ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕದಲ್ಲಿ 3 ಇಎಸ್‌ಐ ಆಸ್ಪತ್ರೆ ನಿರ್ಮಾಣ

Published 6 ಮಾರ್ಚ್ 2024, 14:39 IST
Last Updated 6 ಮಾರ್ಚ್ 2024, 14:39 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ₹1,128.21 ಕೋಟಿ ವೆಚ್ಚದಡಿ ಏಳು ಇಎಸ್‌ಐ ಆಸ್ಪತ್ರೆಗಳ ನಿರ್ಮಾಣಕ್ಕೆ ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‌ಐಸಿ) ಅನುಮೋದನೆ ನೀಡಿದೆ.

ಕೇಂದ್ರ ಕಾರ್ಮಿಕ ಕಾರ್ಯದರ್ಶಿ ಸುಮಿತಾ ದಾವ್ರಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ನಿಗಮದ ಸ್ಥಾಯಿಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಹಾರೋಹಳ್ಳಿ, ನರಸಾಪುರ ಹಾಗೂ ಬೊಮ್ಮಸಂದ್ರದಲ್ಲಿ ಇಎಸ್‌ಐ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಉಳಿದಂತೆ ಉತ್ತರ ಪ್ರದೇಶದಲ್ಲಿ 2, ಮಧ್ಯಪ್ರದೇಶ ಹಾಗೂ ಒಡಿಶಾದಲ್ಲಿ ತಲಾ ಒಂದು ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದೆ.

ಈ ಹೊಸ ಆಸ್ಪತ್ರೆಗಳ ನಿರ್ಮಾಣದಿಂದ ರೋಗಿಗಳ ಸೇವೆಗೆ ಹೆಚ್ಚುವರಿಯಾಗಿ 800 ಹಾಸಿಗೆಗಳು ದೊರೆಯಲಿವೆ ಎಂದು ಹೇಳಿದೆ.

ದೇಶದಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಜಿಲ್ಲಾವಾರು ಇಎಸ್‌ಐ ಯೋಜನೆಯಡಿ ವಿಸ್ತರಣೆ ಹಾಗೂ ವಿಮಾ ಸೌಲಭ್ಯ ಹೊಂದಿದ ಕಾರ್ಮಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಸದ್ಯ ದೇಶದ 666 ಜಿಲ್ಲೆಗಳು ಈ ಯೋಜನೆಗೆ ಒಳಪಟ್ಟಿದ್ದು, 3.43 ಕೋಟಿ ಕಾರ್ಮಿಕರು ಇಎಸ್‌ಐ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT