ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಬಜೆಟ್‌‌ನಲ್ಲಿ ಪಶುಸಂಗೋಪನೆ, ಮೀನುಗಾರಿಕೆಗೆ ಸವಲತ್ತುಗಳ ಮಹಾಪೂರ

Last Updated 5 ಮಾರ್ಚ್ 2020, 10:17 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಬಾರಿ ಬಜೆಟ್‌‌ನಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ವಲಯಕ್ಕೆ ಹಲವು ಸೌಲಭ್ಯಗಳನ್ನು ನೀಡಿದ್ದು, ಈ ಎರಡೂ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲು ಕ್ರಮ ಕೈಗೊಂಡಿದ್ದಾರೆ.

ಪಶುಸಂಗೋಪನಾ ವಲಯ

ಪಶುಸಂಗೋಪನಾ ಇಲಾಖೆಯ ಆರ್ಥಿಕ ಚಟುವಟಿಕೆಗಳ ವಿಸ್ತರಣೆಗೆ ಸಮೀಕ್ಷೆ ನಡೆಸಿ ಸಮಗ್ರ ನೀತಿ ರಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ವಿದೇಶಿ ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳುವ ಸಮಗ್ರ ವರಾಹ ಅಭಿವೃದ್ಧಿ ಯೋಜನೆಗೆ ₹ 5 ಕೋಟಿ ಅನುದಾನ ನೀಡಲು ಬಜೆಟ್ ನಲ್ಲಿ ಮೀಸಲಿಡಲಾಗಿದೆ. ಇದಲ್ಲದೆ, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕುಕ್ಕುಟ ತ್ಯಾಜ್ಯ ಸಂಸ್ಕರಣೆ ಮತ್ತು ಮೌಲ್ಯವರ್ಧನ ಕೇಂದ್ರ ಸ್ಥಾಪನೆ. ಲಿಂಗ ನಿರ್ಧಾರಿತ ವಿರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಮೂಲಕ ಕರುಗಳ ಜನನ ಹೆಚ್ಚಿಸಲು ₹ 2ಕೋಟಿ ಅನುದಾನ. ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ ₹1.5 ಕೋಟಿ ವೆಚ್ಚದಲ್ಲಿ "ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ" ಜಾರಿ. "ಮಹಿಳಾ ಮೀನುಗಾರರ ಸಬಲೀಕರಣ" ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ಅನುದಾನ ನೀಡಲು ಬಜೆಟ್ ತೀರ್ಮಾನಿಸಲಾಗಿದೆ.

ಮೀನುಗಾರಿಕೆಗೆ ಸವಲತ್ತುಗಳ ಮಹಾಪೂರ

ಕರಾವಳಿ ಜಲಕೃಷಿ ಎಂದೇ ಕರೆಯಲ್ಪಡುವ ಹಿನ್ನೀರು ಜಲಕೃಷಿಯು ದೇಶದ ಮತ್ತು ರಾಜ್ಯದ ಒಟ್ಟಾರೆ ಮೀನುಗಾರಿಕೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಹಿನ್ನೀರು ಮೀನುಗಾರಿಕೆಯನ್ನು ಸದೃಢಗೊಳಿಸಲು ಮುಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರವನ್ನು ಮುಲ್ಕಿಯಲ್ಲಿ ₹ 2ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಮಂಗಳೂರು ತಾಲೂಕು ಕುಳಾಯಿಯಲ್ಲಿ ಹೊಸ ಮೀನುಗಾರಿಕೆ ಬಂದರು ನಿರ್ಮಿಸಲಾಗುತ್ತಿದೆ. ಈ ಪ್ರದೇಶದ ರಫ್ತು ವಹಿವಾಟು ಹೆಚ್ಚಿಸುವ ಉದ್ದೇಶದಿಂದ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರವನ್ನು ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ₹12.50 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದಿದ್ದಾರೆ.

ಮೀನುಗಾರಿಕೆ ಬಂದರು ಮತ್ತು ಮೀನುಗಾರಿಕೆ ಇಳಿದಾಣಗಳು, ಸಶಕ್ತ ಮೀನುಗಾರಿಕೆ ಪೂರಕ ಸೌಕರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ ₹181 ಕೋಟಿ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಮೀನುಹಗಾರಿಕೆ ಬಂದರು ನಿರ್ಮಿಸುವುದಾಗಿ ಬಜೆಟ್‌‌ನಲ್ಲಿ ತಿಳಿಸಲಾಗಿದೆ.

ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರನ್ನು ₹ 130 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ₹4 ಕೋಟಿ ಒದಿಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ತೆಂಗನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ (100 ಮೀಟರ್ ) ₹ 5 ಕೋಟಿ ಒದಗಿಸಲು ಕ್ರಮಕೈಗೊಳ್ಳಲಾಗುವುದು. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಿರ್ಮಿಸುತ್ತಿರುವ ಹೊರ ಬಂದರಿನ 2ನೇ ಹಂತದ ಕಾಮಗಾರಿಗಳನ್ನು ₹ 85 ಕೋಟಿ ವೆಚ್ಚದಲ್ಲಿ ಕೈಗೊಂಡು ಮೀನುಗಾರರ ಉಪಯೋಗಕ್ಕೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಉಡುಪಿ ಜಿಲ್ಲೆಯ ಕೊಡೇರಿ ಮೀನುಗಾರಿಕೆ ಬಂದರಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ₹ 2 ಕೋಟಿಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT