ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಗವಾಕ್ಷಿ ಅನುಮೋದನಾ ಸಭೆ: ₹6,407 ಕೋಟಿ ಹೂಡಿಕೆಗೆ ಒಪ್ಪಿಗೆ

33,771 ಉದ್ಯೋಗ ಸೃಷ್ಟಿ ನಿರೀಕ್ಷೆ
Published 10 ಫೆಬ್ರುವರಿ 2024, 12:41 IST
Last Updated 10 ಫೆಬ್ರುವರಿ 2024, 12:41 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ 143ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆ ನಡೆಯಿತು.

ಒಟ್ಟು ₹6,407.82 ಕೋಟಿ ಬಂಡವಾಳ ಹೂಡಿಕೆಯ 128 ಯೋಜನೆಗಳಿಗೆ ಸಭೆಯು ಅನುಮೋದನೆ ನೀಡಿದೆ. ಇದರಿಂದ 33,771 ಮಂದಿಗೆ ಉದ್ಯೋಗಾವಕಾಶ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ- ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆಗೆ ಉತ್ತೇಜನ ನೀಡಲು ತೀರ್ಮಾನಿಸಿದೆ. 

ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ₹485 ಕೋಟಿ ಬಂಡವಾಳದ ಯಾಂತ್ರೀಕೃತ ಎರಕ ಹೊಯ್ಯುವ ಘಟಕ ಸ್ಥಾಪಿಸಲಾಗುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33 ಕೋಟಿ ಮೊತ್ತದ ವಿಜ್ಞಾನ, ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಮೈಸೂರು ಜಿಲ್ಲೆಯಲ್ಲಿ ₹415 ಕೋಟಿ ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ಸದಸ್ಯ ಡಾ.ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಜರಿದ್ದರು. 

ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ಶಿಕ್ಷಣ- ಸಂಶೋಧನಾ ಸಂಸ್ಥೆಗಳ ಸ್ಥಾಪನೆಗೆ ಆದ್ಯತೆ ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣಕ್ಕೂ ಒತ್ತು

ಬೃಹತ್‌ ಮಧ್ಯಮ ಯೋಜನೆಗೆ ಒತ್ತು

₹50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೂ ಸಭೆಯು ಅನುಮೋದನೆ ನೀಡಿದೆ. ಇವುಗಳಿಂದ ರಾಜ್ಯದಲ್ಲಿ ₹4230.64 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 24846 ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ. ₹15 ಕೋಟಿಯಿಂದ ₹50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಇವುಗಳಿಂದ ₹2056.68 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 8425 ಜನರಿಗೆ ಉದ್ಯೋಗ ದೊರೆಯಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗಳಿಗೂ ಅನುಮೋದನೆ ದೊರೆತಿದೆ. ಇದರಿಂದ ₹120.50 ಕೋಟಿ ಬಂಡವಾಳ ಹೂಡಿಕೆ ಆಗಲಿದ್ದು 500 ಜನರಿಗೆ ಉದ್ಯೋಗ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT