ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾರತ್‌ ಬ್ರ್ಯಾಂಡ್‌’ ಅಕ್ಕಿಗೆ ₹29 ದರ ನಿಗದಿ

Published 2 ಫೆಬ್ರುವರಿ 2024, 13:57 IST
Last Updated 2 ಫೆಬ್ರುವರಿ 2024, 13:57 IST
ಅಕ್ಷರ ಗಾತ್ರ

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರದಿಂದ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್‌ ಬ್ರ್ಯಾಂಡ್‌’ ಅಕ್ಕಿ ಮಾರಾಟ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರವು ಶುಕ್ರವಾರ ತಿಳಿಸಿದೆ.

ಈಗಾಗಲೇ, ‘ಭಾರತ್‌ ಬ್ರ್ಯಾಂಡ್‌’ ಗೋಧಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಪ್ರತಿ ಒಂದು ಕೆ.ಜಿ ಅಕ್ಕಿಗೆ ₹29 ದರ ನಿಗದಿಪಡಿಸಲಾಗಿದ್ದು, 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್‌ಗಳಲ್ಲಿ ದೊರೆಯಲಿದೆ ಎಂದು ವಿವರಿಸಿದೆ. 

ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಿದೆ. ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯುತ್ತದೆ ಎಂದು ತಿಳಿಸಿದೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ 14.5 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇ 15.5ರಷ್ಟು ಅಕ್ಕಿ ದರ ಏರಿಕೆಯಾಗಿದೆ. ಬೆಲೆ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ, ದಾಸ್ತಾನು ಮಾಡಿರುವ ಅಕ್ಕಿ ಮತ್ತು ಭತ್ತದ ಪ್ರಮಾಣವನ್ನು ವರ್ತಕರು, ಗಿರಣಿ ಮಾಲೀಕರು ಬಹಿರಂಗಪಡಿಸಬೇಕು ಎಂದು ಸೂಚಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್‌ ಚೋಪ್ರಾ, ‘ಅಕ್ಕಿ ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗುವವರೆಗೂ ಈ ನಿರ್ಬಂಧ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.

ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‌ನಷ್ಟು ಅಕ್ಕಿಯನ್ನು ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT