ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ

ಮೊಕದ್ದಮೆ ಹಿಂಪಡೆಯುವ ಸಚಿವ ಸಂಪುಟ ನಿರ್ಧಾರ ಪ್ರಶ್ನಿಸಿ ಪಿಐಎಲ್
Last Updated 18 ಡಿಸೆಂಬರ್ 2012, 19:32 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ  ಕೆಲವು ಕಾರ್ಯಕರ್ತರು ಹಾಗೂ ಶಾಸಕರಾದ ಕಾಂಗ್ರೆಸ್ಸಿನ ರಾಮಸ್ವಾಮಿ ಗೌಡ ಮತ್ತು ಜೆಡಿಎಸ್‌ನ ಸಿ.ಬಿ. ಸುರೇಶ್‌ಬಾಬು ಅವರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ನೋಟಿಸ್ ಜಾರಿಗೆ, ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

`ವಿಧಾನಸಭೆಗೆ ಚುನಾವಣೆ ಹತ್ತಿರ ಬರುತ್ತಿದೆ. ತನ್ನ ವಿದ್ಯಾರ್ಥಿ ಸಂಘಟನೆಯ ಹಿತ ಕಾಯುವ ಉದ್ದೇಶದಿಂದ ಬಿಜೆಪಿ ಸರ್ಕಾರ, ಕೆಲವು ಎಬಿವಿಪಿ ಕಾರ್ಯಕರ್ತರ ವಿರುದ್ಧ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದೆ. ಇದು ನ್ಯಾಯಾಂಗ ವ್ಯವಸ್ಥೆಯನ್ನೇ ಅಲುಗಾಡಿಸುವ ಪ್ರಯತ್ನ' ಎಂದು ವಕೀಲ ಎನ್.ಪಿ. ಅಮೃತೇಶ ಅವರು ಅರ್ಜಿ ಸಲ್ಲಿಸಿದ್ದರು.

ಮೊಕದ್ದಮೆ ಹಿಂಪಡೆಯುವ ನಿರ್ಧಾರವನ್ನು ಸೆಪ್ಟೆಂಬರ್ 6 ಮತ್ತು ನವೆಂಬರ್ 6ರಂದು ನಡೆದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಇದರ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಆನಂದ ಬೈರಾರೆಡ್ಡಿಮತ್ತು ಬಿ. ಮನೋಹರ್ ಅವರನ್ನೊಳಗೊಂಡ ರಜಾ ಕಾಲದ ವಿಭಾಗೀಯ ಪೀಠ ನಡೆಸಿತು. ಗುರುವಾರಕ್ಕೆ ವಿಚಾರಣೆ ಮುಂದೂಡಲಾಗಿದೆ.

ಗುಲ್ಬರ್ಗದಲ್ಲಿ ರಜಾ ಕಾಲದ ಪೀಠ- ನೋಟಿಸ್: ಹೈಕೋರ್ಟ್‌ನ ಗುಲ್ಬರ್ಗದ ಸಂಚಾರಿ ಪೀಠದಲ್ಲೂ ರಜಾ ಕಾಲದಲ್ಲಿ ತುರ್ತು ಅರ್ಜಿಗಳ ವಿಚಾರಣೆ ನಡೆಸಲು ಪ್ರತ್ಯೇಕ ನ್ಯಾಯಪೀಠ ಇರುವಂತೆ ವ್ಯವಸ್ಥೆ ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ವಕೀಲ ರೊದ್ದವೀರ ಶೆಟ್ಟಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಮತ್ತು ನ್ಯಾಯಮೂರ್ತಿ ಬಿ. ಮನೋಹರ್ ಅವರನ್ನು ಒಳಗೊಂಡ ಹೈ      ಕೋರ್ಟ್‌ನ ರಜಾ ಕಾಲದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT