ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2023: ಸಿನಿಮಾಕ್ಕೆ ಸಹಾಯಧನ, ಸಾಂಸ್ಕೃತಿಕ ಕ್ಷೇತ್ರಕ್ಕಿಲ್ಲ ಧನ

Published 7 ಜುಲೈ 2023, 23:30 IST
Last Updated 7 ಜುಲೈ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಕ್ಷೇತ್ರವು ಈ ಬಾರಿಯ ಬಜೆಟ್‌ನಲ್ಲಿಯೂ ಕಡೆಗಣಿಸಲ್ಪಟ್ಟಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬೆರಳಣಿಕೆಯಷ್ಟು ಕಾರ್ಯಕ್ರಮಗಳನ್ನು ಮಾತ್ರ ಸರ್ಕಾರ ರೂಪಿಸಿದೆ. ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆಯನ್ನು ಪುನರಾರಂಭಿಸುವುದಾಗಿ ಘೋಷಿಸಲಾಗಿದೆ. 

ಈ ಯೋಜನೆಯು ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿತ್ತು. ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡಲು ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಬೆಂಗಳೂರಿನಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸ ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುತ್ತದೆ ಎಂದು ಪ್ರಕಟಿಸಿದರು. 

2015–16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಚಿತ್ರನಗರಿ ಸ್ಥಾಪಿಸುವುದಾಗಿ ಸರ್ಕಾರ ಘೋಷಿಸಿತ್ತು. ಬಳಿಕ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಉದ್ದೇಶಿಸಲಾಗಿತ್ತು. ಚಿತ್ರನಗರಿಯನ್ನು ಎಲ್ಲಿ ಸ್ಥಾಪಿಸಬೇಕೆಂಬ ಚರ್ಚೆ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಡೆದಿದ್ದು, ಬೆಂಗಳೂರು, ಮೈಸೂರು, ಹೆಸರಘಟ್ಟ ನಂತರ ರಾಮನಗರದ ಪ್ರಸ್ತಾಪವೂ ಬಂದಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಚಿತ್ರನಗರಿಯನ್ನು ಮೈಸೂರಿನಲ್ಲೇ ಸ್ಥಾಪಿಸಬೇಕೆಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿತ್ತು. ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನೇತೃತ್ವದ ನಿಯೋಗ ಈ ಬಗ್ಗೆ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಿತ್ತು. ಅದರಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಿಸಲಾಗುವುದು. 

ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರುನಾಮಕರಣವಾಗಿ 2023ರ ನ.1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಹೀಗಾಗಿ, ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಇಡೀ ವರ್ಷ ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನರಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆ ಇದಾಗಿದೆ ಎಂದು ಹೇಳಾಗಿದೆ. ಆದರೆ, ಈ ಯೋಜನೆಗೆ ಸರ್ಕಾರವು ನಿಗದಿತ ಅನುದಾನ ಘೋಷಿಸಿಲ್ಲ.

ಎಂ.ಎಂ. ಕಲಬುರಗಿ ಹೆಸರಲ್ಲಿ ಟ್ರಸ್ಟ್:  ಸಾಹಿತಿ ಎಂ.ಎಂ. ಕಲಬುರಗಿ ಅವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿ ಈಗಾಗಲೇ 24 ಟ್ರಸ್ಟ್, ಪ್ರತಿಷ್ಠಾನಗಳು ಕಾರ್ಯನಿರ್ವಹಿಸುತ್ತಿವೆ. ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಾಹಿತ್ಯ ಹಾಗೂ ಪರಿಸರ ಸಂರಕ್ಷಣೆಯ ಚಿಂತನೆಗಳನ್ನು ಯುವಜನಾಂಗಕ್ಕೆ ಪರಿಚಯಿಸುವ ಚಟುವಟಿಕೆಗಳಿಗೆ ಅವರ ಹೆಸರಿನಲ್ಲಿರುವ ಟ್ರಸ್ಟ್‌ಗೆ ₹ 2 ಕೋಟಿ ಘೋಷಿಸಲಾಗಿದೆ. 

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಂಬರುವ ಬಜೆಟ್‌ನಲ್ಲಿಯೇ ₹ 25 ಕೋಟಿ ಅನುದಾನ ಘೋಷಿಸಬೇಕೆಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಮನವಿ ಮಾಡಿಕೊಂಡಿದ್ದರು. ಆದರೆ, ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿಲ್ಲ. ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಜೆಟ್‌ನಲ್ಲಿಯೇ ₹ 20 ಕೋಟಿ ಅನುದಾನ ಘೋಷಿಸಲಾಗಿತ್ತು. 

ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿರುವ ಕಲಾಗ್ರಾಮವನ್ನು ಥೀಮ್ ಪಾರ್ಕ್ ಆಗಿ ಅಭಿವೃದ್ಧಿ, ವಿಶ್ವ ಕನ್ನಡ ಸಮ್ಮೇಳನ ಸೇರಿ ವಿವಿಧ ಉತ್ಸವ, ಆಚರಣೆಗಳ ಬಗ್ಗೆ ಪ್ರಸ್ತಾಪಿಸಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT