ ತರಲಾಗುತ್ತಿದೆ.
ಇದಕ್ಕಾಗಿಯೇ ಹಾಸ್ಟೆಲ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಶಿಷ್ಯವೇತನ ನೀಡುವಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ವರದಿ ಆಧರಿಸಿ ಈಗಾಗಲೇ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಮಟ್ಟದ ಅಧಿಕಾರಿ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಹಾಸ್ಟೆಲ್‌ಗಳು ಹಳೆಯ ಕಟ್ಟಡಗಳಲ್ಲಿವೆ. ಕೆಲವು ಬಾಡಿಗೆ ಕಟ್ಟಡಗಳಲ್ಲಿವೆ. ಹೊಸ ಕಟ್ಟಡ ನಿರ್ಮಾಣ, ಶೌಚಾಲಯ ನಿರ್ಮಾಣ, ಬಾಡಿಗೆ ಕಟ್ಟಡದಿಂದ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಕೆಲಸವನ್ನು ಇದೇ ತಿಂಗಳಿನಲ್ಲಿ ಕೈಗೆತ್ತಿಕೊಳ್ಳಲಾಗುವುದು. ಹೊಸ ಕಟ್ಟಡಗಳ ನಿರ್ಮಾಣಕ್ಕೆ ಸದ್ಯದಲ್ಲಿಯೇ ಟೆಂಡರ್‌ ಕರೆಯಲಾಗುವುದು ಎಂದರು.

ವೃತ್ತಿ ಶಿಕ್ಷಣ ಹಾಗೂ ನರ್ಸಿಂಗ್‌ ಓದುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗಾಗಿ ಜಿಲ್ಲೆಗೆ ತಲಾ ನಾಲ್ಕು ಹಾಸ್ಟೆಲ್‌ಗಳಂತೆ ರಾಜ್ಯದಲ್ಲಿ 120 ಹಾಸ್ಟೆಲ್‌ಗಳನ್ನು ಆರಂಭಿಸಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ಸೌಲಭ್ಯ ಒದಗಿಸಲಾಗುವುದು ಎಂದ ಅವರು, ಗುಲ್ಬರ್ಗಾದ ಕೇಂದ್ರೀಯ ವಿಶ್ವವಿದ್ಯಾಲ­ಯದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ₨ 1500 ಶಿಷ್ಯವೇತನ ನೀಡಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳು ಬಂದಿಲ್ಲ. ಇಂಥ ದೂರುಗಳು ಬಂದರೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಕೇಂದ್ರವನ್ನು ಆರಂಭಿಸಲಾಗುವುದು. ಕೇಂದ್ರದಲ್ಲಿ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಸಹಾಯ ಮಾಡಲಾಗುವುದು ಎಂದು ಸಚಿವರು ಹೇಳಿದರು. ಹೋಬಳಿ ಮಟ್ಟದಲ್ಲಿ ವಸತಿಶಾಲೆ ಆರಂಭಿಸುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ನಿವೇಶನ ಗುರುತಿಸುವ ಕಾರ್ಯ ಸದಸ್ಯದಲ್ಲಿಯೇ ನಡೆಯಲಿದೆ ಎಂದರು.

‘ಕಾಂಗ್ರೆಸ್‌ನಲ್ಲಿ ಅಸಮಾಧಾನಕ್ಕೆ ಅವಕಾಶವಿಲ್ಲ’
ಬೆಳಗಾವಿ: ‘ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಅಪಸ್ವರಕ್ಕೆ, ಅಸಮಾಧಾನಕ್ಕೆ ಅವಕಾಶವಿಲ್ಲ. ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮ’ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಬಂದಿರುವ ಎಲ್ಲ ಅಭ್ಯರ್ಥಿಗಳನ್ನು ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳು, ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ. ಆಪಾದನೆಗಳು ಬಂದ ತಕ್ಷಣವೇ ಅಪರಾಧಿಗಳಾಗಲು ಸಾಧ್ಯವಿಲ್ಲ ಎಂದರು.

‘ನ್ಯಾಯಾಲಯ ತೀರ್ಪು ನೀಡಿದ್ದರೆ, ಶಿಕ್ಷೆಗೆ ಒಳಗಾಗಿದ್ದರೆ ಅವರನ್ನು ಅಪರಾಧಿಗಳು ಎನ್ನಬಹುದು. ಡಿ.ಕೆ. ಶಿವಕುಮಾರ ಹಾಗೂ ರೋಷನ್‌ಬೇಗ್‌ ಅವರು ಅಪರಾಧಿಗಳಲ್ಲ. ಇವರಿಗೆ ಕಳಂಕಿತರು ಎಂದು ಹೇಳುವುದು ಸರಿಯಲ್ಲ’ ಎಂದ ಅವರು, ಮಾಜಿ ಸಚಿವ ಸಂತೋಷ ಲಾಡ್‌ ಅವರು ಅಪಾದನೆಗಳು ಬಂದಿದ್ದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT