ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಿದ ಅಂಶಗಳು

Last Updated 17 ಫೆಬ್ರುವರಿ 2023, 9:46 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ತನ್ನ ಸಂಚಾರ ದಟ್ಟಣೆಯಿಂದ ಕುಖ್ಯಾತಿಗೂ ಒಳಗಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಟ್ರಾಫಿಕ್‌ ಸಮಸ್ಯೆಯ ನಿವಾರಣೆಯನ್ನು ಪ್ರಸ್ತಾಪಿಸಲಾಗಿದ್ದು, ಹಲವು ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.

ಬೆಂಗಳೂರಿನ ಪ್ರಮುಖ 75 ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸುವುದು, ಅಲ್ಲಿನ ಸಿಗ್ನಲ್‌ಗಳಿಗೆ ಕೃತಕ ಬುದ್ಧಿಮತ್ತೆ (Artificial Intelligence) ಅಳವಡಿಸುವುದು, ಕೆಲವು ರಸ್ತೆಗಳಿಗೆ ವೈಟ್‌ ಟಾಪಿಂಗ್‌ ಮಾಡುವುದು, ದುಸ್ತಿತಿಯಲ್ಲಿರುವ ರಸ್ತೆಗಳನ್ನು ಸರಿಪಡಿಸುವುದೂ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಪ್ರಕಟಿಸಿದೆ.

ಯಾವುದಾ ಕ್ರಮಗಳು?
ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು ₹150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿಯೂ, ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆ ಬಳಕೆ ಮಾಡಿಕೊಂಡು ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವುದಾಗಿಯೂ, ತಡೆರಹಿತ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡುವುದಾಗಿಯೂ ಸರ್ಕಾರ ತಿಳಿಸಿದೆ.

ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ ₹350 ಕೋಟಿ ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿ.ಇ.ಎಲ್ ರಸ್ತೆಯ ವರೆಗೆ ಇಂಟೆಗ್ರೇಟೆಡ್‌ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು ಎಂದು ಹೇಳಲಾಗಿದೆ.

₹1,00೦ ಕೋಟಿ ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು ₹450 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಲ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ ₹300 ಕೋಟಿ ಒದಗಿಸಲಾಗುವುದು ಎಂದೂ ಸರ್ಕಾರ ಬಜೆಟ್‌ನಲ್ಲಿ ಭರವಸೆ ನೀಡಿದೆ.

ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್‌ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಂಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು ₹300 ಕೋಟಿ ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಲಾಗಿದೆ.

ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ಜಂಕ್ಷನ್‌– ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಡುವಿನ 58.19 ಕಿ.ಮೀ.ಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ನಡೆಯುತ್ತಿದೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ. ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ. ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿ.ಮೀ. ಉದ್ದದ 31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಕೇಂದ್ರ ಸರ್ಕಾರದ ಅನುಮತಿ ದೊರಕಿದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಲು ₹13,139 ಕೋಟಿ ವೆಚ್ಚದಲ್ಲಿ 288 ಕಿ.ಮೀ. ಉದ್ದದ ಸ್ಯಾಟಿಲೈಟ್‌ ಟೌನ್‌ ರಿಂಗ್‌ ರೋಡ್‌ ಅನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT