ಗುರುವಾರ , ನವೆಂಬರ್ 21, 2019
26 °C

ಸರ್ಕಾರಿ ಶಾಲೆ ಮೂಲ ಸೌಕರ್ಯ ವೃದ್ಧಿಗೆ ಕ್ರಮ ಕೈಗೊಳ್ಳಲು ಸೂಚನೆ

Published:
Updated:

ಬೆಂಗಳೂರು: ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ, ಶಿಕ್ಷಕರು ಹಾಗೂ ಸಿಬ್ಬಂದಿ ಪ್ರಮಾಣ ಹೆಚ್ಚಿಸಲು ಅಗತ್ಯ ಜರುಗಿಸುವಂತೆ ಹೈಕೋರ್ಟ್ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ‘ಆ್ಯಂಟಿ ಕರಪ್ಷನ್ ಕೌನ್ಸಿಲ್ ಆಫ್ ಇಂಡಿಯಾ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹಣಕಾಸು ಕೊರತೆ ಇರುವುದರಿಂದ ಸರ್ಕಾರಿ ಶಾಲೆಗಳಲ್ಲಿ  ಮೂಲ ಸೌಕರ್ಯ ವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದರು. ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಣಕಾಸು ಕೊರತೆ ಕಾರಣಕ್ಕಾಗಿಯೇ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ ಎಂಬುದನ್ನು ಒಪ್ಪಲಾಗದು. ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ಪ್ರಮಾಣಕ್ಕೆ ಅನುಗುಣವಾಗಿ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ನಿರ್ದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಲಾಗಿದೆ.

‘ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಆಯ್ದ ಒಂದು ಸಾವಿರ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ಆರಂಭಿಸಲಾಗಿದೆ. ಸಾಧಕ-ಬಾಧಕ ಅರಿತು ಉಳಿದ ಶಾಲೆಗಳಿಗೂ ವಿಸ್ತರಿಸುವ ಕುರಿತು ತೀರ್ಮಾನಿಸಲಾಗುವುದು’ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

‘ಮಾಹಿತಿ ಸಿಂಧು ಯೋಜನೆಯಡಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2000–01ನೇ ಸಾಲಿನಿಂದ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ. 2016–17ನೇ ಸಾಲಿನಿಂದ ಶಿಕ್ಷಕರ ತಾಂತ್ರಿಕ ಜ್ಞಾನದ ಗುಣಮಟ್ಟ ಹೆಚ್ಚಿಸಲು ಟಿಎಎಲ್‌ಪಿ ಯೋಜನೆಯಡಿ 2,500 ಪ್ರೌಢಶಾಲೆಗಳ 11 ಸಾವಿರ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. 2020–21ನೇ ಸಾಲಿನಲ್ಲಿ 4,681 ಸರ್ಕಾರಿ ಶಾಲೆಗಳನ್ನು ಈ ಯೋಜನೆಯಡಿ ತರಲಾಗುವುದು’ ಎಂದೂ ತಿಳಿಸಲಾಗಿದೆ. ಅರ್ಜಿದಾರರ ಪರ ವಕೀಲೆ ಬಿ.ಸುಧಾ ವಾದ ಮಂಡಿಸಿದರು.

ಪ್ರತಿಕ್ರಿಯಿಸಿ (+)