ನವದೆಹಲಿ: ಟಾಟಾ ಸಮೂಹವು ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸಲಿದ್ದು, ಇದು ವಿಶ್ವದ ಅತಿದೊಡ್ಡ ವಿಮಾನಯಾನ ಒಪ್ಪಂದವಾಗಿದೆ ಎಂದು ವರದಿಯಾಗಿದೆ.
ಈ ಒಪ್ಪಂದವು 40 A350 (ವೈಡ್ ಬಾಡಿ) ದೀರ್ಘ ಶ್ರೇಣಿಯ ವಿಮಾನಗಳು ಮತ್ತು 210 ಕಿರಿದಾದ (ಸಣ್ಣ ದೇಹದ) ವಿಮಾನಗಳನ್ನು ಖರೀದಿಸಲು ಟಾಟಾ ಸಮೂಹದ ಏರ್ ಇಂಡಿಯಾ ಮುಂದಾಗಿದೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರತನ್ ಟಾಟಾ, ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುಯಲ್ ಆಗಿ ನಡೆದ ಕಾರ್ಯಕ್ರಮದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ.
ಇದೇ ವೇಳೆ ಮಾತನಾಡಿದ ಏರ್‌ಬಸ್ ಮುಖ್ಯ ಕಾರ್ಯನಿರ್ವಾಹಕ ಗುಯಿಲೌಮ್ ಫೌರಿ, ‘ಏರ್ ಇಂಡಿಯಾದ ಪುನರುಜ್ಜೀವನಕ್ಕೆ ಸಹಾಯ ಮಾಡಲು ಏರ್‌ಬಸ್‌ಗೆ ಇದು ಐತಿಹಾಸಿಕ ಕ್ಷಣವಾಗಿದೆ’ ಎಂದು ಬಣ್ಣಿಸಿದ್ದಾರೆ.
ಒಟ್ಟಾರೆಯಾಗಿ ಏರ್ ಇಂಡಿಯಾ 470 ವಿಮಾನಗಳನ್ನು ಖರೀದಿಸಲು ಉದ್ದೇಶಿಸಿದ್ದು, ಈ ಪೈಕಿ 220 ವಿಮಾನಗಳನ್ನು ಬೋಯಿಂಗ್ ಕಂಪನಿಯಿಂದ ಖರೀದಿಸಲಿದೆ ಎನ್ನಲಾಗಿದೆ. ಏರ್‌ಬಸ್‌ನಿಂದ 250 ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ ಶುಕ್ರವಾರ (ಫೆ 10) ಏರ್ ಇಂಡಿಯಾ ಕಂಪನಿಯು ಒಪ್ಪಂದ ಮಾಡಿಕೊಂಡರೆ, ಬೋಯಿಂಗ್ ಕಂಪನಿಯೊಂದಿಗೆ ಜನವರಿ 27ರಂದು ಒಪ್ಪಂದ ನಡೆದಿತ್ತು ಎಂದು ಮೂಲಗಳು ತಿಳಿಸಿವೆ.
‘ಈ ಒಪ್ಪಂದವು ಭಾರತ ಮತ್ತು ಫ್ರಾನ್ಸ್ ನಡುವಿನ ಸೌಹಾರ್ದ ಸಂಬಂಧದಲ್ಲಿ ಒಂದು ಮೈಲಿಗಲ್ಲು’ ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.