ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಣಾಮ ನಿಭಾಯಿಸಲು ಕೇಂದ್ರದಿಂದ ಕ್ರಮ: ಗೋಯಲ್

ಆನ್‌ಲೈನ್‌ ದೈತ್ಯರಿಂದ ಸಣ್ಣ ವ್ಯಾಪಾರಿಗಳ ಮೇಲೆ ಪ್ರಭಾವ
Last Updated 10 ಆಗಸ್ಟ್ 2021, 15:08 IST
ಅಕ್ಷರ ಗಾತ್ರ

ನವದೆಹಲಿ: ಆನ್‌ಲೈನ್‌ ಜಗತ್ತಿನ ದೈತ್ಯ ಕಂಪನಿಗಳು ಸಣ್ಣ ವ್ಯಾಪಾರಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ವಿಚಾರವಾಗಿ ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರು ಮಂಗಳವಾರ ಕಳವಳ ವ್ಯಕ್ತಪಡಿಸಿದ್ದಾರೆ. ದೀರ್ಘಾವಧಿಯಲ್ಲಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಒಳ್ಳೆಯ ಗುಣಮಟ್ಟದ ವಸ್ತುಗಳು ಸಿಗುವಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ನ್ಯಾಯಸಮ್ಮತವಲ್ಲದ ರೀತಿಯಲ್ಲಿ ವ್ಯಾಪಾರ ನಡೆಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ ಕಂಪನಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಆನ್‌ಲೈನ್‌ ಮೂಲಕ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳ ಕೈಯಲ್ಲಿ ಹಣದ ಶಕ್ತಿ ಇರುವ ಕಾರಣ ಅವರ ಪ್ರಭಾವ ಹೆಚ್ಚುತ್ತಿದೆ. ಸಣ್ಣ ಪ್ರಮಾಣದ ವ್ಯಾಪಾರಿಗಳು ಅಂಗಡಿ ಬಾಗಿಲು ಹಾಕುತ್ತಿದ್ದಾರೆ ಎಂದು ಸಚಿವರು ಲೋಕಸಭೆಯಲ್ಲಿ ಹೇಳಿದ್ದಾರೆ. ಈ ವಿಚಾರವಾಗಿ ಭಾರತದಲ್ಲಿ ಮಾತ್ರವಲ್ಲದೆ, ಜಗತ್ತಿನ ಎಲ್ಲೆಡೆಯೂ ಕಳವಳ ವ್ಯಕ್ತವಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಗೋಯಲ್ ಅವರು ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯಗಳ ಹೊಣೆಯನ್ನು ಹೊತ್ತಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ, ಗ್ರಾಹಕರ ಸಂರಕ್ಷಣೆ (ಇ–ವಾಣಿಜ್ಯ) ತಿದ್ದುಪಡಿ ನಿಯಮಗಳಿಗೆ ಸಂಬಂಧಿಸಿದ ಪೂರಕ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಭಾರತದಲ್ಲಿ ಸರಿಸುಮಾರು ಆರು ಕೋಟಿ ಸಣ್ಣ ವ್ಯಾಪಾರಸ್ಥರು ಇದ್ದಾರೆ. ಇವರು ಅಂದಾಜು 12 ಕೋಟಿಯಿಂದ 13 ಕೋಟಿ ಜನರಿಗೆ ಉದ್ಯೋಗ ನೀಡಿದ್ದಾರೆ. ಆನ್‌ಲೈನ್‌ ಮೂಲಕ ವಸ್ತುಗಳನ್ನು ಮಾರಾಟ ಮಾಡುವ ಕಂಪನಿಗಳು ಹೆಚ್ಚಿನ ಪ್ರಭಾವ ಹೊಂದಿರುತ್ತವೆ. ಕಾಲಕ್ರಮೇಣ, ವಸ್ತುಗಳಿಗೆ ಹೆಚ್ಚಿನ ಬೆಲೆ ನೀಡಿ ಖರೀದಿಸಬೇಕಾದ ಅನಿವಾರ್ಯ ಗ್ರಾಹಕರಿಗೆ ಎದುರಾಗಬಹುದು ಎಂದು ಸಚಿವರು ಹೇಳಿದ್ದಾರೆ.

ಸಿಸಿಐ ತನಿಖೆಯನ್ನು ನಿಲ್ಲಿಸಲು ಕೆಲವು ಕಂಪನಿಗಳು ಯತ್ನಿಸಿದ್ದವು. ‘ಆದರೆ, ಸಿಸಿಐ ತನಿಖೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಇದು ನನಗೆ ಸಂತಸ ತಂದಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT