ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಎಸ್‌ಎಂಇ ಅಭಿವೃದ್ಧಿಗೆ ನಿರ್ಲಕ್ಷ್ಯ: ಕಾಸಿಯಾ

Published 16 ಫೆಬ್ರುವರಿ 2024, 23:12 IST
Last Updated 16 ಫೆಬ್ರುವರಿ 2024, 23:12 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳ (ಎಂಎಸ್‌ಎಂಇ) ಅಭಿವೃದ್ಧಿಗೆ ಏನನ್ನೂ ನೀಡಿಲ್ಲ. ಈ ವಲಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಪ್ರತಿಕ್ರಿಯಿಸಿದೆ. 

ಆದರೂ ಕೃಷಿ, ಶಿಕ್ಷಣ, ಕೌಶಲ ಅಭಿವೃದ್ಧಿ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಚಿಂತನೆಯ ಅಭಿವೃದ್ಧಿ ಆಯವ್ಯಯ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಕೈಗಾರಿಕಾ ವಸಾಹತುಗಳ ಉನ್ನತೀಕರಣದ ಪ್ರಸ್ತಾವನೆಯನ್ನು ಸ್ವಾಗತಿಸುತ್ತೇವೆ ಎಂದು ಕಾಸಿಯಾ ಅಧ್ಯಕ್ಷ ಸಿ.ಎ. ಶಶಿಧರ ಶೆಟ್ಟಿ ಹೇಳಿದ್ದಾರೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಐಪಿಒ ವೆಚ್ಚಗಳಿಗೆ ಸಹಾಯಧನ, ಎಲೆಕ್ಟ್ರಾನಿಕ್‌ ವೇದಿಕೆಯಲ್ಲಿ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಭಾಗವಹಿಸುವಿಕೆ ಬಗ್ಗೆ ಮುಖ್ಯಮಂತ್ರಿ ಅವರು ಪ್ರಸ್ತಾಪಿಸಿದ್ದಾರೆ. ಇದು ಎಂಎಸ್‌ಎಂಇಗಳಿಗೆ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳಿಂದ ಬರಬೇಕಾದ ಬಾಕಿಯನ್ನು ಕಾಲಮಿತಿಯೊಳಗೆ ಪಡೆಯಲು ಅನುಕೂಲವಾಗಲಿದೆ. ಇದು ಎಂಎಸ್‌ಎಂಇ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಯವ್ಯಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಸೇರಿದಂತೆ  ಇತರೆ ಜಿಲ್ಲೆಗಳಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಕಾಸಿಯಾ ಸ್ವಾಗತಿಸುತ್ತದೆ ಎಂದಿದ್ದಾರೆ.

ಎಲೆಕ್ಟ್ರಿಕಲ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳು, ಸಾರ್ವಜನಿಕ ಸಾರಿಗೆಯ ವಿವಿಧ ವಿಧಾನಗಳ ಏಕೀಕರಣ, ತುಮಕೂರಿನವರೆಗೆ ಮೆಟ್ರೊ ವಿಸ್ತರಣೆ, ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಸುರಂಗ ಮಾರ್ಗಗಳ ನಿರ್ಮಾಣ ಸೇರಿದಂತೆ ಆರ್ಥಿಕತೆ ಬೆಳವಣಿಗೆಗೆ ಸಹಕಾರಿಯಾಗುವಂತಹ ಪ್ರಸ್ತಾಪಗಳನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಅವರು ನೂತನ ಕೈಗಾರಿಕಾ ನೀತಿಯನ್ನು ರೂಪಿಸುವಾಗಲಾದರೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT