ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಕೊಡುಗೆ: ಗರಿಗೆದರಿದ ವಿಮಾನ ನಿಲ್ದಾಣದ ಕನಸು

Last Updated 4 ಮಾರ್ಚ್ 2022, 11:24 IST
ಅಕ್ಷರ ಗಾತ್ರ

ದಾವಣಗೆರೆ: ವಿಮಾನ ನಿಲ್ದಾಣ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸುವುದು, ‘ಶಿಮುಲ್‌’ನಿಂದ ಪ್ರತ್ಯೇಕಗೊಳಿಸಿ ದಾವಣಗೆರೆ–ಚಿತ್ರದುರ್ಗ ಜಿಲ್ಲೆಗಳಿಗೆ ಪ್ರತ್ಯೇಕ ಹಾಲು ಒಕ್ಕೂಟ ನಿರ್ಮಾಣ, ಎಸ್‌ಡಿಆರ್‌ಎಫ್‌ ಕಂಪನಿ ಸ್ಥಾಪನೆ, ಭದ್ರಾ ಮೇಲ್ದಂಡೆ ಯೋಜನೆಗೆ ₹ 3,000 ಕೋಟಿ ಅನುದಾನ ಸೇರಿ ಕೆಲ ಯೋಜನೆಗಳನ್ನು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಇವುಗಳನ್ನು ಹೊರತುಪಡಿಸಿದರೆ ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ಜಿಲ್ಲೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಗಮನ ಸೆಳೆಯುವಂತಹ ವಿಶೇಷ ಕೊಡುಗೆಗಳೇನೂ ಸಿಕ್ಕಿಲ್ಲ.

ಮಧ್ಯ ಕರ್ನಾಟಕದ ಕೇಂದ್ರ ಬಿಂದುವಾದ ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಬಹು ದಿನಗಳ ಬೇಡಿಕೆಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಪ್ರಕಟಿಸಿರುವುದು ಜಿಲ್ಲೆಯ ಜನರ ಮನದಲ್ಲಿ ‘ವಿಮಾನ’ ಹಾರುವಂತೆ ಮಾಡಿದೆ.

ಶಿವಮೊಗ್ಗ–ದಾವಣಗೆರೆ–ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡಿದ್ದ ‘ಶಿಮುಲ್‌’ನಿಂದ ದಾವಣಗೆರೆಯನ್ನು ಬೇರ್ಪಡಿಸಿ ಪ್ರತ್ಯೇಕ ಹಾಲು ಒಕ್ಕೂಟ ನಿರ್ಮಿಸಬೇಕು ಎಂಬ ಬಹುದಿನಗಳ ಬೇಡಿಕೆಗೂ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಶಿಮೂಲ್‌ನಿಂದ ಬೇರ್ಪಡಿಸಿ ದಾವಣಗೆರೆ–ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟವನ್ನು ನಿರ್ಮಿಸಲಾಗುತ್ತಿದ್ದು, ಇದು ಜಿಲ್ಲೆಯಲ್ಲಿ ಹೈನುಗಾರಿಕೆಗೆ ಇನ್ನಷ್ಟು ಬಲ ತುಂಬಲಿದೆ.

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆಗಾಗಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ದಾವಣಗೆರೆಯಲ್ಲಿ ಒಂದು ಎಸ್‌ಡಿಆರ್‌ಎಫ್‌ ಕಂಪನಿಯನ್ನು ಸ್ಥಾಪಿಸಲಾಗುವುದು ಎಂದೂ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

ಚೆನ್ನೈ–ಬೆಂಗಳೂರು–ಮುಂಬೈ ಕಾರಿಡಾರ್‌ ವ್ಯಾಪ್ತಿಯಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುವುದು ಭವಿಷ್ಯದಲ್ಲಿ ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆ ಅನುಕೂಲವಾಗಲಿದೆ.

ಮೆಕ್ಕೆಜೋಳ ಹೆಚ್ಚು ಬೆಳೆಯುವ ಜಿಲ್ಲೆಯಾಗಿದ್ದ ದಾವಣಗೆರೆಯಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಕೃಷಿ ಸಚಿವರಾದ ಬಿ.ಸಿ. ಪಾಟೀಲ ಅವರ ತವರು ಕ್ಷೇತ್ರ ಹಿರೇಕೆರೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಿರುವುದು ಜಿಲ್ಲೆಯ ರೈತರಲ್ಲಿ ನಿರಾಸೆ ತಂದಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ₹ 3,000 ಕೋಟಿ ಅನುದಾನ ನೀಡಲಾಗುವುದು ಎಂದು ಘೋಷಿಸಲಾಗಿದ್ದು, ಈ ಯೋಜನೆಯಿಂದ ಜಿಲ್ಲೆಯ ಜಗಳೂರು ತಾಲ್ಲೂಕಿನ ಹಲವು ಕೆರೆಗಳನ್ನು ತುಂಬಿಸುವ ಯೋಜನೆಗೂ ಅನುಕೂಲವಾಗಲಿದೆ.

ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಹಾಸಿಗೆಗಳ ಸಾಮರ್ಥ್ಯವನ್ನು 50ರಿಂದ 100ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗಕ್ಕೆ ರಾಜ್ಯದಿಂದ ನೀಡಬೇಕಾಗಿರುವ ಅಗತ್ಯ ಅನುದಾನ ಒದಗಿಸಲಾಗುವುದು ಎಂದೂ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟು ₹ 80 ಕೋಟಿ ವೆಚ್ಚದಲ್ಲಿ ದಾವಣಗೆರೆ ಸೇರಿ 9 ಕಡೆ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ರಸ್ತೆ ಸುರಕ್ಷತಾ ನಿಧಿಯಡಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT