ಶನಿವಾರ, ನವೆಂಬರ್ 16, 2019
21 °C

ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಜತೆಗೆ ನಗರ, ಗ್ರಾಮ ಮಟ್ಟದಲ್ಲಿ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ನಗರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಗ್ರಾಮೀಣ ಪ್ರದೇಶದ ನೈರ್ಮಲ್ಯ ಕುರಿತು ಜನರ ನಡವಳಿಕೆಯಲ್ಲಿ ಬದಲಾವಣೆ ಮೂಡಿಸುವುದೇ ಸಮೀಕ್ಷೆಯ ಪ್ರಮುಖ ಉದ್ದೇಶ. ಸಾರ್ವಜನಿಕ ಸ್ಥಳಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ಸಂತೆ ನಡೆಯುವ ಸ್ಥಳ, ಕುಡಿಯುವ ನೀರು ಸಂಗ್ರಹ ಸ್ಥಳಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಗ್ರಾಮದ ಮುಖ್ಯ ಬೀದಿಗಳು, ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲೆಡೆ ಸ್ವಚ್ಛತೆ ಮೊದಲ ಆದ್ಯತೆಯಾಗಬೇಕಿದೆ’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಬಿ.ಎಂ.ಲಕ್ಷಿದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಎಲ್.ಹರ್ಷವರ್ಧನ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)