ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಚುನಾವಣೆ ಭ್ರಷ್ಟತೆ

Last Updated 25 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಚುನಾವಣೆಯಲ್ಲಿ ಜಾತಿ, ಧರ್ಮ ಮತ್ತು ಹಣದ ಪ್ರಭಾವ ಹೆಚ್ಚಾಗುತ್ತಿದೆ~ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಚುನಾವಣಾ ಆಯೋಗವು ನಗರದ ಪುರಭವನದಲ್ಲಿ ಬುಧವಾರ ಏರ್ಪಡಿಸಿದ್ದ `ರಾಷ್ಟ್ರೀಯ ಮತದಾರರ ದಿನಾಚರಣೆ~ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಜಾತಿ ಮತದ ಆಧಾರದ ಮೇಲೆ ಜನರನ್ನು ವಿಭಜನೆ ಮಾಡುವುದು ಸರಿಯಲ್ಲ. ಇತ್ತೀಚಿನ ಚುನಾವಣೆಗಳಲ್ಲಿ ಜಾತಿ, ಧರ್ಮ, ಹಣದ ಪ್ರಭಾವ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದರಿಂದ ದೇಶದ ಅಖಂಡತೆಗೆ ಧಕ್ಕೆಯಾಗುತ್ತದೆ. ಆದರೆ ಈ ತಂತ್ರ ಯಾವಾಗಲೂ ಫಲಿಸುವುದಿಲ್ಲ~ ಎಂದರು.

ಇಂದು ಮತದಾನ ಪ್ರಮಾಣ ಕಡಿಮೆ ಇದೆ. ಆದ್ದರಿಂದ ಮತದಾನ ಪದ್ಧತಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವ್ಯಕ್ತಿಯೊಬ್ಬ ಮನೆಯಲ್ಲೇ ಕುಳಿತು ಮತದಾನ ಮಾಡುವಂತಹ ವಾತಾವರಣ ನಿರ್ಮಿಸಬೇಕು. ಮತದಾನದಲ್ಲಿ ಎಲ್ಲರೂ ಭಾಗವಹಿಸಬೇಕು. ಅದರಲ್ಲೂ ಮುಖ್ಯವಾಗಿ ರಾಷ್ಟ್ರದ ಭವಿಷ್ಯ ಆಗಿರುವ ಯುವಕರು ಮತದಾನ ಮಾಡಬೇಕು ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ: 2013ರ ಜನವರಿ ತಿಂಗಳಲ್ಲಿ ರಾಜ್ಯದ ಇನ್ನೂರು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ~ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಆರ್.ಚಿಕ್ಕಮಠ್ ತಿಳಿಸಿದರು.

ಪ್ರತಿಯೊಬ್ಬರು ಮತದಾನ ಮಾಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಅಥವಾ ಇಲ್ಲವೇ ಎಂಬುದನ್ನು ಚುನಾವಣೆಗೂ ಮುನ್ನವೇ ಖಚಿತಪಡಿಸಿಕೊಂಡು ಹೆಸರಿಲ್ಲದಿದ್ದರೆ ಸೇರ್ಪಡೆಗೊಳಿಸಬೇಕು. ಆನ್‌ಲೈನ್‌ನಲ್ಲಿ ಸಹ ಹೆಸರು ಸೇರ್ಪಡೆಗೊಳಿಸಲು ಅವಕಾಶ ಇದೆ. ವರ್ಷಪೂರ್ತಿ ನೋಂದಣಿ ಕಾರ್ಯ ನಡೆಯುತ್ತಿದೆ. ಮತದಾರರು ಇದರ ಉಪಯೋಗ ಪಡೆಯಬೇಕು ಎಂದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ, ಬಿಬಿಎಂಪಿ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ, ಮುಖ್ಯ ಚುನಾವಣಾಧಿಕಾರಿ ಸಿ.ಎಸ್.ಸುರಂಜನ ಇತರರು ಉಪಸ್ಥಿತರಿದ್ದರು. ಹೊಸದಾಗಿ ನೋಂದಣಿ ಮಾಡಿಕೊಂಡ ಯುವಕ- ಯುವತಿಯರಿಗೆ ಸಮಾರಂಭದಲ್ಲಿ ಭಾವಚಿತ್ರ ಸಹಿತ ಮತದಾರರ ಗುರುತಿನ ಚೀಟಿ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT