ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್ ನಿರ್ದೇಶನಕ್ಕೆ ಬೆಲೆಯಿಲ್ಲ

Last Updated 6 ಅಕ್ಟೋಬರ್ 2012, 8:15 IST
ಅಕ್ಷರ ಗಾತ್ರ

ಕುಷ್ಟಗಿ: ಅಂಗನವಾಡಿ ಕಾರ್ಯಕರ್ತೆಯರು ಅದೇ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು, ಅವರು ಇತರೆ ಕ್ಷೇತ್ರಗಳಲ್ಲಿ ನಿರತರಾಗುವುದನ್ನು ನಿರ್ಬಂಧಿಸುವಂತೆ ರಾಜ್ಯ ಹೈಕೋರ್ಟ್ ಸೂಚನೆಇದ್ದರೂ ಅದನ್ನು ಕಡೆಗಣಿಸಿದ ಈ ತಾಲ್ಲೂಕಿನಲ್ಲಿ ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರಾಗಿ `ಸೇವೆ~ ಸಲ್ಲಿಸುತ್ತಿರುವುದು ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಗ್ರಾ.ಪಂ . ಅಧ್ಯಕ್ಷೆಯಾಗಿ ಎರಡೂ ಹುದ್ದೆಗಳನ್ನು ನಿಭಾಯಿಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್, `ಕಾರ್ಯಕರ್ತೆಯರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ, ಒಂದೊಮ್ಮೆ ಚುನಾಯಿತ ಪ್ರತಿನಿಧಿಗಳಾಗಿದ್ದರೆ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು, ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು~ ಎಂದು ರಾಜ್ಯ ಸರ್ಕಾರಕ್ಕೆ ಕಳೆದ ಸೆಪ್ಟಂಬರ್‌ನಲ್ಲಿ ನಿರ್ದೇಶಿಸಿದೆ.

ಆದರೆ ಕೊಪ್ಪಳ ಜಿಲ್ಲೆಯ ಈ ತಾಲ್ಲೂಕಿನ ಗುಮಗೇರಿ ಗ್ರಾಮದಲ್ಲಿ ಇಬ್ಬರು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸದಸ್ಯೆಯರಾಗಿದ್ದಲ್ಲದೇ ರಾಜಕೀಯ ಪಕ್ಷಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದರಿಂದಾಗಿ ಆರು ತಿಂಗಳಿನಿಂದಲೂ ಈ ಇಬ್ಬರ ಗೌರವಧನ ತಡೆಹಿಡಿದಿರುವುದನ್ನು ಬಿಟ್ಟರೆ ಅವರ ಮೇಲೆ ಯಾವುದೇ ಕ್ರಮ ಜರುಗಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಧ್ಯವಾಗಿಲ್ಲ.

ಕಂದಕೂರು ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಯಲ್ಲಮ್ಮ ಸದಸ್ಯೆಯಾಗಿದ್ದರೆ ಕಳೆದ 20 ವರ್ಷಗಳಿಂದಲೂ ಗುಮಗೇರಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ.  ಅದೇ ರೀತಿ 2006 ರಿಂದ ಗುಮಗೇರಿ ಅಂಗನವಾಡಿ ಕಾರ್ಯಕರ್ತೆಯಾಗಿರುವ ಬಸಮ್ಮ ಎಂಬುವವರು ಸಹ ಕಂದಕೂರು ಗ್ರಾ.ಪಂ.ನಲ್ಲಿ ಬಿಎಸ್‌ಪಿ ಬೆಂಬಲಿತ ಸದಸ್ಯೆಯಾಗಿದ್ದು ಬಿಎಸ್‌ಪಿ ಜಿಲ್ಲಾ ಸಂಚಾಲಕ ಶಿವಪುತ್ರಪ್ಪ ಗುಮಗೇರಿ ಎಂಬವರ ಪತ್ನಿ.

ಕೇಂದ್ರದ ಆದೇಶ: ಈ ಹಿಂದೆ ಆದೇಶ ಹೊರಡಿಸಿದ್ದ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಬೇರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವುದನ್ನು ತಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಗ್ರಾ.ಪಂ. ಸದಸ್ಯರಾಗಿರುವ ಈ ಕಾರ್ಯಕರ್ತೆಯರಿಗೆ ಇಲಾಖೆ ಸ್ಥಳೀಯ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಆದರೆ ಈ ಕಾರ್ಯಕರ್ತೆಯರು ಯಥಾರೀತಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಚಿವರ ಹೇಳಿಕೆ: ಅಷ್ಟೇ ಅಲ್ಲ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಕಳಕಪ್ಪ ಬಂಡಿ, ಸದಸ್ಯರಾಗಿರುವ ಕಾರ್ಯಕರ್ತೆಯರನ್ನು ತೆರವುಗೊಳಿಸುವುದಾಗಿ ತಿಳಿಸಿದ್ದರು.
ಆದರೆ ಮೇಲಿನ ಈ ಯಾವ ಸೂಚನೆ ಆದೇಶಗಳೂ ಈ ಕಾರ್ಯಕರ್ತೆಯರ ಮೇಲೆ ಯಾವುದೇ ಪರಿಣಾಮ ಬೀರದಿರುವುದು ಅಚ್ಚರಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT