ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಅನುಮತಿ?

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬರಲಿರುವ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಹೆಚ್ಚುವರಿಯಾಗಿ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ.

ರಫ್ತು ಪ್ರಮಾಣ ಹೆಚ್ಚುವ ಮೂಲಕ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಸಕ್ಕರೆ ಕಾರ್ಖಾನೆಗಳಿಗೆ ಹೆಚ್ಚುವರಿ ವರಮಾನ ಹರಿದು ಬರಲಿದೆ. ಇದರಿಂದ ಕಬ್ಬು ಬೆಳೆಗಾರರಿಗೆ ಸಕಾಲದಲ್ಲೇ ಹಣ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷ ಸಕ್ಕರೆ ಉತ್ಪಾದನೆಯು ದೇಶೀಯ ಬೇಡಿಕೆ ಮಟ್ಟ ಮೀರುವ ಸಾಧ್ಯತೆ ಇದೆ.  ಈ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಧ್ಯಕ್ಷತೆಯಲ್ಲಿನ ಉನ್ನತಾಧಿಕಾರ ಹೊಂದಿರುವ ಸಚಿವರ ಸಮಿತಿಯು (ಇಜಿಒಎಂ) ಹೆಚ್ಚುವರಿ ಸಕ್ಕರೆ ರಫ್ತಿಗೆ ಹಸಿರು ನಿಶಾನೆ ತೋರಿಸುವ ಸಾಧ್ಯತೆ ಇದೆ.  ಈಗಾಗಲೇ ಸಕ್ಕರೆ ಕಾರ್ಖಾನೆಗಳು ಹೆಚ್ಚುವರಿ 20 ಲಕ್ಷ ಟನ್ ಸಕ್ಕರೆ ರಫ್ತಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಿವೆ. `ಫೆಬ್ರುವರಿ 7 ರಂದು ನಡೆಯಲಿರುವ `ಇಜಿಒಎಂ~ ಸಭೆಯಲ್ಲಿ ಅಂತಿಮ ನಿರ್ಧಾರ  ಪ್ರಕಟಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಲಭ್ಯವಿರುವ ಹೆಚ್ಚುವರಿ ಸಕ್ಕರೆ ದಾಸ್ತಾನು,  ಬೇಡಿಕೆ-ಪೂರೈಕೆ ಅಂತರದ ಕುರಿತು   ಅಂಕಿ ಅಂಶ ನೀಡುವಂತೆ ಉನ್ನತಾಧಿಕಾರ ಸಮಿತಿಗೆ ಈಗಾಗಲೇ ಆಹಾರ ಸಚಿವಾಲಯ ಸೂಚನೆ ನೀಡಿದೆ. ಸಕ್ಕರೆ ಕಾರ್ಖಾನೆಗಳು ಹಣದ ಮುಗ್ಗಟ್ಟು ಎದುರಿಸುತ್ತಿದ್ದು, ರಫ್ತು ಅನುಮತಿಗೆ ಕಾಯುತ್ತಿವೆ.
 
ಭಾರತೀಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (ಐಎಸ್‌ಎಂಎ) ಮತ್ತು ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (ಎನ್‌ಎಫ್‌ಸಿಎಸ್‌ಎಫ್) ಹೆಚ್ಚುವರಿ 20 ಲಕ್ಷ ಟನ್ ಸಕ್ಕರೆ ರಫ್ತಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿವೆ.

ಪ್ರಪಂಚದಲ್ಲಿಯೇ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಮತ್ತು ಬಳಸುವ ಎರಡನೆ ದೇಶ ಭಾರತವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 24.5 ದಶಲಕ್ಷ ಟನ್ ಸಕ್ಕರೆ ಉತ್ಪಾದನೆ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT