ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯ ಲಾಭ ಭಾರತೀಯ ರೈತರಿಗೆ ಲಭಿಸುವ ಉದ್ದೇಶದಿಂದ ಈರುಳ್ಳಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ರಫ್ತು ದರವನ್ನು (ಎಂಇಪಿ) ಶುಕ್ರವಾರದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ರದ್ದುಪಡಿಸಿದೆ.
ಈ ಮೊದಲು ಕನಿಷ್ಠ ರಫ್ತು ದರವನ್ನು (ಎಂಇಪಿ) ಪ್ರತಿ ಟನ್‌ಗೆ ₹ 46,154ಕ್ಕೆ (550 ಡಾಲರ್) ನಿಗದಿಪಡಿಸಿತ್ತು. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಈ ದರಕ್ಕಿಂತ ಕಡಿಮೆ ದರದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಿರಲಿಲ್ಲ.
ದೇಶದಲ್ಲಿ ಈರುಳ್ಳಿ ಹೆಚ್ಚಾಗಿ ಬೆಳೆಯುವ ಪ್ರಮುಖ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ, ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ.
ಈ ಆದೇಶದ ರದ್ದಿನಿಂದಾಗಿ ಸರಕುಗಳನ್ನು ರಫ್ತು ಮಾಡಲು ಸಹಕಾರಿಯಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್‌ಟಿ) ತಿಳಿಸಿದೆ.